ಬೆಳಗಾವಿ : ಸಂಭವನೀಯ ಕೋವಿಡ್ 3ನೇ ಅಲೆಯ ಸಂದರ್ಭದಲ್ಲಿ ಮಕ್ಕಳಿಗೆ ಯಾವುದೇ ತೊಂದರೆಯಾಗದಂತೆ ಹಾಗೂ ತುರ್ತು ಚಿಕಿತ್ಸೆಗೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವೆ ಶಶಿಕಲಾ ಜೊಲ್ಲೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಕೋವಿಡ್ ಸಂಭಾವ್ಯ 3ನೇ ಅಲೆಯಿಂದ ಮಕ್ಕಳ ರಕ್ಷಣೆ ಹಾಗೂ ಆರೈಕೆಗೆ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಜನಪ್ರತಿನಿಧಿಗಳ ಹಾಗೂ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಸ್ಪತ್ರೆ ಸೇರಿದಂತೆ ಎಲ್ಲಾ ತಾಲೂಕು ಆಸ್ಪತ್ರೆಗಳಲ್ಲಿ ಔಷಧಿ, ವೈದ್ಯಕೀಯ ಸಾಮಗ್ರಿಗಳು ಸೇರಿ ತುರ್ತು ಪರಿಸ್ಥಿತಿ ನಿರ್ವಹಣೆಗೆ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.