ಚಿಕ್ಕೋಡಿ:ಪ್ರವಾಹದಿಂದ ಮನೆಗಳನ್ನು ಕಳೆದುಕೊಂಡಿರುವ ಕುಟುಂಬಗಳಿಗೆ ತಾತ್ಕಾಲಿಕ ಪರಿಹಾರ ನೀಡಲಾಗಿದೆ. ಸಂಪೂರ್ಣ ಸಮೀಕ್ಷೆಯಾದ ತಕ್ಷಣವೇ ಮನೆ ನಿರ್ಮಾಣ ಸೇರಿದಂತೆ ಶಾಶ್ವತ ಪರಿಹಾರವನ್ನು ಒದಗಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು.
ಸಮೀಕ್ಷೆ ಬಳಿಕ ನೆರೆ ಸಂತ್ರಸ್ತರಿಗೆ ಶಾಶ್ವತ ಪರಿಹಾರ: ಸಚಿವ ಈಶ್ವರಪ್ಪ
ಪ್ರವಾಹದಿಂದ ಮನೆಗಳನ್ನು ಕಳೆದುಕೊಂಡಿರುವ ಕುಟುಂಬಗಳಿಗೆ ತಾತ್ಕಾಲಿಕ ಪರಿಹಾರ ನೀಡಲಾಗಿದೆ. ಸಂಪೂರ್ಣ ಸಮೀಕ್ಷೆಯಾದ ತಕ್ಷಣವೇ ಮನೆ ನಿರ್ಮಾಣ ಸೇರಿದಂತೆ ಶಾಶ್ವತ ಪರಿಹಾರವನ್ನು ಒದಗಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು.
ಬೆಳಗಾವಿ ಜಿಲ್ಲೆಯ ಪ್ರವಾಹ ಬಾಧಿತ ಸ್ಥಳಗಳಿಗೆ ಭೇಟಿ ನೀಡಿದ ಅವರು, ತಾಲೂಕಿನ ಮಾಂಜರಿ ಸೇತುವೆಯ ಬಳಿ ಕುಡಿಯುವ ನೀರು ಸರಬರಾಜು ಯೋಜನೆ ಹಾಗೂ ನದಿ ಪಾತ್ರದಲ್ಲಿ ಬೆಳೆಹಾನಿಯನ್ನು ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಈಗಾಗಲೇ ಪ್ರವಾಹ ಪೀಡಿತ ಸಂತ್ರಸ್ತರಿಗೆ ತಾತ್ಕಾಲಿಕ ಪರಿಹಾರ ಚೆಕ್ ವಿತರಣೆ ಮಾಡಲಾಗಿದೆ. ಕರ್ನಾಟಕದಲ್ಲಿ ಇಷ್ಟು ಜಲಪ್ರಳಯ ನನ್ನ ಜೀವನದಲ್ಲಿಯೇ ನೋಡಿಲ್ಲ. ನೆರೆ ಸಂತ್ರಸ್ತರಿಗೆ ತಾತ್ಕಾಲಿಕ ಹಾಗೂ ಶಾಶ್ವತ ಪರಿಹಾರ ಕುರಿತು ಆಲೋಚಿಸಲಾಗಿದೆ. ತಾತ್ಕಾಲಿಕವಾಗಿ ಚೆಕ್ ಮೂಲಕ ಪರಿಹಾರ ನೀಡಲಾಗಿದೆ. ಬರುವ ದಿನಗಳಲ್ಲಿ ಬಿದ್ದ ಮನೆಗೆ ಪರಿಹಾರ ಹಾಗೂ ಮನೆ ಕಟ್ಟಿ ಕೊಡಲು ಪರಿಹಾರ ನೀಡಲಾಗುವುದು ಎಂದರು.
ಮಾಂಜರಿ ಗ್ರಾಮದ ಅಂಬೇಡ್ಕರ್ ಕಾಲೋನಿ, ಮತ್ತಿತರ ಪ್ರದೇಶದಲ್ಲಿ ಸಂಚರಿಸಿದ ಸಚಿವ ಕೆ.ಎಸ್.ಈಶ್ವರಪ್ಪ, ಅಲ್ಲಿನ ಜನರ ಅಹವಾಲುಗಳನ್ನು ಆಲಿಸಿದರು. ಮನೆಗಳು ಸಂಪೂರ್ಣವಾಗಿ ಶಿಥಿಲಗೊಂಡಿರುವುದರಿಂದ ಕೂಡಲೇ ಮನೆಗಳನ್ನು ನಿರ್ಮಿಸಿಕೊಡಬೇಕು ಎಂದು ಸ್ಥಳೀಯರು ಒತ್ತಾಯಿಸಿದರು. ಸರ್ಕಾರಕ್ಕೆ ಪರಿಸ್ಥಿತಿಯ ಸಂಪೂರ್ಣ ಅರಿವು ಇದ್ದು, ಸಮೀಕ್ಷೆ ಮುಗಿದ ಬಳಿಕ ಮನೆ ನಿರ್ಮಾಣಕ್ಕೆ ಚಾಲನೆ ನೀಡಲಾಗುವುದು ಎಂದು ಸಚಿವರು ಭರವಸೆ ನೀಡಿದರು.