ಬೆಳಗಾವಿ/ಬೆಂಗಳೂರು:ಹೊಸ ರೂಪಾಂತರಿ ಒಮಿಕ್ರೋನ್ ಕೋವಿಡ್ ಆತಂಕ ಹಿನ್ನೆಲೆ ಕರ್ನಾಟಕ-ಮಹಾರಾಷ್ಟ್ರ ಗಡಿಯಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದ್ದು, ಮಹಾರಾಷ್ಟ್ರದಿಂದ ಆಗಮಿಸುವ ಪ್ರಯಾಣಿಕರಿಗೆ ವ್ಯಾಕ್ಸಿನ್ ಮತ್ತು ಕೋವಿಡ್ ನೆಗೆಟಿವ್ ವರದಿಯನ್ನು ಕಡ್ಡಾಯಗೊಳಿಸಲಾಗಿದೆ.
ಕರ್ನಾಟಕ-ಮಹಾರಾಷ್ಟ್ರ ಗಡಿಯಲ್ಲಿ ಹೈ ಅಲರ್ಟ್ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಬಳಿಯಿರುವ ಕೋಗನೊಳ್ಳಿ ಚೆಕ್ ಪೋಸ್ಟ್ನಲ್ಲಿ ಪೊಲೀಸರು ತಪಾಸಣೆ ಕೈಗೊಂಡಿದ್ದಾರೆ. ಮಹಾರಾಷ್ಟ್ರದಿಂದ ಬರುವ ಎಲ್ಲಾ ಪ್ರಯಾಣಿಕರಿಗೆ ಕೋವಿಡ್ ತಪಾಸಣೆ ನಡೆಸುತ್ತಿದ್ದು, ಕೋವಿಡ್ ಲಸಿಕೆ ಹಾಕಿಸಿಕೊಂಡವರಿಗೆ ಗಡಿಯೊಳಗೆ ಪ್ರವೇಶ ಕಲ್ಪಿಸಲಾಗುತ್ತಿದ್ದು, ಲಸಿಕೆ ಪಡೆಯದಿರುವ ಪ್ರಯಾಣಿಕರನ್ನು ಮರಳಿ ಮಹಾರಾಷ್ಟಕ್ಕೆ ಹಿಂದಿರುಗಿಸಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಕಳೆದೆರಡು ವರ್ಷಗಳಿಂದ ಕೊರೊನಾದಿಂದ ಇಡೀ ದೇಶ ನಲುಗಿದ್ದು, ರೂಪಾಂತರಿ ವೈರಸ್ ರಾಜ್ಯಕ್ಕೆ ಬರದಂತೆ ಬಿಗಿ ಕ್ರಮ ಕೈಗೊಳ್ಳಲಾಗುತ್ತಿದೆ.
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತೀವ್ರ ನಿಗಾ:
ಒಮಿಕ್ರಾನ್ ವೈರಸ್ ಕಾಣಿಸಿಕೊಂಡ ಸಂಬಂಧ ದೇವನಹಳ್ಳಿ ವಿಮಾನ ನಿಲ್ದಾಣದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ದೇಶ-ವಿದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗುತ್ತಿದೆ. ವಿದೇಶದಿಂದ ಬರುವ ಪ್ರಯಾಣಿಕರನ್ನು ಆರೋಗ್ಯ ಸಿಬ್ಬಂದಿ ಸ್ಕ್ರೀನಿಂಗ್ ಮಾಡುತ್ತಿದ್ದು, ಇದರ ಬೆನ್ನಲ್ಲೇ ಸರ್ಕಾರ ಹೊಸ ಗೈಡ್ಲೈನ್ಸ್ ಜಾರಿಗೊಳಿಸಲು ಸಿದ್ಧತೆ ನಡೆಸಿದೆ ಎಂದು ತಿಳಿದು ಬಂದಿದೆ.
ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ ಇಂದು ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರು ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿ ಕೈಗೊಂಡಿರುವ ಮುನ್ನೆಚ್ಚರಿಕಾ ಕ್ರಮಗಳ ಕುರಿತಂತೆ ಪರಿಶೀಲನೆ ನಡೆಸಿದರು.
ಇದನ್ನೂ ಓದಿ: ಗಂಗಾವತಿಯಲ್ಲಿ ನಗ್ನ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ.. ಅತ್ಯಾಚಾರವೆಸಗಿ ಕೊಲೆ ಶಂಕೆ..