ಬೆಂಗಳೂರು: ಸವದತ್ತಿ ರೇಣುಕಾ ಯಲ್ಲಮ್ಮದೇವಿ ದೇವಸ್ಥಾನದ ಆವರಣದಲ್ಲಿ ಅಕ್ರಮ ಕಟ್ಟಡ ನಿರ್ಮಾಣಕ್ಕೆ ತಡೆ ನೀಡಿದ್ದರೂ, ಕಾಮಗಾರಿ ಮುಂದುವರೆಸಲು ಅವಕಾಶ ಮಾಡಿಕೊಟ್ಟಿರುವ ದೇವಸ್ಥಾನದ ಕಾರ್ಯ ನಿರ್ವಹಣಾಧಿಕಾರಿ ವಿವರಣೆ ನೀಡುವಂತೆ ಹೈಕೋರ್ಟ್ ಶೋಕಾಸ್ ನೋಟಿಸ್ ಜಾರಿ ಮಾಡಿದೆ.
ಬೆಳಗಾವಿ ಜಿಲ್ಲೆಯ ಇತಿಹಾಸ ಪ್ರಸಿದ್ದ ಯಲ್ಲಮ್ಮ ದೇವಿ ದೇವಸ್ಥಾನದ ಆವರಣದಲ್ಲಿ ಅಕ್ರಮ ಕಟ್ಟಡ ನಿರ್ಮಿಸುತ್ತಿರುವುದನ್ನು ಪ್ರಶ್ನಿಸಿ ಮಹೇಂದ್ರಗೌಡ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್ ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ಈ ವೇಳೆ, ಅರ್ಜಿದಾರರ ಪರ ವಕೀಲರು ವಾದಿಸಿ, ದೇವಸ್ಥಾನದ ಆಡಳಿತ ಮಂಡಳಿ ಆವರಣದಲ್ಲಿ ಕಟ್ಟಡ ನಿರ್ಮಾಣ ಮಾಡದಂತೆ ಹೈಕೋರ್ಟ್ ಅ.12ರಂದು ತಡೆಯಾಜ್ಞೆ ನೀಡಿದೆ. ಆದರೂ ಕಾಮಗಾರಿ ಮುಂದುವರಿಸಲಾಗಿದೆ ಎಂದು ತಿಳಿಸಿ, ಆ ಕುರಿತ ಫೋಟೋಗಳನ್ನು ಪೀಠದ ಮುಂದೆ ಹಾಜರು ಪಡಿಸಿದರು. ಕಾರ್ಯ ನಿರ್ವಹಣಾಧಿಕಾರಿ ಪರ ವಕೀಲರು ಪ್ರತಿಕ್ರಿಯಿಸಿ, ಕಾಮಗಾರಿ ನಡೆಸಿಲ್ಲ ಎಂದು ಸಮಜಾಯಿಸಿ ನೀಡಿದರು.
ವಾದ ಪ್ರತಿವಾದ ಆಲಿಸಿದ ಪೀಠ, ಅರ್ಜಿದಾರರು ಸಲ್ಲಿಸಿದ ಫೋಟೋಗಳನ್ನು ಪರಿಗಣಿಸಿ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿಗೆ ಶೋಕಾಸ್ ನೋಟಿಸ್ ಜಾರಿ ಮಾಡಿತು. ಹೈಕೋರ್ಟ್ ತಡೆಯಾಜ್ಞೆ ಮೀರಿ, ಕಾಮಗಾರಿ ಮುಂದುವರಿಸಲು ಅವಕಾಶ ಮಾಡಿಕೊಡಲಾಗಿದೆ. ಹೀಗಾಗಿ, ನಿಮ್ಮ ವಿರುದ್ಧ ನ್ಯಾಯಾಂಗ ನಿಂದನೆ ಆರೋಪದಡಿ ಕ್ರಮ ಜರುಗಿಸಬಾರದೇಕೆ ಎಂಬುದಕ್ಕೆ ವಿವರಣೆ ನೀಡಿ ಎಂದು ದೇವಸ್ಥಾನದ ಕಾರ್ಯ ನಿರ್ಹಣಾಧಿಕಾರಿಗೆ ಸೂಚಿಸಿ ನೋಟಿಸ್ ಜಾರಿಗೊಳಿಸಿತು.