ಬೆಳಗಾವಿ: ಕೋವಿಡ್-19 ಸಂದರ್ಭದಲ್ಲಿಯೂ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಶೇ. 100ಕ್ಕೆ ನೂರರಷ್ಟು ಪ್ರವೇಶ ಮತ್ತು ಹಲವು ವರ್ಷಗಳಿಂದ ಉತ್ತಮ ಫಲಿತಾಂಶ ಗಳಿಸುತ್ತಿರುವ ಇಲ್ಲಿನ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಸಾಧನೆಯ ಬಗ್ಗೆ ಉಪಮುಖ್ಯಮಂತ್ರಿ ಡಾ. ಅಶ್ವತ್ಥ ನಾರಾಯಣ ಮೆಚ್ಚುಗೆ ವ್ಯಕ್ತಪಡಿಸಿದರು.
ನಗರದ ಕಿತ್ತೂರು ಚೆನ್ನಮ್ಮ ವೃತ್ತದಲ್ಲಿರುವ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿಗೆ ಮಂಗಳವಾರ ಭೇಟಿ ನೀಡಿದ ಅವರು, ಕಾಲೇಜಿನ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ಜತೆ ಚರ್ಚೆ ನಡೆಸಿದರು. ಪ್ರತಿ ವರ್ಷ ಅತ್ಯುತ್ತಮ ಫಲಿತಾಂಶ ಗಳಿಸುತ್ತಿರುವ ಈ ಸಂಸ್ಥೆಯು ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಶ(ಪ್ಲೇಸ್ಮೆಂಟ್) ಕಲ್ಪಿಸುವಲ್ಲಿಯೂ ಉತ್ತಮ ಸಾಧನೆಗೈದಿದೆ ಎಂದು ಸಂತಸ ವ್ಯಕ್ತಪಡಿಸಿದರು.