ಬೆಳಗಾವಿ: ಜಿಲ್ಲೆಯ ಕೃಷ್ಣಾ ನದಿ ಪಾತ್ರದಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದ್ದು, ಜಿಲ್ಲಾಡಳಿತದ ವತಿಯಿಂದ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಎಸ್.ಬಿ.ಬೊಮ್ಮನಹಳ್ಳಿ ತಿಳಿಸಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿ, ಮಹಾರಾಷ್ಟ್ರದಲ್ಲಿ ಭಾರಿ ಪ್ರಮಾಣದ ಮಳೆಯಾಗುತ್ತಿರುವ ಪರಿಣಾಮ ಕೃಷ್ಣಾ ನದಿಯಲ್ಲಿ ನೀರಿನ ಮಟ್ಟ ಹೆಚ್ಚಾಗಿದೆ. ಜೊತೆಗೆ ಜಲಾಶಯಗಳಿಂದ ಹೆಚ್ಚುವರಿ ನೀರು ಬಿಡುಗಡೆ ಮಾಡಿದ್ದರಿಂದಾಗಿ ಪ್ರವಾಹ ಭೀತಿ ಉಂಟಾಗಿದೆ. ಆದ್ದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ನದಿ ಪಾತ್ರದ ಗ್ರಾಮಸ್ಥರನ್ನು ಈಗಾಗಲೇ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡಿದ್ದೇವೆ. ಜೊತೆಗೆ ಕೃಷ್ಣಾ ನದಿ ದಂಡೆ ಮೇಲಿರುವ 74 ಗ್ರಾಮಗಳಲ್ಲಿನ ಜನರಿಗೆ ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಮುನ್ನೆಚ್ಚರಿಕೆ ನೀಡಲಾಗಿದೆ ಎಂದರು.