ಬೆಳಗಾವಿ: ಕರ್ನಾಟಕ ಹಾಲು ಉತ್ಪಾದಕರ ಮಹಾಮಂಡಳದಿಂದ ಶೀಘ್ರವೇ ರಾಜ್ಯಾದ್ಯಂತ ಒಂದು ಸಾವಿರ ಹುದ್ದೆ ಭರ್ತಿ ಮಾಡಿಕೊಳ್ಳಲಾಗುವುದು ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು.
ಬೆಳಗಾವಿಯಲ್ಲಿ ನಡೆದ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಭಾರತದಲ್ಲಿ ಅಮುಲ್ ಹಾಗೂ ಕೆಎಂಎಫ್ ಗಟ್ಟಿಯಾಗಿದ್ದು, ಮುಂಬರುವ ದಿನಗಳಲ್ಲಿ ಇನ್ನಷ್ಟು ಅಭಿವೃದ್ಧಿಯಾಗಲಿವೆ. ಪ್ರತಿದಿನ 89 ಲಕ್ಷ ಲೀಟರ್ ಹಾಲು ಸಂಗ್ರಹವಾಗುತ್ತಿದ್ದು, ರೈತರಿಗೆ ಕೆಎಂಎಫ್ ಮೇಲಿರುವ ವಿಶ್ವಾಸಕ್ಕೆ ಸಾಕ್ಷಿಯಾಗಿದೆ ಎಂದರು.
12 ಲಕ್ಷ ಹಸು-ಎಮ್ಮೆಗಳಿಗೆ ವಿಮೆ ಭದ್ರತೆ :ಕೆಎಂಎಫ್ ವತಿಯಿಂದ ರಾಜ್ಯದ ಎಲ್ಲ 12 ಲಕ್ಷ ಹಸು-ಎಮ್ಮೆಗಳಿಗೆ ವಿಮೆ ಭದ್ರತೆ ಒದಗಿಸಲಾಗುವುದು. ಇದರಿಂದ ಹೈನುಗಾರರಿಗೆ ಅನುಕೂಲವಾಗಲಿದೆ. ಸದ್ಯಕ್ಕೆ 15 ಸಾವಿರ ಕೋಟಿ ವಾರ್ಷಿಕ ವಹಿವಾಟನ್ನು ಮುಂದಿನ ನಾಲ್ಕು ವರ್ಷಗಳಲ್ಲಿ 25 ಸಾವಿರ ಕೋಟಿಗೆ ಹೆಚ್ಚಿಸುವ ಗುರಿ ಹೊಂದಲಾಗಿದೆ.