ಅಥಣಿ: ಮಹಾರಾಷ್ಟ್ರದ ಪಶ್ಚಿಮಘಟ್ಟದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಕೃಷ್ಣಾ ನದಿಯಲ್ಲಿ ಕ್ಷಣ ಕ್ಷಣಕ್ಕೂ ನೀರಿನ ಮಟ್ಟ ಹೆಚ್ಚಳವಾಗುತ್ತಿದ್ದು, ತಾಲೂಕಿನ 17 ನದಿ ತೀರದ ಗ್ರಾಮಗಳಲ್ಲಿ ಪ್ರವಾಹ ಭೀತಿ ಎದುರಾಗಿದೆ.
ತಾಲೂಕಿನ ಹಿಪ್ಪರಗಿ ಬ್ಯಾರೇಜ್ 22 ಗೇಟ್ ಮೂಲಕ ಕೃಷ್ಣಾ ನದಿಗೆ 1.85 ಲಕ್ಷ ಕ್ಯುಸೆಕ್ ನೀರು ಹೊರ ಬಿಡಲಾಗುತ್ತಿದೆ. ಅಷ್ಟೇ ಪ್ರಮಾಣದ ನೀರು ಮಹಾರಾಷ್ಟ್ರದ ರಾಜಾಪುರ ಬ್ಯಾರೇಜ್ನಿಂದ ಕೃಷ್ಣಾ ನದಿಗೆ ಹರಿಯುತ್ತಿದೆ. ಇಲ್ಲಿನ ಹಿಪ್ಪರಗಿ ಬ್ಯಾರೇಜ್ ಕೆಳ ಭಾಗದ ಆಲಮಟ್ಟಿ ಜಲಾಶಯಕ್ಕೆ ನೀರನ್ನು ಹರಿಸಲಾಗುತ್ತದೆ ಎಂದು ಹಿಪ್ಪರಗಿ ನೀರಾವರಿ ಅಭಿಯಂತರ ವಿಠಲ್ ನಾಯಕ್ ಈಟಿವಿ ಭಾರತಕ್ಕೆ ಮಾಹಿತಿ ನೀಡಿದರು.
ಕ್ಷಣ ಕ್ಷಣಕ್ಕೂ ನೀರಿನ ಮಟ್ಟ ಏರಿಕೆ: ಕೃಷ್ಣಾ ನದಿ ತೀರದ 17 ಗ್ರಾಮಗಳಲ್ಲಿ ಪ್ರವಾಹ ಭೀತಿ ಈಗಾಗಲೇ ನದಿ ತೀರಕ್ಕೆ ಜನರು ಹಾಗೂ ಜಾನುವಾರುಗಳು ತೆರಳದಂತೆ ಸೂಚಿಸಲಾಗಿದೆ. ಜಿಲ್ಲಾಡಳಿತ ಪ್ರವಾಹ ಸ್ಥಿತಿ ಎದುರಿಸಲು ಸನ್ನದ್ಧವಾಗಿದೆ. ಗ್ರಾಮೀಣ ಭಾಗದಲ್ಲಿ ನೋಡಲ್ ಅಧಿಕಾರಿಗಳ ನೇಮಕ ಮಾಡಿದ್ದು, ಎನ್ಡಿಆರ್ಎಫ್ ಸಿಬ್ಬಂದಿ ಮತ್ತು ಬೋಟ್ಗಳು ರಕ್ಷಣೆಗಾಗಿ ಸಿದ್ಧವಾಗಿವೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ.
ನದಿ ತೀರದ ಜನರಿಗೆ ಸುರಕ್ಷಿತ ಸ್ಥಳಕ್ಕೆ ತೆರಳಲು ಸೂಚಿಸಲಾಗಿದ್ದು, ನದಿ ತೀರದ ಗ್ರಾಮಗಳಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ ಎಂದು ಅಥಣಿ ತಹಶೀಲ್ದಾರ್ ದುಂಡಪ್ಪ ಕೋಮಾರ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.