ಬೆಳಗಾವಿ: ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡು ಓಬಿಸಿ ಸಮುದಾಯದ ಜನರನ್ನು ಒಗ್ಗೂಡಿಸುವ ಕೆಲಸ ಮಾಡಲಾಗುವುದು ಎಂದು ಕಾಂಗ್ರೆಸ್ ಓಬಿಸಿ ಘಟಕದ ನೂತನ ಅಧ್ಯಕ್ಷ ಮಧು ಬಂಗಾರಪ್ಪ ಹೇಳಿದರು. ಬೆಳಗಾವಿಯ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಓಬಿಸಿ ಘಟಕದ ಅಧ್ಯಕ್ಷನಾದ ನಂತರ ರಾಜ್ಯ ಸುತ್ತಿ ಪಕ್ಷ ಸಂಘಟನೆ ಮಾಡುವ ಕಾರ್ಯ ಮಾಡುತ್ತಿದ್ದೇನೆ. ಇದಕ್ಕೆ ಪೂರಕವಾಗಿ ಜಿಲ್ಲೆಯಾದ್ಯಂತ ಓಬಿಸಿ ಸಮಾವೇಶಗಳನ್ನು ನಡೆಸಲಾಗುವುದು ಎಂದರು.
ಚುನಾವಣೆಯಲ್ಲಿ ಮತಗಳನ್ನು ಗಮನಿಸಿದಾಗ ಶೇ.52 ರಿಂದ 58 ರಷ್ಟು ಮತಗಳು ಓಬಿಸಿ ಅವರದ್ದೇ ಇರುತ್ತದೆ. ಈ ಹಿನ್ನೆಲೆಯಲ್ಲಿ ಮಂಡ್ಯ, ಮೈಸೂರು, ಚಾಮರಾಜನಗರದ ಪ್ರವಾಸ ಮಾಡಿದ್ದೇನೆ. ಈಗ ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದು ಜಿಲ್ಲೆಯಲ್ಲಿ ಎಸ್ಸಿ, ಎಸ್ಟಿ ಸೇರಿದಂತೆ ಓಬಿಸಿ ಸಮುದಾಯವನ್ನು ಒಗ್ಗೂಡಿಸಲಾಗುವುದು ಎಂದು ತಿಳಿಸಿದರು.
ಕಾಂಗ್ರೆಸ್ ಪಕ್ಷ ವಿಶೇಷವಾಗಿ ಹಿಂದುಳಿದ ಜನರ ಅಭಿವೃದ್ಧಿಗೆ ಪೂರಕವಾಗಿ ಯೋಜನೆ ರೂಪಿಸುತ್ತದೆ. ಅದೇ ಬಿಜೆಪಿ ಜಾತಿ ಧರ್ಮದ ಮೇಲೆ ರಾಜಕಾರಣ ಮಾಡುತ್ತದೆ. ಇದರಿಂದ ರಾಜ್ಯದ ಜನರು ಬೇಸತ್ತು ಹೋಗಿದ್ದು, ಬದಲಾವಣೆ ಬಯಸಿದ್ದಾರೆ. ಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಗೆಲುವು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.