ಅಥಣಿ:ತಾಲೂಕಿನಲ್ಲಿ ಕಳೆದ ಮೂರು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದೆ. ಇತ್ತ ಮಹಾರಾಷ್ಟ್ರದ ಪಶ್ಚಿಮ ಘಟ್ಟದಲ್ಲಿ ಮಳೆಯ ಅಬ್ಬರ ಜೋರಾಗಿದ್ದು, ಕೃಷ್ಣಾ ನದಿ ಭೋರ್ಗರೆದು ಹರಿಯುತ್ತಿದೆ.
ಕೋಯ್ನಾ ಜಲಾಶಯದಿಂದ ಅಧಿಕ ನೀರು ಬಿಡುಗಡೆ: ಕೃಷ್ಣಾ ನದಿ ಪಾತ್ರದ ಗ್ರಾಮಗಳಲ್ಲಿ ಪ್ರವಾಹದ ಭೀತಿ
ಕೋಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ ನೀರು ಬಿಡುಗಡೆ ಮಾಡಿದ್ದರಿಂದ ಅಥಣಿ ತಾಲೂಕಿನ ನದಿ ತೀರದ ಗ್ರಾಮಗಳಲ್ಲಿ ಪ್ರವಾಹದ ಭೀತಿ ಎದುರಾಗಿದೆ.
ತಾಲೂಕಿನಲ್ಲಿ ಬಿಡದೆ ಸುರಿಯುತ್ತಿರುವ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ. ಕೋಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ ನೀರು ಬಿಡುಗಡೆ ಮಾಡಿದ್ದರಿಂದ ಅಪಾಯದ ಮಟ್ಟದಲ್ಲಿ ನದಿ ಹರಿಯುತ್ತಿದೆ. ಇದರಿಂದ ಕೃಷ್ಣಾ ನದಿ ತೀರದ ಗ್ರಾಮಗಳಲ್ಲಿ ಪ್ರವಾಹದ ಭೀತಿ ಎದುರಾಗಿದೆ. ನದಿ ತೀರದ ಜನತೆಗೆ ಜಿಲ್ಲಾ ಆಡಳಿತ, ಗ್ರಾಮ ಪಂಚಾಯಿತಿ ಸಿಬ್ಬಂದಿಯಿಂದ ಎಚ್ಚರಿಕೆ ನೀಡಲಾಗುತ್ತಿದೆ. ಕೊಯ್ನಾ ಜಲಾಶಯದಿಂದ ನೀರು ಬಿಡುಗಡೆ ಮಾಡಲಾಗಿದೆ. ರೈತರು ನದಿ ತೀರಕ್ಕೆ ಹೋಗಬಾರದು ಮತ್ತು ಜಾನುವಾರುಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡುವಂತೆ ಎಚ್ಚರಿಕೆ ನೀಡಲಾಗಿದೆ.
ಇತ್ತ ರೈತರು ವಾತಾವರಣ ನೋಡಿ ಮತ್ತೆ ಪ್ರವಾಹ ಬರುವ ಮುನ್ಸೂಚನೆ ಕಾಣುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಮತ್ತೊಂದೆಡೆ ಜಿಲ್ಲಾಡಳಿತ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜನ-ಜಾನುವಾರುಗಳಿಗೆ ಮೂಲ ಭೂತ ಸೌಕರ್ಯ ಇಲ್ಲದೆ ನಮ್ಮನ್ನು ಬೇರೆ ಕಡೆ ತೆರಳಲು ಆದೇಶ ಹೊರಡಿಸಿದ್ದಾರೆ. ನಾವು ಎಲ್ಲಿ ಹೋಗುವುದು ಎಂದು ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.