ಕರ್ನಾಟಕ

karnataka

ETV Bharat / state

ಪಾರದರ್ಶಕ, ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಕ್ರಮ ಕೈಗೊಳ್ಳಲು ಸೂಚನೆ: ಚುನಾವಣಾ ಆಯುಕ್ತ - ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಚುನಾವಣಾ ಆಯೋಗ ಆಯುಕ್ತ

ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ಚುನಾವಣಾ ಆಯೋಗದ ಆಯುಕ್ತ ಡಾ.ಬಿ.ಬಸವರಾಜು ಅಧಿಕಾರಿಗಳ ಜೊತೆ ಸಭೆ ನಡೆಸಿದರು.

ಅಧಿಕಾರಿಗಳ ಜೊತೆ ಚುನಾವಣಾ ಆಯುಕ್ತರ ಸಭೆ
Election Commission Commissioner Basavaraj made meeting

By

Published : Aug 26, 2021, 8:28 PM IST

ಬೆಳಗಾವಿ:ಮಹಾನಗರ ಪಾಲಿಕೆ ಚುನಾವಣೆಯನ್ನು ಪಾರದರ್ಶಕ, ಮುಕ್ತ, ನ್ಯಾಯಸಮ್ಮತ ಹಾಗೂ ನಿಷ್ಪಕ್ಷಪಾತವಾಗಿ ಚುನಾವಣೆ ನಡೆಸುವುದು ನಮ್ಮ ಜವಾಬ್ದಾರಿ. ಆದ್ದರಿಂದ ನ್ಯಾಯಯುತ ಚುನಾವಣೆ ನಡೆಸಲು ಎಲ್ಲರೂ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು ಎಂದು ರಾಜ್ಯ ಚುನಾವಣಾ ಆಯೋಗದ ಆಯುಕ್ತ ಡಾ.ಬಿ.ಬಸವರಾಜು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮಹಾನಗರ ಪಾಲಿಕೆ ಚುನಾವಣೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪೊಲೀಸ್ ಆಯುಕ್ತರು ಸೇರಿದಂತೆ ಜಿಲ್ಲಾಮಟ್ಟದ ಹಿರಿಯ ಅಧಿಕಾರಿಗಳು, ಸಾಮಾನ್ಯ ವೀಕ್ಷಕರು ಮತ್ತು ಚುನಾವಣಾ ವಿವಿಧ ನೋಡಲ್ ಅಧಿಕಾರಿಗಳ ಸಭೆ ನಡೆಸಿದರು.

ಅಧಿಕಾರಿಗಳ ಜೊತೆ ಚುನಾವಣಾ ಆಯುಕ್ತರ ಸಭೆ

ಈ ವೇಳೆ ಮಾತನಾಡಿದ ಅವರು, ಸಾಮಾನ್ಯ ವೀಕ್ಷಕರು, ವೆಚ್ಚ ವೀಕ್ಷಕರು ಹಾಗೂ ಮಾದರಿ ನೀತಿಸಂಹಿತೆ ನೋಡಲ್ ಅಧಿಕಾರಿಗಳು ಹೆಚ್ಚು ಜಾಗರೂಕತೆಯಿಂದ ಕಾರ್ಯ ನಿರ್ವಹಿಸಬೇಕು. ಅಭ್ಯರ್ಥಿಗಳಿಗೆ ನಿಯಮಾವಳಿಗಳ ಕುರಿತು ತಿಳಿವಳಿಕೆ ಮೂಡಿಸುವ ಮೂಲಕ ಗೊಂದಲಗಳನ್ನು ಪರಿಹರಿಸಲು ಮುಂದಾಗಬೇಕು. ಮನೆ - ಮನೆಗೆ ತೆರಳಿ‌ ಪ್ರಚಾರಕ್ಕೆ ಮಾತ್ರ ಅವಕಾಶ ನೀಡಿರುವುದರಿಂದ ಚುನಾವಣಾ ಪ್ರಚಾರದ ವೇಳೆ ನಡೆಯಬಹುದಾದ ಅಕ್ರಮಗಳ ಮೇಲೆ ನಿಗಾ ವಹಿಸಬೇಕು‌ ಎಂದರು‌.

ಮದ್ಯ ಮಾರಾಟ, ಸಾಗಾಣಿಕೆ‌ ಮೇಲೆ ನಿಗಾ ಇಡಿ:

ಚುನಾವಣಾ ಕಾರ್ಯದಲ್ಲಿ ನಿಯೋಜಿತ ಎಲ್ಲ ಅಧಿಕಾರಿಗಳು ತಮಗೆ ನೀಡಲಾದ ಅಧಿಕಾರಗಳನ್ನು ಬಳಸಿಕೊಂಡು ನ್ಯಾಯಸಮ್ಮತ ಚುನಾವಣೆಗೆ ಅವಕಾಶ ಕಲ್ಪಿಸಬೇಕು. ಪ್ರಚಾರಕ್ಕೆ ಸಂಬಂಧಿಸಿದಂತೆ ಆಯೋಗದ ನಿರ್ದೇಶನಗಳನ್ನು ಸಮರ್ಪಕವಾಗಿ ಪಾಲಿಸಬೇಕು. ಪ್ರಚಾರ ಮಾರ್ಗಸೂಚಿಗಳನ್ನು ಪಾಲನೆಗೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆ ನಿಗಾವಹಿಸಬೇಕು. ಚುನಾವಣಾ ಪ್ರಕ್ರಿಯೆಯಲ್ಲಿ ಯಾವುದೇ ಲೋಪದೋಷಗಳು ಉಂಟಾಗದಂತೆ ಎಚ್ಚರಿಕೆ ವಹಿಸಬೇಕು. ಎಲ್ಲರಿಗೂ ಸಮಾನ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಕೆಲಸ ಮಾಡಬೇಕು. ಅಬಕಾರಿ ಅಕ್ರಮಗಳನ್ನು ತಡೆಗಟ್ಟಲು ಅಗತ್ಯ ಕ್ರಮ ಕೈಗೊಳ್ಳಬೇಕು. ಮದ್ಯ ಮಾರಾಟ ಮತ್ತು ಸಾಗಾಣಿಕೆ‌ ಮೇಲೆ ನಿಗಾ ವಹಿಸಬೇಕು ಎಂದು ಸೂಚನೆ ನೀಡಿದರು.

ಕೋವಿಡ್ ಮಾರ್ಗಸೂಚಿ ಪಾಲನೆಗೆ ಸೂಚನೆ:

ಮತದಾನ ಹಾಗೂ ಮತ ಎಣಿಕೆ‌ ಕೇಂದ್ರಗಳಲ್ಲಿ ಕೋವಿಡ್ ಮಾರ್ಗಸೂಚಿ ಪ್ರಕಾರ ಎಲ್ಲ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಬೇಕು. ಮಾದರಿ ನೀತಿಸಂಹಿತೆ ಪಾಲನೆ, ಸೆಕ್ಟರ್ ಅಧಿಕಾರಿಗಳ ನಿಯೋಜನೆ, ವಾಹನ ಸೌಲಭ್ಯ ಮತ್ತಿತರ ವಿಷಯಗಳ ಕುರಿತು ಚರ್ಚೆ ನಡೆಸಿದರು.

ಪಾರದರ್ಶಕ ಚುನಾವಣೆಗೆ ಒತ್ತು:

ಚುನಾವಣಾ ಪ್ರಕ್ರಿಯೆಯಲ್ಲಿ ಭಾಗಿಯಾಗಿರುವ ಪ್ರತಿಯೊಬ್ಬರೂ ಸಮನ್ವಯದಿಂದ ಕೆಲಸ ಮಾಡಬೇಕು. ‌ಪ್ರತಿಯೊಬ್ಬರ ಕರ್ತವ್ಯವು ಪ್ರಾಮುಖ್ಯತೆ ಹೊಂದಿದೆ. ಸುಗಮ ಮತ್ತು ಪಾರದರ್ಶಕ ಚುನಾವಣೆ ನಡೆಸುವ ನಿಟ್ಟಿನಲ್ಲಿ ಎಲ್ಲರೂ ಕೈ ಜೋಡಿಸಬೇಕು ಎಂದು ಮನವಿ ಮಾಡಿದರು.

ಚುನಾವಣೆಗೆ ಎಲ್ಲಾ ಸಿದ್ಧತೆ: ಜಿಲ್ಲಾಧಿಕಾರಿ

ಮಹಾನಗರ ಪಾಲಿಕೆ ಚುನಾವಣೆಗೆ ಸಂಬಂಧಿಸಿದಂತೆ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಇವಿಎಂ‌, ಚುನಾವಣಾ ಸಿಬ್ಬಂದಿ, ತರಬೇತಿ ಸೇರಿದಂತೆ ಎಲ್ಲ ಸಿದ್ಧತೆಗಳನ್ನು ಪೂರ್ಣಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಹೇಳಿದರು.

ಒಟ್ಟು 4,31,383 ಮತದಾರರಿದ್ದು, 13 ಉಪ ಮತಗಟ್ಟೆಗಳು ಸೇರಿದಂತೆ ಒಟ್ಟಾರೆ 415 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ನಗರದ ಬಿ.ಕೆ.ಮಾಡೆಲ್ ಹೈಸ್ಕೂಲಿನಲ್ಲಿ ಮಸ್ಟರಿಂಗ್ ಹಾಗೂ ಡಿಮಸ್ಟರಿಂಗ್ ನಡೆಯಲಿದೆ. ಪ್ರತಿಯೊಂದು ಮತ ಕೇಂದ್ರಗಳಲ್ಲಿ ಕೋವಿಡ್ ಮಾರ್ಗಸೂಚಿ ಪ್ರಕಾರ ವೈದ್ಯಕೀಯ ತಂಡಗಳನ್ನು ನಿಯೋಜಿಸಲು ಕ್ರಮ ಕೈಗೊಳ್ಳಲಾಗಿದೆ. ನಾಮಪತ್ರ ವಾಪಸ್ ಪಡೆಯಲು ಆ.26 ಕಡೆಯ ದಿನವಾಗಿದೆ. ಈ ಪ್ರಕ್ರಿಯೆ ಬಳಿಕ ಅಭ್ಯರ್ಥಿಗಳಿಗೆ ಚಿಹ್ನೆಗಳನ್ನು ನೀಡಲಾಗುವುದು ಎಂದರು.

ABOUT THE AUTHOR

...view details