ಬೆಳಗಾವಿ: ಬೆಳಗಾವಿಯ ಹಿಂಡಲಗಾದಲ್ಲಿರುವ ಕೇಂದ್ರ ಕಾರಾಗೃಹದಲ್ಲಿ ಅಕ್ರಮ ಚಟುವಟಿಕೆಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಇಂದು ಜೈಲಿಗೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಜೈಲು ಅಧಿಕಾರಿಗಳನ್ನು ಈ ವೇಳೆ ತರಾಟೆಗೆ ತೆಗೆದುಕೊಂಡಿದ್ದಾರೆ.
ಹಿಂಡಲಗಾ ಜೈಲಿನಲ್ಲಿ ಹಣ ಕೊಟ್ಟರೆ ಕೈದಿಗಳಿಗೆ ಮೊಬೈಲ್ ಫೋನ್ ಸೇರಿ ಎಲ್ಲ ರೀತಿಯ ವ್ಯವಸ್ಥೆ ಮಾಡಲಾಗುತ್ತದೆ. ಇಲ್ಲದಿದ್ದರೆ ಸರಿಯಾದ ಸೌಲಭ್ಯಗಳನ್ನು ನೀಡುವುದಿಲ್ಲ ಎಂಬ ಬಗ್ಗೆ ಸ್ವತಃ ಅಲ್ಲಿನ ಕೈದಿಯೊಬ್ಬ ಜೈಲಿನಿಂದಲೇ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದ. ಅಲ್ಲದೇ ಇಲ್ಲಿನ ಕೈದಿಯೊಬ್ಬ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಕರೆ ಮಾಡಿ ಜೀವ ಬೆದರಿಕೆ ಹಾಕಿದ್ದ. ಅಷ್ಟೇ ಅಲ್ಲದೇ ಕೈದಿಗಳು ಹೊಡೆದಾಡಿಕೊಂಡಿದ್ದ ಘಟನೆ ಸೇರಿ ಹಲವಾರು ವಿಚಾರಗಳಿಂದ ಇಡೀ ರಾಜ್ಯದಲ್ಲೇ ಹಿಂಡಲಗಾ ಜೈಲು ತೀವ್ರ ಟೀಕೆಗೆ ಗ್ರಾಸವಾಗಿತ್ತು.
ಈ ಎಲ್ಲ ವಿಚಾರಗಳನ್ನು ಗಂಭೀರವಾಗಿ ಪರಿಗಣಿಸಿರುವ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಇಂದು ಬೆಳಗಾವಿಗೆ ಭೇಟಿ ನೀಡಿದ ವೇಳೆ ಹಿಂಡಲಗಾ ಜೈಲಿಗೂ ತೆರಳಿ ಅಲ್ಲಿನ ವ್ಯವಸ್ಥೆ ಪರಿಶೀಲಿಸಿದರು. ಜೈಲಿನಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಬೇಕು. ಮತ್ತೆ ಈ ರೀತಿ ಘಟನೆಗಳು ಮರುಕಳಿಸದಂತೆ ಕಟ್ಟೆಚ್ಚರ ವಹಿಸುವಂತೆ ಜೈಲು ಅಧಿಕಾರಿಗಳಿಗೆ ತಾಖೀತು ಮಾಡಿದರು.