ಬೆಳಗಾವಿ: ಮುಂಬರುವ ಬೆಳಗಾವಿ ಲೋಕಸಭೆ ಕ್ಷೇತ್ರದ ಉಪಚುನಾವಣೆಯಲ್ಲಿ ನಾನೂ ಕೂಡ ಕಾಂಗ್ರೆಸ್ ಟಿಕೆಟ್‍ನ ಪ್ರಬಲ ಆಕಾಂಕ್ಷಿ ಆಗಿದ್ದೇನೆ ಎಂದು ಕಾಂಗ್ರೆಸ್ ಮುಖಂಡ ಲಕ್ಕಣ್ಣ ಸವಸುದ್ದಿ ತಿಳಿಸಿದ್ದಾರೆ.
ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವನ್ನು ಕೇಡರ್ ಬೇಸ್ ಪಕ್ಷವಾಗಿ ಪರಿವರ್ತಿಸುವ ಮಾತುಗಳನ್ನು ನಮ್ಮ ನಾಯಕರು ಆಡುತ್ತಿದ್ದಾರೆ. ಕಳೆದ ಎರಡು ದಶಕಗಳಿಂದ ಕಾಂಗ್ರೆಸ್ ಪಕ್ಷದಲ್ಲಿದ್ದೇನೆ. ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ಕೆಲಸ ಮಾಡಿದ್ದೇನೆ. ಹೀಗಾಗಿ ಬರುವ ಚುನಾವಣೆಯಲ್ಲಿ ನಾನೂ ಟಿಕೆಟ್‍ನ ಪ್ರಬಲ ಆಕಾಂಕ್ಷಿ ಆಗಿದ್ದೇನೆ ಎಂದರು.
ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕಾಂಗ್ರೆಸ್ ಮುಖಂಡ ಲಕ್ಕಣ್ಣ ಸವಸುದ್ದಿ ಈಗಾಗಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಈಶ್ವರ್ ಖಂಡ್ರೆ ಸೇರಿ ಹಲವು ನಾಯಕರನ್ನು ಭೇಟಿಯಾಗಿ ಅರ್ಜಿ ಸಲ್ಲಿಸಿದ್ದೇನೆ. ಅಲ್ಲದೇ ಬೆಳಗಾವಿ ಲೋಕಸಭೆ ವ್ಯಾಪ್ತಿಯ ಎಂಟು ಕ್ಷೇತ್ರದಲ್ಲಿರುವ ನಮ್ಮ ಪಕ್ಷದ ನೂರಕ್ಕೂ ಅಧಿಕ ಮುಖಂಡರನ್ನು ಭೇಟಿಯಾಗಿದ್ದೇನೆ. ಎಲ್ಲರಿಂದಲೂ ಸಕಾರಾತ್ಮಕ ಸ್ಪಂದನೆ ಸಿಕ್ಕಿದೆ. ಟಿಕೆಟ್ ಸಿಗುವ ವಿಶ್ವಾಸ ನನಗಿದೆ. ಸಿಗದಿದ್ರೆ ಮುಂದಿನ ತೀರ್ಮಾನ ಪ್ರಕಟಿಸುತ್ತೇನೆ ಎಂದರು.
ಪ್ರಾಧಿಕಾರಕ್ಕೆ ಹಣ ಬಿಡುಗಡೆ ಮಾಡಿ
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಮಂಡಿಸಲಿರುವ ಬಜೆಟ್‍ನಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಅಭಿವೃದ್ಧಿ ಪ್ರಾಧಿಕಾರಕ್ಕೆ 146 ಕೋಟಿ ರೂ. ಮೀಸಲಿಡಬೇಕು. ಎಂಟನೇ ಹಂತದಲ್ಲಿ 33 ಕಾಮಗಾರಿ ಕೈಗೊಳ್ಳಬೇಕಿದೆ. ಹಿಂದಿನ ಮೈತ್ರಿ ಸರ್ಕಾರ ಅನುದಾನ ಬಿಡುಗಡೆ ಮಾಡಿತ್ತು. ಆದರೆ ಕೋವಿಡ್ ಕಾರಣಕ್ಕೆ ಅದನ್ನು ತಡೆ ಹಿಡಿಯಲಾಗಿದೆ. ಈ ಬಜೆಟ್‍ನಲ್ಲಿ ಅನುದಾನ ಬಿಡುಗಡೆ ಮಾಡಬೇಕು ಎಂದರು.
ಸಂಗೊಳ್ಳಿ ರಾಯಣ್ಣ ಐಕ್ಯಸ್ಥಳ ಅಭಿವೃದ್ಧಿಗೆ ಪ್ರಾಧಿಕಾರ ರಚಿಸಿ ಹಲವು ವರ್ಷಗಳೇ ಕಳೆದಿವೆ. ಇಲ್ಲಿಯವರೆಗೆ ಸುಮಾರು 250 ಕೋಟಿ ರೂ. ವೆಚ್ಚದ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಆದರೆ ಸರ್ಕಾರ ಅನುದಾನ ಬಿಡುಗಡೆ ಮಾಡದ ಕಾರಣ ಕಾಮಗಾರಿಗಳು ಅರ್ಧಕ್ಕೆ ನಿಂತಿವೆ. ಬಜೆಟ್‍ನಲ್ಲಿ ಈ ಬಗ್ಗೆಯೂ ಗಮನ ಹರಿಸಬೇಕು. ಅಲ್ಲದೇ ಬೆಳಗಾವಿಯ ಸುವರ್ಣಸೌಧದ ಎದುರು ಕಿತ್ತೂರು ರಾಣಿ ಚೆನ್ನಮ್ಮ ಹಾಗೂ ಸಂಗೊಳ್ಳಿ ರಾಯಣ್ಣ ಕಂಚಿನ ಪುತ್ಥಳಿ ನಿರ್ಮಾಣಕ್ಕೆ ಬಜೆಟ್‍ನಲ್ಲಿ 25 ಕೋಟಿ ರೂ. ಮೀಸಲಿಡಬೇಕು ಎಂದು ಸರ್ಕಾರಕ್ಕೆ ಆಗ್ರಹಿಸಿದರು.