ಬೆಳಗಾವಿ:ದೆಹಲಿಯಲ್ಲಿ ರೈತರು ಹಲವು ದಿನಗಳಿಂದ ಧರಣಿ ನಡೆಸುತ್ತಿದ್ದರೂ ಕೂಡ ಕೇಂದ್ರ ಸರ್ಕಾರ ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ಹಿಂದಕ್ಕೆ ಪಡೆಯಲು ತಯಾರಿಲ್ಲ. ಹೀಗಾಗಿ ಜನವರಿ 17 (ನಾಳೆ)ರಂದು ಬೆಳಗಾವಿಗೆ ಆಗಮಿಸುವ ಕೇಂದ್ರ ಗೃಹ ಸಚಿವ ಅಮಿತ್ ಶಾ ರೈತರೊಂದಿಗೆ ಚರ್ಚೆಗೆ ಬರಬೇಕು. ಇಲ್ಲವಾದರೆ ಬೆಳಗಾವಿ ಚನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷ ಚುನ್ನಪ್ಪ ಪೂಜಾರಿ ತಿಳಿಸಿದ್ದಾರೆ.
ನಗರದಲ್ಲಿ ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದ ಅವರು, ಕೇಂದ್ರದ ಕೃಷಿ ನೀತಿ, ರೈತ ವಿರೋಧಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯಲ್ಲಿ ರೈತರು 60 ದಿನಗಳಿಂದ ಧರಣಿ ನಡೆಸುತ್ತಿದ್ದಾರೆ. ಸುಪ್ರೀಂ ಕೋರ್ಟ್ ಸಹ ರೈತರ ಹಿತಾಸಕ್ತಿ ಪರಿಗಣಿಸಿ ನಿರ್ಧಾರ ಕೈಗೊಳ್ಳುವಂತೆ ಕೇಂದ್ರ ಸರ್ಕಾರಕ್ಕೆ ತಿಳಿಸಿದೆ ಎಂದರು.