ಬೆಳಗಾವಿ:ಲೋಕಸಭಾ ಕ್ಷೇತ್ರದ ಉಪಚುನಾವಣೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ನಡೆಯಲಿದೆ ಎಂದು ಅಭ್ಯರ್ಥಿ ಆಯ್ಕೆ ಸಮಿತಿ ಅಧ್ಯಕ್ಷ ಹಾಗೂ ಮಾಜಿ ಸಚಿವ ಎಂ.ಬಿ.ಪಾಟೀಲ್ ಹೇಳಿದರು.
ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂದು ನಡೆದ ಸಭೆಯಲ್ಲಿ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ಚುನಾವಣೆ ಎದುರಿಸಲು ನಿರ್ಣಯ ಕೈಗೊಳ್ಳಲಾಗಿದೆ. ಅಭ್ಯರ್ಥಿ ಆಯ್ಕೆ ಸಂಬಂಧ ಆರಂಭಿಕ ಹಂತದಲ್ಲಿ ಇಂದು ಸಭೆ ನಡೆಸಲಾಗಿದೆ. ಮುಂದಿನ ವಾರ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ಜಿಲ್ಲಾಮಟ್ಟದ ನಾಯಕರನ್ನು ಒಳಗೊಂಡ ಮತ್ತೊಂದು ಸಭೆ ನಡೆಸಲು ತೀರ್ಮಾನಿಸಲಾಗಿದೆ. ಇದಾದ ಬಳಿಕ ಬೆಳಗಾವಿ ಲೋಕಸಭೆ ಕ್ಷೇತ್ರದ ಪ್ರತಿ ವಿಧಾನಸಭೆ ಕ್ಷೇತ್ರದಲ್ಲಿ ಸಭೆ ನಡೆಸಿ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಲಾಗುವುದು ಎಂದರು.
ಸತೀಶ್ ಜಾರಕಿಹೊಳಿ ಒಳಗೊಂಡಂತೆ ಎಂಟು ಜನರು ಸ್ಪರ್ಧಿಸಲು ಆಸಕ್ತಿ ತೋರಿದ್ದಾರೆ. ಇಂದು ನಡೆದ ಸಭೆಯಲ್ಲಿ ಸತೀಶ್ ಜಾರಕಿಹೊಳಿ ಅವರೇ ಸ್ಪರ್ಧಿಸಲಿ ಎಂದು ಜಿಲ್ಲಾ ನಾಯಕರು ಅಭಿಪ್ರಾಯ ಮಂಡಿಸಿದ್ದಾರೆ. ಚುನಾವಣೆ ಘೋಷಣೆ ಬಳಿಕ ಮತ್ತಷ್ಟು ಜನರು ಆಸಕ್ತಿ ವಹಿಸಬಹುದು. ಎಲ್ಲರ ಅರ್ಜಿಗಳನ್ನು ಸ್ವೀಕರಿಸಿ ಹಾಗೂ ಕ್ಷೇತ್ರದ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸುತ್ತೇವೆ ಎಂದರು.
ಮರಾಠ ಅಭಿವೃದ್ಧಿ ನಿಗಮ ಬಗ್ಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ. ಈ ಬಗ್ಗೆ ಪಕ್ಷದ ನಾಯಕರೇ ಪ್ರತಿಕ್ರಿಯೆ ನೀಡುತ್ತಾರೆ. ನನಗೆ ಅಭ್ಯರ್ಥಿ ಆಯ್ಕೆ ಜವಾಬ್ದಾರಿ ಕೊಟ್ಟಿದ್ದಾರೆ. ಅದರ ಭಾಗವಾಗಿ ಇಂದು ಮೊದಲ ಸಭೆ ನಡೆಸಲಾಗಿದೆ. ಮುಂದೆಯೂ ಇನ್ನೆರಡು ಸಭೆ ನಡೆಸಿ ಒಮ್ಮತದ ಅಭ್ಯರ್ಥಿ ಆಯ್ಕೆ ಮಾಡುತ್ತೇವೆ. ಬಳಿಕ ಆಕಾಂಕ್ಷಿಗಳ ಪಟ್ಟಿಯನ್ನು ಕೆಪಿಸಿಸಿಗೆ ರವಾನಿಸುತ್ತೇವೆ ಎಂದರು.