ಬೆಳಗಾವಿ: ಸುವರ್ಣ ವಿಧಾನಸೌಧದ ಘನತೆಯನ್ನು ಗಮನದಲ್ಲಿಟ್ಟುಕೊಂಡು ಅಲ್ಲಿನ ಭದ್ರತೆ, ಸ್ವಚ್ಛತೆ ಸೇರಿದಂತೆ ಒಟ್ಟಾರೆ ನಿರ್ವಹಣಗೆ ಸಂಬಂಧಿಸಿದಂತೆ ಸರ್ಕಾರದ ಮಾರ್ಗಸೂಚಿ ಪ್ರಕಾರ ಎಲ್ಲ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸೂಚನೆ ನೀಡಿದರು.
ನಗರದ ಹೊರವಲಯದಲ್ಲಿರುವ ಸುವರ್ಣ ವಿಧಾನಸೌಧಕ್ಕೆ ಬುಧವಾರ ಅವರು ಭೇಟಿ ನೀಡಿ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಸುವರ್ಣ ವಿಧಾನಸೌಧದ ನಿರ್ವಹಣೆ ಮಾಡುತ್ತಿರುವ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಹಾಗೂ ಕಾರ್ಮಿಕರ ಜತೆ ಚರ್ಚೆ ನಡೆಸಿದರು.
ಸುವರ್ಣ ವಿಧಾನಸೌಧದ ಮುಂದೆ ಶಾವಿಗೆ ಹಾಗೂ ಸಂಡಿಗೆ ಒಣಹಾಕಿದ್ದ ಮಹಿಳಾ ಕಾರ್ಮಿಕರೊಬ್ಬರ ವಿರುದ್ಧ ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ. ಮುಂಬರುವ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ನಿಗಾ ವಹಿಸಬೇಕು. ಸ್ವಚ್ಛತೆ ಸೇರಿದಂತೆ ಮತ್ತಿತರ ದೈನಂದಿನ ನಿರ್ವಹಣೆಯ ಕೆಲಸಕಾರ್ಯಗಳಿಗೆ ನಿಯೋಜಿಸಲಾಗುವ ಸಿಬ್ಬಂದಿ ಹಾಗೂ ಕಾರ್ಮಿಕರು ಶಿಸ್ತುಬದ್ಧವಾಗಿ ಹಾಗೂ ಅಚ್ಚುಕಟ್ಟಾಗಿ ಕೆಲಸ ಮಾಡಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಅವರು ತಿಳಿಸಿದರು.