ಪೊಲೀಸರ ಮಾರಣಾಂತಿಕ ಹಲ್ಲೆ ಖಂಡಿಸಿ ವಕೀಲರ ಪ್ರತಿಭಟನೆ ಬೆಳಗಾವಿ: ಚಿಕ್ಕಮಗಳೂರಿನ ವಕೀಲ ಪ್ರೀತಮ್ ಎಂಬವರ ಮೇಲೆ ಪೊಲೀಸರು ನಡೆಸಿದ್ದಾರೆ ಎನ್ನಲಾದ ಮಾರಣಾಂತಿಕ ಹಲ್ಲೆ ಖಂಡಿಸಿ ಬೆಳಗಾವಿಯ ರಾಣಿ ಚನ್ನಮ್ಮ ವೃತ್ತದಲ್ಲಿ ಇಂದು ಪ್ರತಿಭಟನೆ ನಡೆಯಿತು. ಸಾವಿರಾರು ವಕೀಲರು ಮಾನವ ಸರಪಳಿ ನಿರ್ಮಿಸಿ ರಸ್ತೆ ತಡೆದು, ಆಕ್ರೋಶ ವ್ಯಕ್ತಪಡಿಸಿದರು.
ಸರ್ಕಾರ ವಕೀಲರಿಗಾಗಿ ವಕೀಲರ ರಕ್ಷಣಾ ಕಾಯಿದೆಯನ್ನು ಜಾರಿಗೆ ತರಬೇಕು. ಚಿಕ್ಕಮಗಳೂರು ನಗರ ಪೊಲೀಸರು ಕ್ಷುಲ್ಲಕ ಕಾರಣಕ್ಕೆ ವಕೀಲನ ಮೇಲೆ ಮನಬಂದಂತೆ ಹಲ್ಲೆ ನಡೆಸಿರುವ ಕ್ರಮ ಸರಿಯಲ್ಲ. ಹಲ್ಲೆ ನಡೆಸಿದ ಪೊಲೀಸರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ವಕೀಲರ ಪ್ರತಿಭಟನೆ ಹಾಗೂ ಅಧಿವೇಶನದ ಹಿನ್ನೆಲೆಯಲ್ಲಿ ಸಚಿವರು, ಪ್ರತಿಪಕ್ಷ ನಾಯಕರು ತೆರಳುವ ಮಾರ್ಗದಲ್ಲಿ ಝೀರೋ ಟ್ರಾಫಿಕ್ ವ್ಯವಸ್ಥೆಯಿಂದಾಗಿ ಚನ್ನಮ್ಮ ವೃತ್ತದಲ್ಲಿ ಸಾರ್ವಜನಕರು ಕಿರಿಕಿರಿ ಅನುಭವಿಸಿದರು.
'ಸಿದ್ದರಾಮಯ್ಯ ಮಾತು ತಪ್ಪಿದ್ದಾರೆ'- ರೈತರ ಪ್ರತಿಭಟನೆ:ಕರ್ನಾಟಕದಲ್ಲಿ ಕೃಷಿ ಮಸೂದೆ ಕಾಯ್ದೆ ಜಾರಿಗೆ ತಂದಿರುವುದನ್ನು ಹಿಂಪಡೆಯಬೇಕೆಂದು ಒತ್ತಾಯಿಸಿ ಮತ್ತೊಂದೆಡೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ನೇತೃತ್ವದಲ್ಲಿ ಚನ್ನಮ್ಮ ವೃತ್ತದಿಂದ ಸುವರ್ಣ ವಿಧಾನಸೌಧದವರೆಗೂ ಪ್ರತಿಭಟನಾ ಜಾಥಾ ನಡೆಸಿದರು. ಚನ್ನಮ್ಮ ವಿಗ್ರಹಕ್ಕೆ ಮಾಲಾರ್ಪಣೆ ಮಾಡಿದ ಬಳಿಕ ಜಾಥಾ ಆರಂಭಿಸಿದ ಕೋಡಿಹಳ್ಳಿ ಚಂದ್ರಶೇಖರ್ ಮತ್ತು ಅವರ ಬೆಂಬಲಿಗರು, ಮೂರು ಕೆಎಸ್ಆರ್‌ಟಿಸಿ ಬಸ್ಗಳಲ್ಲಿ ಸುವರ್ಣಸೌಧ ಪ್ರತಿಭಟನಾ ಟೆಂಟ್ನತ್ತ ತೆರಳಿದರು.
ಇದೇ ವೇಳೆ ಮಾಧ್ಯಮಗಳ ಜೊತೆಗೆ ಮಾತನಾಡಿದ ಕೋಡಿಹಳ್ಳಿ ಚಂದ್ರಶೇಖರ್, ಬಂಧನ ಮಾಡುವುದು ಸರ್ಕಾರದ ಧೋರಣೆಯಾದರೆ, ಚಳುವಳಿ ಮಾಡುವುದು ನಮ್ಮ ಹಕ್ಕು, ನಾವು ಮಾಡುತ್ತೇವೆ. ಕೊಟ್ಟ ಮಾತಿಗೆ ಸಿದ್ದರಾಮಯ್ಯ ತಪ್ಪಿದ್ದಾರೆ. ಬರಗಾಲ ನಿರ್ವಹಿಸುವಲ್ಲಿ ಸೋತಿದ್ದಾರೆ. ಹಾಗಾಗಿ, ಇಂದು ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಹಾಕಿಯೇ ತಿರುತ್ತೇವೆ ಎಂದರು.
ನಮ್ಮ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ ಕೃಷಿ ಮಸೂದೆ ಕಾಯ್ದೆಯನ್ನು ಹಿಂಪಡೆಯುವುದಾಗಿ ಹೇಳಿ ಈಗ ರೈತರ ದಿಕ್ಕು ತಪ್ಪಿಸುವ ಹುನ್ನಾರ ನಡೆಸಿದ್ದಾರೆ. ಬಿಜೆಪಿ ಸರ್ಕಾರ ಜಾರಿಗೆ ತಂದ ಕೃಷಿ ಮಸೂದೆ ಕಾಯ್ದೆಯನ್ನು ಅಂಗೀಕಾರಗೊಳಿಸಲು ಕಾಂಗ್ರೆಸ್ ಸರ್ಕಾರ ಸಹಕಾರ ನೀಡುತ್ತಿದೆ ಎನ್ನುವ ಅನುಮಾನ ಕಾಡುತ್ತಿದೆ. ಕೃಷಿಯಲ್ಲಿ ಹೆಚ್ಚಿನ ತೆರಿಗೆ ಸಂಗ್ರಹವಾಗುತ್ತಿದೆ ಎಂದುಕೊಂಡು ಈ ಕಾಯ್ದೆಯನ್ನು ಹಿಂಪಡೆಯಲು ಸಾಧ್ಯವಾಗುತ್ತಿಲ್ಲವೇ ಎಂದು ಅವರು ಪ್ರಶ್ನಿಸಿದರು.
ಇದನ್ನೂ ಓದಿ: ಉತ್ತರ ಕರ್ನಾಟಕಕ್ಕೆ ನ್ಯಾಯ ಕೊಡುವವರೆಗೆ ಶಾಸಕಾಂಗ ಸಭೆಗೆ ಹಾಜರಾಗಲ್ಲ: ಯತ್ನಾಳ್