ಬೆಳಗಾವಿ:ನೆರೆಯ ಮಹಾರಾಷ್ಟ್ರದಲ್ಲಿ ಮಳೆಯ ಪ್ರಮಾಣ ಕಡಿಮೆಗೊಂಡಿರುವುದರಿಂದ ಜಿಲ್ಲೆಯಲ್ಲಿ ಯಾವುದೇ ಆತಂಕವಿಲ್ಲ. ಆದಾಗ್ಯೂ ಮಳೆಯ ಪ್ರಮಾಣ ಹೆಚ್ಚಾದರೆ ಅದನ್ನು ಗಮನದಲ್ಲಿರಿಸಿಕೊಂಡು ಆಲಮಟ್ಟಿ ಜಲಾಶಯದಿಂದ ಇನ್ನಷ್ಟು ನೀರು ಬಿಡುಗಡೆ ಮಾಡಲು ಮುನ್ನೆಚ್ಚರಿಕೆಯ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅತಿವೃಷ್ಟಿ ಹಾಗೂ ಕೋವಿಡ್ ನಿರ್ವಹಣೆಗೆ ಸಂಬಂಧಿಸಿದಂತೆ ನಗರದ ಪ್ರವಾಸಿಮಂದಿರದಲ್ಲಿ ಶುಕ್ರವಾರ ನಡೆದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕೃಷ್ಣಾ ನದಿಯಲ್ಲಿ ನೀರಿನ ಹರಿವು 2.30 ಲಕ್ಷ ಕ್ಯೂಸೆಕ್ ಗಿಂತ ಅಧಿಕಗೊಂಡಾಗ ಮಾತ್ರ ಪ್ರವಾಹ ಪರಿಸ್ಥಿತಿ ಉಂಟಾಗುತ್ತದೆ. ಇಂದು ಮಳೆ ಕಡಿಮೆಯಾಗಿರುವುದರಿಂದ ಯಾವುದೇ ತೊಂದರೆಯಿಲ್ಲ. ಈ ಹಿಂದೆ ಪ್ರವಾಹದಿಂದ ಮನೆಗಳ ಹಾನಿಗೆ ಸಂಬಂಧಿಸಿದಂತೆ ಈಗಾಗಲೇ ಸಮೀಕ್ಷೆ ಪೂರ್ಣಗೊಂಡಿರುವ ಕಡೆಗಳಲ್ಲಿ ತಕ್ಷಣವೇ ಪರಿಹಾರ ಹಣ ಬಿಡುಗಡೆ ಮಾಡುವಂತೆ ಸಚಿವರು ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದರು.