ಬೆಳಗಾವಿ:ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪೊಲೀಸ್ ವ್ಯವಸ್ಥೆ ಸುಧಾರಣೆಗೆ ಕ್ರಮಕೈಗೊಳ್ಳಬೇಕೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಒತ್ತಾಯಿಸಿದರು.
ಇಲ್ಲಿನ ಕಾಂಗ್ರೆಸ್ ಭವನದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಪರಾಧ ಪ್ರಕರಣಗಳನ್ನು ತಡೆಗಟ್ಟಲು ಪೊಲೀಸ್ ವ್ಯವಸ್ಥೆಯನ್ನು ಸಮಗ್ರವಾಗಿ ಬದಲಾವಣೆ ಮಾಡಬೇಕಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ರಾಜ್ಯದ ಎಲ್ಲ ಪೊಲೀಸ್ ಠಾಣೆಗಳಲ್ಲೂ ಸಿಬ್ಬಂದಿಯ ಕೊರತೆ ಇದೆ. ಇದರಿಂದ ಪೊಲೀಸರು ತಮ್ಮ ದಿನನಿತ್ಯದ ಕರ್ತವ್ಯವನ್ನು ಒತ್ತಡದಲ್ಲಿ ನಿಭಾಯಿಸುತ್ತಿದ್ದಾರೆ. ಹೀಗಾಗಿ, ಹೆಚ್ಚು ಸಿಬ್ಬಂದಿಯನ್ನು ಸರ್ಕಾರ ನೇಮಿಸಿಕೊಳ್ಳಬೇಕು. ಹೊಸ ಪೊಲೀಸ್ ಠಾಣೆಗಳನ್ನು ತೆರೆಯಬೇಕು. ತಾಂತ್ರಿಕವಾಗಿಯೂ ಇಲಾಖೆಯಲ್ಲಿ ಸುಧಾರಣೆಯಾಗಬೇಕಿದೆ ಎಂದು ಹೇಳಿದರು.
ಗೃಹ ಸಚಿವರ ಹೇಳಿಕೆ ಅವರ ಮೇಲೆಯೇ ವ್ಯತಿರಿಕ್ತ ಪರಿಣಾಮ ಬೀರಿದೆ. ಬಿಜೆಪಿ ಶಾಸಕರು, ಸಚಿವರು ಮಹಿಳೆಯರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡುವುದು ಹೊಸದಲ್ಲ. ಈ ಹಿಂದೆಯೂ ಹಲವು ನಾಯಕರು ಅವಹೇಳನಕಾರಿಯಾಗಿ ಮಾತನಾಡಿದ್ದಾರೆಂದು ಎಂದು ಪ್ರತಿಕ್ರಿಯಿಸಿದರು.
ಕಾಂಗ್ರೆಸ್ ಮುಖಂಡರು ಪ್ರಚಾರಕ್ಕೆ ಬರಲಿದ್ದಾರೆ:
ಬೆಳಗಾವಿ ಚುನಾವಣಾ ಉಸ್ತುವಾರಿಗಳಾದ ಮಾಜಿ ಸಚಿವ ಎಂ.ಬಿ.ಪಾಟೀಲ, ರಾಜ್ಯಸಭಾ ಸದಸ್ಯರಾದ ಎಲ್.ಹನುಮಂತಯ್ಯ, ನಾಸಿರ್ ಹುಸೇನ್ ಸೇರಿ ಇನ್ನಿತರ ಮುಖಂಡರು ನಾಳೆಯಿಂದ ಪ್ರಚಾರಕ್ಕೆ ಬರಲಿದ್ದಾರೆ. ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಬೆಳಗಾವಿಗೆ ಏನು ಕೊಡುಗೆ ನೀಡಲಾಗಿದೆ ಎಂಬುದನ್ನು ಮುಂದಿಟ್ಟುಕೊಂಡು ಪ್ರಚಾರ ಮಾಡುತ್ತೇವೆ ಎಂದರು.