ಬೆಳಗಾವಿ:ಬೆಳಗಾವಿ ದೊಡ್ಡ ಜಿಲ್ಲೆಯಾಗಿರುವುದರಿಂದ ಶೈಕ್ಷಣಿಕ ಜಿಲ್ಲೆಯ ಮಾದರಿಯಲ್ಲಿ ಚಿಕ್ಕೋಡಿಯನ್ನು ಕೃಷಿ ಜಿಲ್ಲೆಯಾಗಿ ಘೋಷಿಸುವ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚರ್ಚಿಸಲಾಗುವುದು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಭರವಸೆ ನೀಡಿದರು.
ರಸಗೊಬ್ಬರ, ಬಿತ್ತನೆ ಬೀಜಗಳ ಲಭ್ಯತೆ ಸೇರಿದಂತೆ ವಿವಿಧ ವಿಷಯಗಳ ಕುರಿತು ಸೋಮವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಚಿಕ್ಕೋಡಿಯನ್ನು ಕೃಷಿ ಜಿಲ್ಲೆಯಾಗಿ ಘೋಷಿಸುವ ಮೂಲಕ ಐತಿಹಾಸಿಕ ನಿರ್ಣಯ ಕೈಗೊಳ್ಳಬೇಕು ಎಂದು ಕುಡಚಿ ಶಾಸಕ ಪಿ.ರಾಜೀವ್ ಒತ್ತಾಯಿಸಿದರು. ಇದಕ್ಕೆ ಸ್ಪಂದಿಸಿದ ಕೃಷಿ ಸಚಿವರು, ಈ ರೀತಿ ಕೃಷಿ ಜಿಲ್ಲೆ ಘೋಷಿಸುವ ಬಗ್ಗೆ ಗೊತ್ತಿಲ್ಲ. ಅಧಿಕಾರಿಗಳ ಜತೆ ಚರ್ಚಿಸಿ ಈ ಬಗ್ಗೆ ಪರಿಶೀಲಿಸಲಾಗುವುದು ಎಂದರು.
ಜಿಲ್ಲೆಯಲ್ಲಿ ಬಿತ್ತನೆ ಬೀಜ, ಗೊಬ್ಬರದ ಕೊರತೆಯಿಲ್ಲ;ಸಮರ್ಪಕ ದಾಸ್ತಾನು ಲಭ್ಯವಿದ್ದು, ಯಾವುದೇ ಕಾರಣಕ್ಕೂ ಕಾಳಸಂತೆಯಲ್ಲಿ ಸಬ್ಸಿಡಿ ಗೊಬ್ಬರ ಮಾರಾಟ ಮಾಡದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಗೊಬ್ಬರ ಸಮರ್ಪಕ ವಿತರಣೆಗೆ ಸೂಚನೆ:ಫೆಡರೇಶನ್ ಮೂಲಕ ಸಮರ್ಪಕವಾಗಿ ಗೊಬ್ಬರ ವಿತರಿಸಬೇಕು. ಸಾಕಷ್ಟು ದಾಸ್ತಾನು ಇರುವುದರಿಂದ ಸಮರ್ಪಕ ವಿತರಣೆ ಮಾಡಬೇಕು ಇಲ್ಲದಿದ್ದರೆ ಸಂಬಂಧಿಸಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು. ಹೊಸ ತಾಲೂಕು ಪುನರ್ವಿಂಗಡಣೆ ಬಳಿಕವೇ ಅಗತ್ಯ ರೈತ ಸಂಪರ್ಕ ಕೇಂದ್ರಗಳನ್ನು ಆರಂಭಿಸಲು ಕ್ರಮಕೈಗೊಳ್ಳಲಾಗುವುದು. ಹಣಕಾಸು ಇಲಾಖೆಯ ಒಪ್ಪಿಗೆ ದೊರೆತ ಬಳಿಕ ನೂತನ ತಾಲೂಕುಗಳಿಗೆ ಕೃಷಿ ಸಹಾಯಕ ನಿರ್ದೇಶಕರ ಹುದ್ದೆ ಮಂಜೂರು ಮಾಡಲಾಗುತ್ತದೆ ಎಂದು ತಿಳಿಸಿದರು.
ಬೆಳೆ ಸಮೀಕ್ಷೆ; ಭೂಮಿ ಸಾಫ್ಟ್ವೇರ್ಗೆ ಲಿಂಕ್:ರೈತರಿಂದಲೇ ಬೆಳೆ ಸಮೀಕ್ಷೆಗೆ ಉತ್ತಮ ಪ್ರತಿಕ್ರಿಯೆ ಲಭಿಸಿದೆ. ಈ ಬಾರಿ ಭೂಮಿ ಸಾಫ್ಟ್ವೇರ್ಗೆ ಲಿಂಕ್ ಮಾಡುವುದರಿಂದ ಬೆಳೆ ಸಮೀಕ್ಷೆ ವಿವರ ನೇರವಾಗಿ ಪಹಣಿಗೆ ಸೇರ್ಪಡೆಯಾಗಲಿದೆ. ಇದರಿಂದ ಹೆಚ್ಚಿನ ಅನುಕೂಲವಾಗಲಿದೆ ಎಂದು ಹೇಳಿದರು. ಕೃಷಿ ವಿಶ್ವವಿದ್ಯಾಲಯದ ಪ್ರಾಧ್ಯಾಪಕರು ಹಾಗೂ ಸಂಶೋಧಕರು ಕೃಷಿ ಕ್ಷೇತ್ರಗಳಿಗೆ ಭೇಟಿ ನೀಡಿ ರೈತರ ಜತೆ ಸಮಾಲೋಚನೆ ನಡೆಸಬೇಕು ಎಂದು ಈಗಾಗಲೇ ಸುತ್ತೋಲೆ ಹೊರಡಿಸಲಾಗಿದ್ದು, ಈ ಬಗ್ಗೆ ಇಲಾಖೆಯ ವತಿಯಿಂದ ವರದಿ ಪಡೆದುಕೊಳ್ಳಲಾಗುತ್ತಿದೆ ಎಂದರು.
ರಾಜ್ಯಕ್ಕೆ ಪ್ರಥಮ ಸ್ಥಾನ:ಪಿಎಂ ಕಿಸಾನ್ ಯೋಜನೆಯಲ್ಲಿ ರಾಜ್ಯ ಪ್ರಥಮ ಸ್ಥಾನದಲ್ಲಿದೆ. ಅದೇ ರೀತಿ ರೈತರಿಂದಲೇ ಬೆಳೆ ಸಮೀಕ್ಷೆ ಯೋಜನೆ ಬಗ್ಗೆ ಕೇಂದ್ರ ಸರ್ಕಾರ ಮೆಚ್ಚುಗೆ ವ್ಯಕ್ತಪಡಿಸಿದ್ದು, ರಾಷ್ಟ್ರಮಟ್ಟದಲ್ಲಿ ಇದನ್ನು ಜಾರಿಗೊಳಿಸುವುದಕ್ಕೆ ಚಿಂತನೆ ನಡೆಸಿದೆ ಎಂದು ಸಚಿವ ಬಿ.ಸಿ.ಪಾಟೀಲ್ ತಿಳಿಸಿದರು.