ಬೆಳಗಾವಿ/ಪುಣೆ:ಶಿವಸೇನೆಯ ಉದ್ಧವ್ ಠಾಕ್ರೆ ಬಣದ ಕಾರ್ಯಕರ್ತರು ಮಹಾರಾಷ್ಟ್ರದ ಪುಣೆಯಲ್ಲಿ ಕರ್ನಾಟಕದ ಬಸ್ಸಿಗೆ ಮಸಿ ಬಳಿದಿದ್ದಾರೆ. ಇದು ಕರ್ನಾಟಕ ಮಹಾರಾಷ್ಟ್ರ ಗಡಿಯಲ್ಲಿ ಉದ್ವಿಗ್ನ ವಾತಾವರಣ ಉಂಟು ಮಾಡಿದೆ. ಪೊಲೀಸರ ಸೂಚನೆಯ ಮೇರೆಗೆ ಬೆಳಗಾವಿ ಗಡಿ ಜಿಲ್ಲೆಯಿಂದ ಮಹಾರಾಷ್ಟ್ರಕ್ಕೆ ಹೋಗುವ ಬಸ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ.
ಬೆಳಗಾವಿಯಲ್ಲಿ ಉದ್ವಿಗ್ನತೆ ಸೃಷ್ಟಿಸುವ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಎದುರು ಇಂದು ಎಂಇಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಹಾಗೆಯೇ ನಾಡದ್ರೋಹಿ ಘೋಷಣೆಗಳನ್ನೂ ಕೂಗಿದ್ದಾರೆ. ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲು ಬಂದಿದ್ದಾಗ ಬೆಳಗಾವಿ, ಕಾರವಾರ, ನಿಪ್ಪಾಣಿ, ಬಾಲ್ಕಿ ಸಂಯುಕ್ತ ಮಹಾರಾಷ್ಟ್ರ ಭಾಗ ಎಂದೆಲ್ಲಾ ಘೋಷಣೆಗಳನ್ನು ಮೊಳಗಿಸಿದ್ದಾರೆ. ಪ್ರತಿಭಟನಾನಿರತ ಎಂಇಎಸ್ ಕಾರ್ಯಕರ್ತರನ್ನು ಮಾರ್ಕೆಟ್ ಠಾಣೆ ಪೊಲೀಸರು ವಶಕ್ಕೆ ಪಡೆದರು.