ಬೆಳಗಾವಿ:ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಪಾರದರ್ಶಕ ತನಿಖೆಗೆ ಆಗ್ರಹಿಸಿ ಅವರ ಪತ್ನಿ ರಾಜ್ಯಪಾಲರಿಗೆ ಮನವಿ ಮಾಡಿದ್ದಾರೆ. ಹಿಂಡಲಗಾ ಗ್ರಾಮ ಪಂಚಾಯತಿ ವ್ಯಾಪ್ತಿಯ ಸಮರ್ಥನಗರದ ನಿವಾಸಿ ಮೃತ ಸಂತೋಷ ಪತ್ನಿ ರೇಣುಕಾ ಪಾಟೀಲ್ ರಾಜ್ಯಪಾಲರಿಗೆ ಪತ್ರದ ಮೂಲಕ ಒತ್ತಾಯಿಸಿದ್ದಾರೆ.
ರಾಜ್ಯಪಾಲರಿಗೆ ಬರೆದ ಪತ್ರದಲ್ಲಿ ಸಂತೋಷ್ ಆತ್ಮಹತ್ಯೆ ಪ್ರಕರಣದ ತನಿಖೆಯ ಬಗ್ಗೆ ಅನುಮಾನ ವ್ಯಕ್ತಪಡಿಸಿರುವ ಕುಟುಂಬಸ್ಥರು, ಮಾಜಿ ಸಚಿವ ಈಶ್ವರಪ್ಪನವರ ನಿರ್ದೇಶನದಂತೆ ತನಿಖೆ ನಡೆಯುತ್ತಿದೆ ಎಂದು ಆರೋಪಿಸಿದ್ದಾರೆ.
"ಕೇವಲ 15 ದಿನದಲ್ಲೇ ಪ್ರಕರಣದಲ್ಲಿ ಆರೋಪ ಮುಕ್ತನಾಗಿ ಬರುತ್ತೇನೆಂದು ಕೆ.ಎಸ್.ಈಶ್ವರಪ್ಪ ಹೇಳಿಕೆ ನೀಡಿದ್ದರು. ಅಲ್ಲದೆ ಅವರು ತನಿಖೆಯ ದಿಕ್ಕು ತಪ್ಪಿಸುತ್ತಿದ್ದಾರೆ. ಪೊಲೀಸ್ ಅಧಿಕಾರಿಗಳು ಪ್ರಕರಣದ ಪ್ರತಿಹಂತದ ತನಿಖೆಯನ್ನೂ ಸೋರಿಕೆ ಮಾಡಿ ಈಶ್ವರಪ್ಪನವರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕೇಸ್ ಮುಚ್ಚಿಹಾಕುವ ಹುನ್ನಾರ ನಡೆಸಿದ್ದಾರೆ. ಇದರಿಂದಾಗಿಯೇ ಈಶ್ವರಪ್ಪ ಬಹಿರಂಗವಾಗಿ ಹೇಳಿಕೆ ಕೊಡುತ್ತಿದ್ದಾರೆ. ಈಶ್ವರಪ್ಪರ ಮಾತುಗಳನ್ನು ಗಮನಿಸಿದರೆ ಅವರ ನಿರ್ದೇಶನದಂತೆಯೇ ತನಿಖೆ ನಡೆಯುತ್ತಿದೆ ಎಂದೆನಿಸುತ್ತಿದೆ. ಹೀಗಾಗಿ ಪಾರದರ್ಶಕ ತನಿಖೆ ನಡೆಸುವಂತೆ ತನಿಖಾಧಿಕಾರಿಗಳಿಗೆ ಸೂಚಿಸಬೇಕು" ಎಂದು ರೇಣುಕಾ ಪಾಟೀಲ್ ರಾಜ್ಯಪಾಲರಿಗೆ ಮನವಿ ಮಾಡಿದ್ದಾರೆ.