ಬೆಳಗಾವಿ: ಶಿವಮೊಗ್ಗ ಜಿಲ್ಲೆಯ ಸೋಗಾನೆಯಲ್ಲಿ ಇಂದು ಬೆಳಗ್ಗೆ ನೂತನ ನಿಮಾನ ನಿಲ್ದಾಣ ಉದ್ಘಾಟಿಸಿ ಬಳಿಕ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಬಳಿಕ ಅಲ್ಲಿಂದ ಬೆಳಗಾವಿ ಜಿಲ್ಲೆಗೆ ಆಗಮಿಸಿದ್ದಾರೆ. ವಿವಿಧ ಕಾಮಗಾರಿಗಳಿಗೆ ಚಾಲನೆ ಹಾಗೂ ಶಂಕು ಸ್ಥಾಪನೆ ನೆರವೇರಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಕುಂದಾನಗರಿಗೆ ಆಗಮಿಸಿದ್ದಾರೆ.
ಪ್ರಧಾನಿ ಮೋದಿಯವರು ಶಿವಮೊಗ್ಗದಿಂದ ಭಾರತೀಯ ವಾಯುಸೇನೆ ವಿಮಾನದ ಮೂಲಕ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಪ್ರಧಾನಿಯವರನ್ನು ಸಿಎಂ ಬಸವರಾಜ ಬೊಮ್ಮಾಯಿ ಸೇರಿ ಅಧಿಕಾರಿಗಳು ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಬರಮಾಡಿಕೊಂಡರು.
ಏರ್ಪೋರ್ಟ್ ಸುತ್ತಮುತ್ತ ಬಿಗಿ ಭದ್ರತೆ.. ವಿಮಾನ ನಿಲ್ದಾಣ ಸುತ್ತಮುತ್ತ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ. ಎಲ್ಲಾ ವಾಹನಗಳನ್ನು ಭದ್ರತಾ ಪಡೆಗಳು ಪರಿಶೀಲನೆ ನಡೆಸುತ್ತಿದ್ದಾರೆ. ನಗರ ಸಂಚಾರದ ವಿವಿಧ ಮಾರ್ಗಗಳಲ್ಲಿ ಬದಲಾವಣೆ ಮಾಡಲಾಗಿದ್ದು, ಕೆಲವು ರಸ್ತೆಗಳಲ್ಲಿ ವಾಹನ ಸಂಚಾರ ನಿಷೇಧಿಸಲಾಗಿದೆ.
ಕುಂದಾ ನಗರಿಯಲ್ಲಿ ಮೋದಿ ರೋಡ್ ಶೋ.. ನಗರದ ಚೆನ್ನಮ್ಮ ವೃತ್ತದಿಂದ ಪ್ರಧಾನಿ ಮೋದಿ ರೋಡ್ ಶೋ ನಡೆಸುತ್ತಿದ್ದಾರೆ. ಪ್ರಧಾನಿ ಮೋದಿಯನ್ನು ನೋಡಲು ರಸ್ತೆಯ ಇಕ್ಕೆಲಗಳಲ್ಲಿ ಅಪಾರ ಸಂಖ್ಯೆಯಲ್ಲಿ ಜನರು ಸೇರಿದ್ದಾರೆ. ಚೆನ್ನಮ್ಮ ವೃತ್ತದಿಂದ 10 ಕಿಮೀನಷ್ಟು ಮೋದಿ ರೋಡ್ ಶೋ ನಡೆಸುತ್ತಿದ್ದಾರೆ. ಎಡಿಜಿಪಿ ಅಲೋಕ್ ಕುಮಾರ್ ನೇತೃತ್ವದಲ್ಲಿ ನಗರದಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.
ಪ್ರಧಾನಿಗೆ ಸ್ವಾಗತ ಕೋರಿದ ಕಾಯಕ ಯೋಗಿ ಜನರು : ಪ್ರಧಾನಿ ನರೇಂದ್ರ ಮೋದಿಯವರು ನಗರದ ಕೆಎಸ್ಆರ್ಪಿ ಮೈದಾನಕ್ಕೆ ಆಗಮಿಸುತ್ತಿದ್ದಂತೆ ಪೌರಕಾರ್ಮಿಕರು, ಕೃಷಿಕರು, ಆಟೋ ಚಾಲಕರು, ಕಾರ್ಮಿಕ ಕಾಯಕಯೋಗಿಗಳು ಪ್ರಧಾನಿ ಅವರಿಗೆ ಗುಲಾಬಿ ಹೂವು ನೀಡುವ ಮೂಲಕ ಸ್ವಾಗತ ಕೋರಿದರು.