ಬೆಳಗಾವಿ: ಕನ್ನಡದ ಅಸ್ಮಿತೆಯನ್ನು ಕಾಪಾಡಲು ರಾಜ್ಯದ ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ಸಾಂಸ್ಕೃತಿಕ ನಿಧಿಯನ್ನು ಸ್ಥಾಪನೆ ಮಾಡಬೇಕು ಎಂದು ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಶೇಖರ್ ಹೇಳಿದ್ದಾರೆ.
ನಗರದಲ್ಲಿಂದು ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರದಿಂದ ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರಕ್ಕೆ 15 ಕೋಟಿ ರೂ.ಅನುದಾನ ಬಂದಿದೆ. ಆದರೂ ಗಡಿನಾಡಲ್ಲಿ ಕನ್ನಡ ಅಭಿವೃದ್ಧಿ ಚಟುವಟಿಕೆಗಳಿಗೆ ಯಾವುದೇ ಅಡೆತಡೆಯಿಲ್ಲ. ಗಡಿನಾಡಿನಲ್ಲಿ ಜಾನಪದ ಸಾಂಸ್ಕೃತಿಕ ಉತ್ಸವ, ಗಡಿನಾಡಿನ ಹೋರಾಟಗಾರರ ಹೆಸರಿನಲ್ಲಿ ಪ್ರಶಸ್ತಿ ನೀಡಲು ಯೋಜಿಸಲಾಗಿದ್ದು, ಗಡಿಯಲ್ಲಿ ಕನ್ನಡದ ವಾತಾವರಣ ನಿರ್ಮಿಸಲು, ಸಾಂಸ್ಕೃತಿಕ ಪರಂಪರೆ ಉಳಿಸಿ ಬೆಳೆಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.
ಕರ್ನಾಟಕದ ಹಲವು ಗಡಿ ಪ್ರದೇಶಗಳಿಗೆ ಬೇಟಿ ಕೊಟ್ಟು ಪರಿಶೀಲನೆ ನಡೆಸಿದ್ದೇನೆ. ಗಡಿನಾಡಿನಲ್ಲಿ ಕರ್ನಾಟಕದ ಕಾವಲಿಗೆ ವ್ಯವಸ್ಥೆ ಇಲ್ಲ. ಗಡಿನಾಡಿನ ನಾಲ್ಕೂ ಕಡೆ ಕರ್ನಾಟಕಕ್ಕೆ ಸ್ವಾಗತ ಕಮಾನು ಆಗಿಲ್ಲ. ಈ ಕುರಿತು ಜಿಲ್ಲಾಧಿಕಾರಿ ಮಹಾಂತೇಶ ಹಿರೇಮಠ, ಪ್ರಾದೇಶಿಕ ಆಯುಕ್ತ ಆಮ್ಲನ್ ಆದಿತ್ಯ ಬಿಸ್ವಾಸ್, ಜಿಲ್ಲಾ ಪಂಚಾಯಿತಿ ಸಿಇಒ ದರ್ಶನ್ ಹೆಚ್ ಅವರೊಂದಿಗೆ ಚರ್ಚಿಸಿ ಸಲಹೆ, ಸೂಚನೆಗಳನ್ನು ಪಡೆದುಕೊಂಡಿದ್ದೇನೆ ಎಂದರು.