ಬೆಳಗಾವಿ:ಮುಂದಿನ ಫೆಬ್ರವರಿಯಲ್ಲಿ ಅತ್ಯಾಧುನಿಕ ಸೌಲಭ್ಯಗಳುಲ್ಲ, ಸುಸಜ್ಜಿತ ಕ್ಯಾನ್ಸರ್ ಆಸ್ಪತ್ರೆಯನ್ನು ಜನಸೇವೆಗೆ ಅರ್ಪಿಸಲಾಗುವುದು ಎಂದು ಕೆಎಲ್‍ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ. ಪ್ರಭಾಕರ ಕೋರೆ ತಿಳಿಸಿದರು.
ಕೆಎಲ್‍ಇ ಆಸ್ಪತ್ರೆಯ ಹಿಂಬದಿಯಲ್ಲಿ ನಿರ್ಮಿಸಲಾಗುತ್ತಿರುವ ಕ್ಯಾನ್ಸರ್ ಆಸ್ಪತ್ರೆಯ ಕಟ್ಟಡದ ಕಾಮಗಾರಿ ಪರಿಶೀಲಿಸಿ ಅವರು ಮಾತನಾಡಿದರು. 200 ಕೋಟಿ ರೂಪಾಯಿ ವೆಚ್ಚದಲ್ಲಿ 200 ಹಾಸಿಗೆಗಳ ಆಸ್ಪತ್ರೆಯನ್ನು ನಿರ್ಮಿಸಲಾಗುತ್ತಿದೆ. ಕಟ್ಟಡದ ಕಾಮಗಾರಿ ಈ ವರ್ಷಾಂತ್ಯದ ವೇಳೆಗೆ ಪೂರ್ಣಗೊಳ್ಳಲಿದೆ. ಮುಂದಿನ ಫೆಬ್ರವರಿ ವೇಳೆಗೆ ಸಂಪೂರ್ಣ ಕಾಮಗಾರಿ ಮುಗಿಸಿ, ಆಸ್ಪತ್ರೆಯನ್ನು ಜನಸೇವೆಗೆ ಅರ್ಪಿಸಲಾಗುವುದು ಎಂದರು.
ಈಗಾಗಲೇ ನಿತ್ಯ 40ಕ್ಕೂ ಅಧಿಕ ಹೊರ ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಈ ಆಸ್ಪತ್ರೆಯಲ್ಲಿ ಕ್ಯಾನ್ಸರ್ ಸಂಬಂಧಿತ ಎಲ್ಲಾ ರೀತಿಯ ಚಿಕಿತ್ಸೆ ನೀಡಲಾಗುವುದು. 100ಕ್ಕೂ ಅಧಿಕ ರೋಗಿಗಳಿಗೆ ಕಿಮೋಥೆರಪಿ ನೀಡಬಹುದು. ಕ್ಯಾನ್ಸರ್ ರೋಗಿಗಳಿಗೆ ಗುಣಮಟ್ಟದ ಚಿಕಿತ್ಸೆ ನೀಡುವುದರೊಂದಿಗೆ ಉದ್ಯೋಗ ಸೃಷ್ಟಿಯೂ ಆಗಲಿದೆ. ಉತ್ತರ ಕರ್ನಾಟಕ, ಗೋವಾ ಹಾಗೂ ದಕ್ಷಿಣ ಮಹಾರಾಷ್ಟ್ರ ಭಾಗದ ಪ್ರಥಮ ಅತ್ಯಾಧುನಿಕ ಕ್ಯಾನ್ಸರ್ ಆಸ್ಪತ್ರೆ ಇದಾಗಲಿದೆ ಎಂದು ಕೋರೆ ಇದೇ ವೇಳೆ ಸ್ಪಷ್ಟಪಡಿಸಿದರು.