ಕಿತ್ತೂರು(ಬೆಳಗಾವಿ):ತಾಲೂಕಿನ ಉಗರಖೋಡ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕೈಗೊಳ್ಳಲಾದ ನರೇಗಾ ಕಾಮಗಾರಿ ಸ್ಥಳಕ್ಕೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ ಸಚಿವ ಕೆ.ಎಸ್.ಈಶ್ವರಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಬಳಿಕ ಮಾತನಾಡಿದ ಸಚಿವ ಈಶ್ವರಪ್ಪ, ನಾನು ಸಚಿವನಾದ ಮೇಲೆ ಉದ್ಯೋಗ ಖಾತ್ರಿ ಯೋಜನೆಯಡಿ 2,800 ಕೋಟಿ ರೂ. ಬಾಕಿ ಇತ್ತು. ಈಗ 200 ಕೋಟಿಗೆ ಇಳಿದಿದೆ. ಬೆಳಗಾವಿ ಜಿಲ್ಲೆಯಲ್ಲಿ ಒಟ್ಟು 85 ಸಾವಿರ ಕೂಲಿ ಕಾರ್ಮಿಕರು ಕೆಲಸಕ್ಕೆ ಬರುತ್ತಿದ್ದಾರೆ. ಈಗ ಅವರಿಗೆ 100 ದಿನಗಳ ಬದಲಾಗಿ 150 ದಿನಗಳವರೆಗೆ ಕೆಲಸ ಕೊಡಬೇಕೆಂದು ಸರ್ಕಾರ ನಿರ್ಧರಿಸಿದ್ದು, ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಮಾಡಿದವರು ಸಕಾಲದಲ್ಲಿ ದಾಖಲೆಗಳನ್ನು ಸಲ್ಲಿಸಿದರೆ ತಕ್ಷಣ ಹಣ ಬಿಡುಗಡೆಯಾಗಲಿದೆ ಎಂದರು.
ಹಳ್ಳಿಯ ಜನ ಬಹಳ ಬುದ್ಧಿವಂತರು. ಕೂಲಿ ಕೆಲಸಕ್ಕೆ ಬಂದರೂ ಮಾಸ್ಕ್ ಹಾಕಿಕೊಂಡು, ಸಾಮಾಜಿಕ ಅಂತರ ಕಾಯ್ದುಕೊಂಡೇ ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ಗ್ರಾಮೀಣ ಪ್ರದೇಶಗಳಲ್ಲಿ ಕೊರೊನಾ ರೋಗಿಗಳ ಸಂಖ್ಯೆ ಕಡಿಮೆ. ಪಟ್ಟಣ ಪ್ರದೇಶದ ಜನರಿಗಿಂತ ಹಳ್ಳಿಯಲ್ಲಿಯೇ ಸರ್ಕಾರದ ನಿಯಮಗಳನ್ನು ಹೆಚ್ಚಾಗಿ ಪಾಲಿಸುತ್ತಿದ್ದಾರೆ. ಹೀಗಾಗಿ ಗ್ರಾಮೀಣ ಪ್ರದೇಶದಲ್ಲಿ ರೋಗ ಹರಡುವಿಕೆ ಕಡಿಮೆಯಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳ ವರದಿ ಆಧಾರದ ಮೇಲೆ ಗ್ರಾಮ ಪಂಚಾಯಿತಿಗಳ ಚುನಾವಣೆ ನಡೆಸುವ ಬಗ್ಗೆ ತೀರ್ಮಾನಿಸಲಾಗುವುದು. ಕೊರೊನಾ ಹಿನ್ನೆಲೆ ಚುನಾವಣಾ ಅಧಿಕಾರಿಗಳು ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದು, ಈಗ ಚುನಾವಣೆ ಸೂಕ್ತವೋ ಅಥವಾ ಮುಂದೂಡಿದರೆ ಒಳ್ಳೆಯದೋ ಎಂಬುದರ ಕುರಿತು ಅಭಿಪ್ರಾಯ ಕೇಳಲಾಗಿದೆ. ಜಿಲ್ಲಾಧಿಕಾರಿಗಳ ವರದಿಗಳ ಆಧಾರ ಮೇಲೆ ಗ್ರಾಮ ಪಂಚಾಯತಿ ಚುನಾವಣೆ ನಿರ್ಧಾರವಾಗಲಿದೆ ಎಂದು ಸ್ಪಷ್ಟಪಡಿಸಿದರು.