ಯಾದಗಿರಿ:ಸುರೇಶ್ ಅಂಗಡಿ ನಿಧನದ ಹಿನ್ನೆಲೆಯಲ್ಲಿ ತೆರವಾದ ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪ ಚುನಾವಣೆ ಟಿಕೆಟ್ ಬಗ್ಗೆ ಪಕ್ಷದ ನಿರ್ಧಾರಕ್ಕೆ ಬದ್ಧ ಎಂದು ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು.
ಯಾದಗಿರಿ ಜಿಲ್ಲೆಯ ಶಹಾಪುರ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸತೀಶ್, ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿಯಲ್ಲಿ ನನ್ನ ಹೆಸರೂ ಇದೆ. ಈ ಬಗ್ಗೆ ಮೇಲ್ಮಟ್ಟದಲ್ಲಿ ಚರ್ಚೆ ನಡೆಯುತ್ತಿದೆ. ಹೈಕಮಾಂಡ್ ಈ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳಲಿದೆ ಎಂದರು.
ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ ದೆಹಲಿಯಲ್ಲಿ ಪ್ರತಿಭಟನೆ ನಡೆಸಿದ ರೈತರನ್ನು ಕೃಷಿ ಸಚಿವ ಬಿ.ಸಿ.ಪಾಟೀಲ್ ಭಯೋತ್ಪಾದಕರು ಎಂದು ಕರೆಯುವ ಮೂಲಕ ರೈತ ಸಮೂಹವನ್ನು ಅಪಮಾನ ಮಾಡಿದ್ದಾರೆ. ಟ್ರ್ಯಾಕ್ಟರ್ ಪರೇಡ್ ಹಿಂಸಾಚಾರಕ್ಕೆ ತಿರುಗಿದ್ದಕ್ಕೆ ರೈತರು ಕಾರಣರಲ್ಲ ಎಂದು ಈಗಾಗಲೇ ರೈತ ಸಂಘಟನೆಗಳು ಸ್ಪಷ್ಟಪಡಿಸಿವೆ. ಕೇಂದ್ರ ಜಾರಿಗೆ ತಂದಿರುವ ಕೃಷಿ ಕಾಯ್ದೆ ರದ್ದುಗೊಳಿಸುವವರೆಗೂ ನಡೆಯುತ್ತಿರುವ ಹೋರಾಟಕ್ಕೆ ಕಾಂಗ್ರೆಸ್ ಬೆಂಬಲ ನೀಡಲಿದೆ ಎಂದು ತಿಳಿಸಿದರು.
ಎಸ್ಟಿ ಸಮುದಾಯದ ಮೀಸಲಾತಿ ಹೆಚ್ಚಳದ ಬೇಡಿಕೆಯನ್ನು ಸರ್ಕಾರ ಈಡೇರಿಸಬೇಕು. ಈ ಬಗ್ಗೆ ಅವಶ್ಯವಿದ್ದಲ್ಲಿ ಹೋರಾಟ ತೀವ್ರಗೊಳಿಸಲಾಗುವುದು. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಖಾತೆಗಳ ಹಂಚಿಕೆಯಿಂದ ಸಚಿವರಲ್ಲಿ ಅಸಮಾಧಾನ ತಾಂಡವವಾಡುತ್ತಿದೆ. ಭ್ರಷ್ಟಚಾರ ಮೀತಿಮಿರಿದ್ದು, ಸರ್ಕಾರದ ಆಡಳಿತ ವೈಫಲ್ಯದಿಂದಾಗಿ ಜನತೆ ನಿತ್ಯ ತೊಂದರೆ ಎದುರಿಸುತ್ತಿದ್ದಾರೆ ಎಂದು ಆರೋಪಿಸಿದರು.