ಬೆಳಗಾವಿ/ಬೆಂಗಳೂರು:ರಾಜ್ಯದಲ್ಲಿ ತಲೆದೋರಿರುವ ಬರ ಪರಿಸ್ಥಿತಿಯನ್ನು ಎಲ್ಲಾ ಹಂತದಲ್ಲಿ ಎದುರಿಸಲು ಸರ್ಕಾರ ಸನ್ನದ್ಧವಾಗಿದೆ. ಜನವರಿ, ಫೆಬ್ರವರಿ ಮತ್ತು ಮಾರ್ಚ್ ತಿಂಗಳಲ್ಲಿ ಎದುರಾಗಬಹುದಾದ ಸವಾಲುಗಳ ಬಗ್ಗೆ ಈಗಿನಿಂದಲೇ ಎಚ್ಚೆತ್ತುಕೊಂಡು ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.
ವಿಧಾನ ಪರಿಷತ್ ಕಲಾಪದಲ್ಲಿ ರಾಜ್ಯದಲ್ಲಿ ಉಂಟಾಗಿರುವ ಬರಗಾಲದ ಪರಿಸ್ಥಿತಿಯನ್ನು ನಿಭಾಯಿಸಲು ಮುಂಜಾಗ್ರತಾ ಕ್ರಮಕೈಗೊಳ್ಳುವ ಕುರಿತು ಸದಸ್ಯರಾದ ಕೋಟ ಶ್ರೀನಿವಾಸ ಪೂಜಾರಿ, ಎನ್ ರವಿಕುಮಾರ, ನಿರಾಣಿ ಹನುಮಂತಪ್ಪ ರುದ್ರಪ್ಪ ಹಾಗೂ ಛಲವಾದಿ ನಾರಾಯಣಸ್ವಾಮಿ ಅವರು ನಿಯಮ 68ರ ಮೇರೆಗೆ ಎತ್ತಿದ ಚರ್ಚೆಗೆ ಸರ್ಕಾರದ ಪರವಾಗಿ ಉತ್ತರಿಸಿದ ಸಚಿವರು, ಬರ ನಿರ್ವಹಣೆಗಾಗಿ ಈಗಾಗಲೇ ನಾವು ಕೇಂದ್ರ ಸರ್ಕಾರಕ್ಕೆ 18,171 ಕೋಟಿ ರೂ. ಪರಿಹಾರವನ್ನು ಎನ್‌ಡಿಆರ್‌ಎಫ್ ಅನ್ವಯ ಕೋರಿ ಮನವಿ ಮಾಡಿದ್ದೇವೆ. ಸೆಪ್ಟೆಂಬರ್ 23ರಂದು ಕೇಂದ್ರ ಕೃಷಿ, ಗೃಹ ಸಚಿವರ ಭೇಟಿಗೆ ಪ್ರಯತ್ನ ಕೂಡ ನಡೆಸಲಾಗಿದೆ. ಕೇಂದ್ರ ಬರ ಅಧ್ಯಯನ ತಂಡವು ರಾಜ್ಯದಲ್ಲಿ ಅಕ್ಟೋಬರ್ 4 ರಿಂದ ಅಕ್ಟೋಬರ್ 9ರ ವರೆಗೆ ರಾಜ್ಯದ 13 ಜಿಲ್ಲೆಗಳಲ್ಲಿ ಭೇಟಿ ನೀಡಿ ಬರದ ಪರಿಸ್ಥಿತಿಯನ್ನು ಅವಲೋಕಿಸಿದೆ. ಈ ತಂಡದವರಿಗೆ ನಾವು ರಾಜ್ಯದಲ್ಲಿನ ಬರ ಪರಿಸ್ಥಿತಿಯ ತೀವ್ರತೆಯನ್ನು ಮನವರಿಕೆ ಮಾಡಿದ್ದೇವೆ ಎಂದು ಸಚಿವರು ತಿಳಿಸಿದರು.
ಮುಂಗಾರು ಹಂಗಾಮಿನಲ್ಲಿ ಕರ್ನಾಟಕ ಸೇರಿದಂತೆ ಒಟ್ಟು 12 ರಾಜ್ಯಗಳಲ್ಲಿ ಮಳೆ ಕೊರತೆಯಾಗಿದೆ. ಎಲ್ಲ ರಾಜ್ಯಗಳು ಬರ ಪರಿಹಾರಕ್ಕೆ ಕೇಂದ್ರಕ್ಕೆ ಮನವಿ ಮಾಡುವ ವಿಷಯದಲ್ಲಿ ಕರ್ನಾಟಕ ರಾಜ್ಯವು ಮಂಚೂಣಿಯಲ್ಲಿದೆ. ನಾವು ಮನವಿ ಮಾಡಿದ ತಿಂಗಳ ನಂತರ ಆಂಧ್ರಪ್ರದೇಶ ಮತ್ತು ಎರಡು ತಿಂಗಳ ನಂತರ ಮಹಾರಾಷ್ಟ್ರದಿಂದ ಕೇಂದ್ರಕ್ಕೆ ಮನವಿ ಸಲ್ಲಿಕೆಯಾಗಿವೆ. ಇದು ಬರ ನಿರ್ವಹಣೆ ವಿಷಯದಲ್ಲಿ ರಾಜ್ಯವು ಸಾಕಷ್ಟು ಮುಂಜಾಗ್ರತೆ ವಹಿಸಿದೆ ಎಂಬುದನ್ನು ತಿಳಿಸುತ್ತದೆ ಎಂದು ಸಚಿವರು ಸದಸ್ಯರಿಗೆ ಮನವರಿಕೆ ಮಾಡಿದರು.
ರಾಜ್ಯದ 26 ಗ್ರಾಮಗಳಲ್ಲಿ 22 ಟ್ಯಾಂಕರ್‌ಗಳ ಮೂಲಕ ನೀರು ಪೂರೈಸಲಾಗುತ್ತಿದೆ. 89 ಗ್ರಾಮಗಳಲ್ಲಿ ಬಾಡಿಗೆ ಆಧಾರದ ಮೇಲೆ ಖಾಸಗಿ ಬೋರ್ವೆಲ್ ಮೂಲಕ ನೀರು ಪೂರೈಸಲಾಗುತ್ತಿದೆ. ಪ್ರತಿ 15 ದಿನಕ್ಕೊಮ್ಮೆ ಅಧಿಕಾರಿಗಳಿಗೆ ಬರ ನಿರ್ವಹಣೆ ಕುರಿತು ಸಭೆ ನಡೆಸಲಾಗುತ್ತಿದೆ. ಸಮಸ್ಯಾತ್ಮಕ ಗ್ರಾಮಗಳನ್ನು ಪಟ್ಟಿ ಮಾಡಿ ಅಂತಹ ಕಡೆಗಳಲ್ಲಿ ಮುಂದೆ ಎದುರಾಗಲಿರುವ ಸಮಸ್ಯೆಗಳನ್ನು ಸಮರ್ಥವಾಗಿ ಎದುರಿಸುವ ನಿಟ್ಟಿನಲ್ಲಿ ಈಗಿನಿಂದಲೇ ಟೆಂಡರ್ ಪ್ರಕ್ರಿಯೆ ನಡೆಸಿ ನೀರು ಸರಬರಾಜು ಸಿದ್ಧತೆಗೆ ಅಗತ್ಯ ಕ್ರಮ ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಚಿವರು ತಿಳಿಸಿದರು.