ಬೆಂಗಳೂರು: ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾದ ನಂತರ ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಯುಗ ಆರಂಭವಾಗಿದೆ. ರಾಜ್ಯದ ಮೂರು ಮಹಾನಗರ ಪಾಲಿಕೆಗಳ ಚುನಾವಣೆ ಫಲಿತಾಂಶ ಪ್ರಕಟವಾಗುತ್ತಿದ್ದಂತೆಯೇ ಕಲಬುರಗಿ ಮಹಾನಗರ ಪಾಲಿಕೆಯಲ್ಲಿ ಉಭಯ ಪಕ್ಷಗಳು ಕೈ ಜೋಡಿಸಿ ಅಧಿಕಾರ ಹಿಡಿಯಲು ಮುಂದಾಗಿವೆ.
ಮೈಸೂರು ಮಹಾನಗರ ಪಾಲಿಕೆಯಲ್ಲಿ ಕಾಂಗ್ರೆಸ್ ಜತೆಗಿನ ಸಖ್ಯವನ್ನು ಕಡಿದುಕೊಂಡು ಬಿಜೆಪಿ ಅಧಿಕಾರಕ್ಕೇರಲು ಸಹಕರಿಸಿದ ನಂತರ ಜೆಡಿಎಸ್ ಇದೀಗ 'ಕೈ' ಪಾಳೆಯವನ್ನು ಅಧಿಕಾರದಿಂದ ದೂರವಿಡಲು ಬಿಜೆಪಿ ಜೊತೆ ಕೈ ಜೋಡಿಸಲು ಸಜ್ಜಾಗಿದೆ.
ಈ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಜೆಡಿಎಸ್ ನಾಯಕ, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಮಾತುಕತೆ ನಡೆಸಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಕುರಿತು ಸುದ್ದಿಗಾರರಿಗೆ ಮಾಹಿತಿ ನೀಡಿದ್ದು, ಉಭಯ ಪಕ್ಷಗಳ ನಡುವೆ ಮೈತ್ರಿ ಯುಗ ಆರಂಭವಾಗಿರುವುದರ ಬಗ್ಗೆ ಸುಳಿವು ನೀಡಿದ್ದಾರೆ.
ಬಿಜೆಪಿಯ ಜತೆ ಕೈಗೂಡಿಸಿ ಅಧಿಕಾರ ಹಿಡಿಯುವ ಸಂಬಂಧ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಕೂಡಾ ಸುದ್ದಿಗಾರರ ಜೊತೆ ಮಾತನಾಡಿ, ಯಾವುದೇ ತೀರ್ಮಾನ ಕೈಗೊಳ್ಳುವ ಮುನ್ನ ಪಕ್ಷದ ಸ್ಥಳೀಯ ನಾಯಕರು, ಕಾರ್ಯಕರ್ತರ ಜತೆ ಮಾತುಕತೆ ನಡೆಸಿ ಎಂದು ಕುಮಾರಸ್ವಾಮಿ ಅವರಿಗೆ ಸೂಚಿಸಿರುವುದಾಗಿ ತಿಳಿಸಿದ್ದಾರೆ.