ಬೆಳಗಾವಿ:ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾಮಾನ್ಯ ಜನರಿಗೆ ದಿನಸಿ, ತರಕಾರಿ ಮತ್ತಿತರ ಅಗತ್ಯ ಸಾಮಗ್ರಿಗಳ ಕೊರತೆಯಾಗದಂತೆ ಕ್ರಮಕೈಗೊಳ್ಳಬೇಕೆಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಸೂಚನೆ ನೀಡಿದರು.
ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿ, ಸುದೈವದಿಂದ ಜಿಲ್ಲೆಯಲ್ಲಿ ಇದುವರೆಗೆ ಪಾಸಿಟಿವ್ ಪ್ರಕರಣ ಕಂಡುಬಂದಿಲ್ಲ. ಆದರೆ, ಯಾರು ಉದಾಸೀನತೆ ತೋರದೆ ಮುನ್ನೆಚ್ಚರಿಕೆ ವಹಿಸಬೇಕು ಎಂದರು.
ಮರ್ಕಜ್ ಧಾರ್ಮಿಕ ಸಭೆಯಿಂದ ಜಿಲ್ಲೆಗೆ ಹಿಂದಿರುಗಿದ ಜನರನ್ನು ಗುರುತಿಸಿ ವೈದ್ಯಕೀಯ ತಪಾಸಣೆ ನಡೆಸಬೇಕು. ಹೀಗೆ ಆಗಮಿಸಿರುವ ಜನರ ಆರೋಗ್ಯದ ಮೇಲೆ ನಿಗಾ ವಹಿಸಬೇಕು. ಸೋಂಕು ಹರಡದಂತೆ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.
ಕೋವಿಡ್-19 ಹರಡುವಿಕೆ ತಡೆಗಟ್ಟಲು ಸರ್ಕಾರದ ಮಟ್ಟದಲ್ಲಿ ಯಾವುದಾದರೂ ನಿರ್ಧಾರ ಕೈಗೊಳ್ಳಬೇಕಿದ್ದರೆ ತಮ್ಮ ಗಮನಕ್ಕೆ ತರುವಂತೆ ಅಧಿಕಾರಿಗಳಿಗೆ ತಿಳಿಸಿದರು. ಈಗಾಗಲೇ ಜಿಲ್ಲೆಗೆ ಪ್ರವೇಶಿಸಿರುವ ವಲಸೆ ಕಾರ್ಮಿಕರಿಗೆ ವಸತಿ ಮತ್ತು ಊಟೋಪಹಾರದ ಸಮರ್ಪಕ ವ್ಯವಸ್ಥೆ ಕಲ್ಪಿಸುವಂತೆ ಅಧಿಕಾರಿಗಳಿಗೆ ಹೇಳಿದರು.
ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಮಾತನಾಡಿ, ಪ್ರತ್ಯೇಕ 200 ಹಾಸಿಗೆಗಳ ಬಿಮ್ಸ್ ಅಸ್ಪತ್ರೆಯನ್ನು ಕೋವಿಡ್-19 ಆಸ್ಪತ್ರೆ ಎಂದು ಅಧಿಸೂಚಿಸಲಾಗಿದೆ. ಸಾಮಾನ್ಯ ಜನರು ಅಥವಾ ರೋಗಿಗಳಿಗೆ ತೊಂದರೆಯಾಗದಂತೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ. ಹಾಪ್ ಕಾಮ್ಸ್ ಮತ್ತು ಕೆಲ ಖಾಸಗಿ ವಾಹನಗಳ ಮೂಲಕ ಬಡಾವಣೆಗಳಿಗೆ ತರಕಾರಿ ಕಳಿಸಲಾಗುತ್ತಿದೆ ಎಂದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಣಾಧಿಕಾರಿ ಡಾ.ರಾಜೇಂದ್ರ ಕೆ.ವಿ., ನಗರ ಪೊಲೀಸ್ ಆಯುಕ್ತ ಬಿ.ಎಸ್.ಲೋಕೇಶ್ ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಪಾಲಿಕೆ ಆಯುಕ್ತ ಜಗದೀಶ್ ಕೆ.ಎಚ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ವಿ.ಮುನ್ಯಾಳ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ತುಕ್ಕಾರ, ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ಜಂಟಿ ನಿರ್ದೇಶಕ ಚನ್ನಬಸಪ್ಪ ಕೊಡ್ಲಿ ಇದ್ದರು.