ಬೆಳಗಾವಿ : ಬಿಜೆಪಿ ಸರ್ಕಾರ ಇಂದಿರಾ ಕ್ಯಾಂಟೀನ್ ಹೆಸರನ್ನು ಬದಲಾವಣೆ ಮಾಡುವ ಪ್ರಯತ್ನಕ್ಕೆ ಕೈ ಹಾಕಿದ್ರೆ ಕಾಂಗ್ರೆಸ್ ಪಕ್ಷದಿಂದ ಉಗ್ರ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ತಿಳಿಸಿದರು.
ಗೋಕಾಕ್‌ನ ಹಿಲ್ ಗಾರ್ಡನ್ ಕಚೇರಿಯಲ್ಲಿ ಮಾತನಾಡಿದ ಅವರು, ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರು ಬಡವರ ಪರವಾಗಿ ಕೆಲಸ ಮಾಡಿದವರು. ಹಿಂದುಳಿದ ವರ್ಗದ ಜನರಿಗಾಗಿಯೇ ತಮ್ಮ ಜೀವನ ಮುಡಿಪಾಗಿಟ್ಟದ್ದಾರೆ.
ಹೀಗಾಗಿ, ಕಾಂಗ್ರೆಸ್ ಸರ್ಕಾರ ಇಂದಿರಾ ಕ್ಯಾಂಟೀನ್ ಎಂದು ಹೆಸರು ಇಟ್ಟಿದೆ. ಆದರೆ, ಬಿಜೆಪಿ ನಾಯಕರು ಅದನ್ನು ತೆಗೆದು ಹಾಕುವ ನಿರ್ಧಾರ ಸರಿಯಲ್ಲ. ತಪ್ಪು ತೀರ್ಮಾನದಿಂದ ಹಿಂದೆ ಸರಿಯಬೇಕು ಎಂದರು.
ಈಗಾಗಲೇ ಕಾಂಗ್ರೆಸ್ ಪಕ್ಷದ ಅಧ್ಯಕ್ಷರು, ನಾಯಕರು ಎಲ್ಲರೂ ಮಾತನಾಡಿದ್ದೇವೆ. ವಿರೋಧದ ನಡುವೆಯೂ ಇಂದಿರಾ ಕ್ಯಾಂಟೀನ್ ಹೆಸರು ಬದಲಾವಣೆಗೆ ಮುಂದಾದರೆ ಕಾಂಗ್ರೆಸ್ ಪಕ್ಷದಿಂದ ಉಗ್ರ ಪ್ರತಿಭಟನೆ ಮಾಡಲಿದ್ದೇವೆ ಎನ್ನುವ ಮೂಲಕ ಬಿಜೆಪಿ ಸರ್ಕಾರಕ್ಕೆ ಎಚ್ಚರಿಸಿದರು.
ಕ್ರೀಡೆಗೆ ಅನುದಾನ ಹೆಚ್ಚಿಸಲಿ :ಬಿಜೆಪಿ ಕೇಂದ್ರ ಸರ್ಕಾರ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸಲು ಅನುದಾನವನ್ನು ಪ್ರತಿವರ್ಷ ಹಂತ ಹಂತವಾಗಿ ಹೆಚ್ಚಿಸಬೇಕು. ಕ್ರೀಡಾಪಟುಗಳಿಗೆ ನೀಡುವ ಪ್ರೋತ್ಸಾಹ ಧನವನ್ನು ಸರ್ಕಾರ ಗಣನೀಯವಾಗಿ ಕಡಿತಗೊಳಿಸುವುದು ಸರಿಯಲ್ಲ. ಹೀಗೆ ಮಾಡುವುದರಿಂದ ಕ್ರೀಡೆಯ ಬಗ್ಗೆ ನಿರ್ಲಕ್ಷ್ಯ ತೋರಿದಂತಾಗುತ್ತದೆ ಎಂದು ಬೇಸರ ವ್ಯಕ್ತಪಡಿಸಿದರು.