ಚಿಕ್ಕೋಡಿ :ಬಿಜೆಪಿ ಪಕ್ಷದ 40 ಜನ ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಆಗುತ್ತಿರುವ ನಿಟ್ಟಿನಲ್ಲಿ ಪಕ್ಷದ ವರಿಷ್ಠರ ಮಟ್ಟದಲ್ಲಿ ಚರ್ಚೆ ಆಗಿರುವುದು ನಿಜ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು.
ಆಪರೇಷನ್ ಹಸ್ತ ಕುರಿತಂತೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿಕೆ ನೀಡಿರುವುದು..
ಹುಕ್ಕೇರಿ ತಾಲೂಕಿನ ಕರಗುಪ್ಪಿ ಗ್ರಾಮದಲ್ಲಿ ಅವರ ಪುತ್ರ ರಾಹುಲ್ ಜಾರಕಿಹೊಳಿ ಅವರ ಹುಟ್ಟು ಹಬ್ಬ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಶಾಸಕರು ಕಾಂಗ್ರೆಸ್ ಸೇರ್ಪಡೆ ಕುರಿತು ಬೆಂಗಳೂರಿನಲ್ಲಿ ವರಷ್ಠರ ಹಂತದಲ್ಲಿ ಚರ್ಚೆ ನಡೆದಿರೋದು ನಿಜ. ಯಾರು ಎಷ್ಟು ಜನ ಬರ್ತಾರೆ ಅಂತಾ ನನಗೆ ಮಾಹಿತಿ ಇಲ್ಲ. ಆದರೆ, ಶಾಸಕರು ಕಾಂಗ್ರೆಸ್‍ಗೆ ಬರುವ ಬಗ್ಗೆ ಚರ್ಚೆ ಆಗಿದೆ ಎಂದರು.
ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಮಾಜಿ ಶಾಸಕ ಸಂಜಯ್ ಪಾಟೀಲ್ ಅವಹೇಳನಕಾರಿ ಹೇಳಿಕೆ ವಿಚಾರಕ್ಕೆ ಮಾತನಾಡಿ, ಸಂಜಯ್ ಪಾಟೀಲ್ ಇಂತಹ ಹೇಳಿಕೆಗಳನ್ನು ಕೊಡುವುದು ಹೊಸದೇನಲ್ಲ. ಜವಾಬ್ದಾರಿಯುತ ಸ್ಥಾನದಲ್ಲಿರುವವರು ಈ ರೀತಿ ಹೇಳಿಕೆ ನೀಡೋದು ಸರಿಯಲ್ಲ. ಬೆಳಗಾವಿ ಜಿಲ್ಲೆಯ ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಪಕ್ಷದಲ್ಲಿ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಾಗಿದೆ. ಅಂತಿಮವಾಗಿ ರಾಜ್ಯ ನಾಯಕರು ತೀರ್ಮಾನ ಕೈಗೊಳ್ಳುತ್ತಾರೆ ಎಂದರು.
ಲೋಕಸಭೆಯಿಂದ ನನ್ನ ಸ್ಪರ್ಧೆ ನಿಶ್ಚಿತ :ನಾನು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬೆಳಗಾವಿಯಿಂದ ಸ್ಪರ್ಧೆ ಮಾಡುವುದು ನಿಶ್ಚಿತ. ಈಗಿನಿಂದಲೇ ನನ್ನ ಪುತ್ರ ರಾಹುಲ್ ಹಾಗೂ ಪುತ್ರಿ ಪ್ರಿಯಾಂಕಾ ಸಮಾಜ ಸೇವೆಯಲ್ಲಿ ತೊಡಗಿಕೊಂಡಿದ್ದಾರೆ.
ಯಮಕನಮರಡಿ ಕ್ಷೇತ್ರದಿಂದ ಯಾರು ಸ್ಪರ್ಧೆ ಮಾಡುತ್ತಾರೆ ಎನ್ನುವುದನ್ನ ತೀರ್ಮಾನ ಮಾಡಬೇಕಿದೆ ಎನ್ನುವ ಮೂಲಕ ಮುಂದಿನ ವಿಧಾನಸಭಾ ಚುನಾವಣೆಗೆ ಪುತ್ರನಿಗೆ ಅವಕಾಶ ನೀಡುವ ನಿಟ್ಟಿನಲ್ಲಿ ಸತೀಶ್ ಜಾರಕಿಹೊಳಿ ಈಗಿನಿಂದಲೇ ತಯಾರಿ ನಡೆಸಿದ್ದಾರೆ. ಇದಕ್ಕೆ ಸಾಕ್ಷಿ ಎನ್ನುವಂತೆ ಕರಗುಪ್ಪಿ ಗ್ರಾಮದಲ್ಲಿ ಸತೀಶ್ ಜಾರಕಿಹೊಳಿ ಅವರ ಪುತ್ರ ರಾಹುಲ್ ಜಾರಕಿಹೊಳಿ ಅವರ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಆಚರಣೆ ಮಾಡಲಾಯಿತು.