ಬೆಳಗಾವಿ: ನಗರದ ಕ್ಯಾಂಪ್ ಪ್ರದೇಶದಲ್ಲಿ ಅಪರಿಚಿತ ದುಷ್ಕರ್ಮಿಗಳು ಬಾಲಕನಿಗೆ ಚಾಕುವಿನಿಂದ ಇರಿದು ಪರಾರಿ ಆಗಿರುವ ಘಟನೆ ನಡೆದಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಬಾಲಕನನ್ನು ಬಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾದ ಹಿನ್ನೆಲೆ ಪೊಲೀಸರು ಮೊಕ್ಕಾಂ ಹೂಡಿದ್ದಾರೆ.
ನಗರದ ಕ್ಯಾಂಪ್ ಪ್ರದೇಶದ ನಿವಾಸಿ ಫರಾನ್ ಧಾರವಾಡಕರ್(15) ಬೆನ್ನಿಗೆ ಚೂರಿ ಇರಿದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ತಕ್ಷಣ ಫರಾನ್ನನ್ನು ನಗರದ ಬಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ವಿಷಯ ತಿಳಿದ ಕೂಡಲೇ ಬಿಮ್ಸ್ ಆವರಣದಲ್ಲಿ ಜಮಾವಣೆಗೊಳ್ಳುತ್ತಿದ್ದ ಜನರನ್ನು ಎಪಿಎಂಸಿ ಪೊಲೀಸರು ಚದುರಿಸಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.