ಬೆಳಗಾವಿ: ಕೋವಿಡ್-19 ಹಿನ್ನೆಲೆ ಸರ್ಕಾರದ ಮಾರ್ಗಸೂಚಿ ಪ್ರಕಾರ ಗಣೇಶ ಹಬ್ಬ ಆಚರಣೆಗೆ ಅವಕಾಶ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಹೇಳಿದರು.
ಗಣೇಶೋತ್ಸವಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ನಡೆದ ಗಣೇಶೋತ್ಸವ ಮಂಡಳಿಗಳ ಪದಾಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಂಡಳಿಯ ಅಭಿಪ್ರಾಯಗಳನ್ನು ಕ್ರೋಢೀಕರಿಸಿ ಸರ್ಕಾರಕ್ಕೆ ಕಳಿಸಲಾಗುವುದು. ಐಸಿಎಂಆರ್ ಮಾರ್ಗಸೂಚಿ ಬಂದ ಬಳಿಕ ಮತ್ತೊಮ್ಮೆ ಎಲ್ಲಾ ಮಂಡಳಿಗಳ ಸಭೆ ಕರೆದು ಚರ್ಚೆ ನಡೆಸಲಾಗುವುದು ಎಂದು ತಿಳಿಸಿದರು.
ಪೊಲೀಸ್ ಆಯುಕ್ತ ಕೆ. ತ್ಯಾಗರಾಜನ್ ಮಾತನಾಡಿ, ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರುವುದರಿಂದ ಇದನ್ನು ತಡೆಗಟ್ಟುವ ಬಗ್ಗೆ ನಾವು ಎಚ್ಚರಿಕೆ ವಹಿಸಬೇಕಿದೆ. ಸರ್ಕಾರದ ನಿರ್ದೇಶನದ ಮೇರೆಗೆ ಹಬ್ಬ ಆಚರಿಸಲು ಅವಕಾಶ ಕಲ್ಪಿಸಲಾಗುವುದು ಎಂದು ತಿಳಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಮಾತನಾಡಿ, ಹಬ್ಬಗಳ ಸಾಲು ಆರಂಭಗೊಂಡಿದೆ. ಇದರೊಂದಿಗೆ ನಾವು ಕೋವಿಡ್ ನಿಯಂತ್ರಣದ ಕಡೆಯೂ ಗಮನ ಹರಿಸಬೇಕಿದೆ. ಎರಡು-ಮೂರು ದಿನಗಳಲ್ಲಿ ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡಲಿದೆ. ಬೆಳಗಾವಿ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಸುಮಾರು 5 ಸಾವಿರ ಮೂರ್ತಿಗಳ ಪ್ರತಿಷ್ಠಾಪನೆ ನಡೆಯಲಿದೆ. ಹಾಗಾಗಿ ಮಾರ್ಗಸೂಚಿಗೆ ಎಲ್ಲರೂ ಸಹಕರಿಸಬೇಕು ಎಂದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಮಹಾನಗರ ಪಾಲಿಕೆಯ ಆಯುಕ್ತ ಜಗದೀಶ್, ಉಪ ವಿಭಾಗಾಧಿಕಾರಿ ಅಶೋಕ ತೇಲಿ ಇದ್ದರು.