ಬೆಳಗಾವಿ: ಮಹಾಮಾರಿ ಕೊರೊನಾ ಹೊಡೆತಕ್ಕೆ ಬಡ ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿ ತುತ್ತು ಅನ್ನಕ್ಕಾಗಿ ಪರದಾಡುತ್ತಿದ್ದಾರೆ. ಅಂತಹ ನೊಂದ ಕುಟುಂಬಗಳಿಗೆ ರಾಜ್ಯ ಸರ್ಕಾರ ತಕ್ಷಣವೇ ಪರಿಹಾರ ನೀಡುವಂತೆ ಆಗ್ರಹಿಸಿ ಧಾರಾಕಾರ ಸುರಿಯುತ್ತಿರುವ ಮಳೆಯಲ್ಲಿ ಸಿಪಿಐಎಂ ಪಕ್ಷದ ಮಹಿಳೆಯರು ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ಕೊರೊನಾ ಲಾಕ್ಡೌನ್ ಮಾಡಿದ್ದರಿಂದಾಗಿ ಹಲವು ಕುಂಟುಂಬಗಳು ಬೀದಿಪಾಲಾಗಿವೆ. ಆದರೆ ಸೂಕ್ತ ಪರಿಹಾರ ಹಾಗೂ ಜನರಿಗೆ ಸ್ಪಂದಿಸಬೇಕಾದ ಸರ್ಕಾರಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಜನರತ್ತ ತಿರುಗಿ ನೋಡುತ್ತಿಲ್ಲ ಎಂದು ಆರೋಪಿಸಿ ಮಳೆಗೂ ಅಂಜದೇ ಪ್ರತಿಭಟನೆ ನಡೆಸಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.