ಬೆಳಗಾವಿ: ಯಾದವಾಡ ಪ್ರಾಥಮಿಕ ಆರೋಗ್ಯ ಕೇಂದ್ರದ ನೂತನ ಕಟ್ಟಡದ ಕಾಮಗಾರಿಯನ್ನು ಒಂದು ವಾರದೊಳಗೆ ಆರಂಭಿಸಲಾಗುವುದು. ಇದಕ್ಕಾಗಿ 50 ಲಕ್ಷ ರೂಪಾಯಿ ನೀಡುವುದಾಗಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.
ಮೂಡಲಗಿ ತಾಲೂಕಿನ ಯಾದವಾಡ ಪ್ರಾಥಮಿಕ ಆರೋಗ್ಯ ಕೇಂದ್ರ ಪರಿಶೀಲಿಸಿದ ಬಳಿಕ ಮಾತನಾಡಿದ ಅವರು, ಹೊಸ ಆಸ್ಪತ್ರೆ ಕಟ್ಟಡ ನಿರ್ಮಾಣಕ್ಕೆ ಸರ್ಕಾರದಿಂದ ಮಂಜೂರಾತಿ ಹಾಗೂ ಅನುದಾನ ಬರುವುದು ವಿಳಂಬವಾಗುತ್ತಿದೆ. ಆದ್ದರಿಂದ ತಾವೇ ಕಟ್ಟಡದ ವೆಚ್ಚ ಭರಿಸುತ್ತಿರುವುದಾಗಿ ಹೇಳಿದರು.
ಪ್ರಾಥಮಿಕ ಆರೋಗ್ಯ ಕೇಂದ್ರದ ಕಟ್ಟಡ ಶಿಥಿಲಾವಸ್ಥೆಯಲ್ಲಿ ಇರುವುದರಿಂದ ರೋಗಿಗಳ ಚಿಕಿತ್ಸೆಗೆ ಸಮಸ್ಯೆಯಾಗುತ್ತಿದೆ. ಆದ್ದರಿಂದ, 4 ಎಕರೆ ನಿವೇಶನದಲ್ಲಿ ಸುಸಜ್ಜಿತ ಆಸ್ಪತ್ರೆ ಕಟ್ಟಡ ನಿರ್ಮಿಸಲಾಗುವುದು. ವಾರದೊಳಗೆ ಕಟ್ಟಡ ಕಾಮಗಾರಿಯನ್ನು ಆರಂಭಿಸಿ, ಈ ಭಾಗದ ರೋಗಿಗಳಿಗೆ ಅನುಕೂಲ ಕಲ್ಪಿಸಿಕೊಡಲಾಗುವುದು ಎಂದು ಬಾಲಚಂದ್ರ ಜಾರಕಿಹೊಳಿ ಹೇಳಿದರು.
ನೂತನ ಆಸ್ಪತ್ರೆ ಕಟ್ಟಡ ನಿರ್ಮಾಣಕ್ಕೆ ನಾನು 25 ಲಕ್ಷ ರೂ. ಮತ್ತು ಡಾಲ್ಮಿಯಾ ಸಿಮೆಂಟ್ ಕಾರ್ಖಾನೆಯವರು 25 ಲಕ್ಷ ರೂ. ನೀಡುತ್ತಿದ್ದೇವೆ ಎಂದು ಶಾಸಕರು ತಿಳಿಸಿದರು.
ಕೋವಿಡ್ ಮೂರನೇ ಅಲೆ ಬರುವ ಮುನ್ನೆಚ್ಚರಿಕೆ ಇರುವುದರಿಂದ, ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಅಧಿಕಾರಿಗಳು ಸಹ ಈ ನಿಟ್ಟಿನಲ್ಲಿ ಕಾರ್ಯ ಪ್ರವೃತ್ತರಾಗಿದ್ದಾರೆ. ಜನರು ಸರ್ಕಾರದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಿ ಸೋಂಕು ಹರಡದಂತೆ ಮುನ್ನೆಚ್ಚರಿಕೆ ವಹಿಸಬೇಕಾಗಿ ಮನವಿ ಮಾಡಿದರು.