ರಾಷ್ಟ್ರೀಯ ಮಹಿಳಾ ಆಯೋಗ ಸದಸ್ಯೆ ಪ್ರತಿಕ್ರಿಯೆ ಬೆಳಗಾವಿ: ದುಷ್ಕರ್ಮಿಗಳಿಂದ ಅಮಾನವೀಯ ಕೃತ್ಯಕ್ಕೆ ಒಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಂತ್ರಸ್ತ ಮಹಿಳೆಯ ಆರೋಗ್ಯವನ್ನು ರಾಷ್ಟ್ರೀಯ ಮಹಿಳಾ ಆಯೋಗ ವಿಚಾರಿಸಿತು. ಇಂದು ಬೆಳಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಖಿ ಒನ್ ಸ್ಟಾಪ್ ಸೆಂಟರ್ಗೆ ಭೇಟಿ ನೀಡಿದ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಡೆಲಿನಾ ಖೊಂಗಡುಪ್ ನೇತೃತ್ವದ ತಂಡವು ಸಂತ್ರಸ್ತ ಮಹಿಳೆಗೆ ಸಾಂತ್ವನ ಹೇಳಿ ಧೈರ್ಯ ತುಂಬಿತು.
ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಡೆಲಿನಾ ಖೊಂಗಡುಪ್, ಮಹಿಳೆಯನ್ನು ವಿವಸ್ತ್ರಗೊಳಿಸಿರುವುದು ದುರದೃಷ್ಟಕರ. ಇಂತಹ ಘಟನೆ ಆಗಬಾರದಿತ್ತು. ಜನರು ತಮ್ಮ ಮನಸ್ಥಿತಿ ಬದಲಿಸಿಕೊಳ್ಳಬೇಕು. ಪೊಲೀಸ್ ತನಿಖೆ ಸರಿಯಾದ ದಿಕ್ಕಿನಲ್ಲಿ ಸಾಗುತ್ತಿದೆ. ಮಹಿಳೆಯನ್ನು ರಕ್ಷಿಸುವ ಕೆಲಸ ಆಗಬೇಕು. ಈ ಘಟನೆ ಸಹಿಸಿಕೊಳ್ಳಲು ಸಾಧ್ಯವಿಲ್ಲ. ಘಟನೆ ನಡೆದ ಸ್ಥಳಕ್ಕೂ ಭೇಟಿ ನೀಡಲಿದ್ದೇನೆ ಎಂದು ಹೇಳಿದರು.
ಈ ವೇಳೆ ಜಿಲ್ಲಾಧಿಕಾರಿ ನಿತೇಶ ಪಾಟೀಲ, ನಗರ ಪೊಲೀಸ್ ಆಯುಕ್ತ ಎಸ್.ಎನ್.ಸಿದ್ದರಾಮಪ್ಪ, ಡಿಸಿಪಿ ರೋಹನ್ ಜಗದೀಶ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಆರ್. ನಾಗರಾಜ ಸೇರಿ ಮತ್ತಿತರ ಅಧಿಕಾರಿಗಳು ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ಸಾಥ್ ಕೊಟ್ಟರು.
ಕಾಕತಿ ಇನ್ಸ್ಪೆಕ್ಟರ್ ಅಮಾನತು ಮಾಡಿದ ಆಯುಕ್ತರು:ಮಹಿಳೆಯನ್ನು ವಿವಸ್ತ್ರಗೊಳಿಸಿ ಕಂಬಕ್ಕೆ ಕಟ್ಟಿ ಹಲ್ಲೆ ನಡೆಸಿದ ಅಮಾನವೀಯ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಕತಿ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ವಿಜಯಕುಮಾರ ಸಿನ್ನೂರ ಅವರನ್ನು ಅಮಾನತುಗೊಳಿಸಿ ನಗರ ಪೊಲೀಸ್ ಆಯುಕ್ತ ಎಸ್ ಎನ್ ಸಿದ್ದರಾಮಪ್ಪ ಆದೇಶ ಹೊರಡಿಸಿದ್ದಾರೆ.
ಹೈಕೋರ್ಟ್ ಈ ಸಂಬಂಧ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡು, ಸರ್ಕಾರಕ್ಕೆ ಮತ್ತು ಪೊಲೀಸ್ ಅಧಿಕಾರಿಗಳನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿತ್ತು. ಈ ಹಿನ್ನೆಲೆಯಲ್ಲಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ನಗರ ಪೊಲೀಸ್ ಆಯುಕ್ತ ಎಸ್ ಎನ್ ಸಿದ್ದರಾಮಪ್ಪ ಅವರು ಕಾಕತಿ ಸಿಪಿಐ ವಿಜಯಕುಮಾರ ಸಿನ್ನೂರ ಅವರನ್ನು ಅಮಾನತು ಮಾಡಿದ್ದಾರೆ.
ಬೆಳಗಾವಿಗೆ ಆಗಮಿಸಿದ ಕೇಂದ್ರ ಬಿಜೆಪಿ ತಂಡ ಬೆಳಗಾವಿಗೆ ಆಗಮಿಸಿದ ಕೇಂದ್ರ ಬಿಜೆಪಿ ತಂಡ:ಬಿಜೆಪಿ ಕೂಡ ಈ ಅಮಾನವೀಯ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಇಂದು ಬೆಳಗ್ಗೆ ದೆಹಲಿಯಿಂದ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಸಂಸದರಾದ ಅಫ್ರಜಿತಾ ಸಾರಂಗಿ, ಶ್ರೀಮತಿ ಸುನಿತಾ ದುಗ್ಗಲ್, ಲಾಕೆಟ್ ಚಟರ್ಜಿ, ರಂಜಿತಾ ಕೋಲಿ, ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಆಶಾ ಲಾಕ್ರ ಅವರ ನಿಯೋಗ ಆಗಮಿಸಿದೆ. ಈ ತಂಡ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಂತ್ರಸ್ತ ಮಹಿಳೆಯ ಆರೋಗ್ಯ ವಿಚಾರಿಸಿ ಧೈರ್ಯ ತುಂಬಲಿದ್ದು, ಬಳಿಕ ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಲಿದೆ.
ಬೆಳಗಾವಿಗೆ ಆಗಮಿಸಿದ ಕೇಂದ್ರ ಬಿಜೆಪಿ ತಂಡ ಪ್ರಕರಣದ ಹಿನ್ನೆಲೆ:ಯುವಕನೋರ್ವ ಅದೇ ಗ್ರಾಮದ ಯುವತಿಯನ್ನು ಪ್ರೀತಿಸಿ ಊರಿನಿಂದ ಓಡಿಹೋದ ಕಾರಣಕ್ಕೆ ಯುವತಿಯ ಕುಟುಂಬಸ್ಥರು ಯುವಕನ ತಾಯಿಯನ್ನು ವಿವಸ್ತ್ರಗೊಳಿಸಿ ಮೆರವಣಿಗೆ ಮಾಡಿ, ನಂತರ ವಿದ್ಯುತ್ ಕಂಬಕ್ಕೆ ಕಟ್ಟಿ ಥಳಿಸಿರುವ ಘಟನೆ ಡಿಸೆಂಬರ್ 11ರಂದು ನಡೆದಿತ್ತು. ಈ ಸಂಬಂಧ ಈಗಾಗಲೇ 12ಮಂದಿಯನ್ನು ಪೊಲೀಸರು ಬಂಧಿಸಿದ್ದು, ತನಿಖೆ ನಡೆಯುತ್ತಿದೆ.
ಇದನ್ನೂ ಓದಿ:ಬೆಳಗಾವಿ ಪ್ರಕರಣ ಖಂಡಿಸಿ 5 ಸದಸ್ಯರ ಸತ್ಯಶೋಧನಾ ಸಮಿತಿ ರಚಿಸಿದ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ