ಬೆಳಗಾವಿ: ಭಾಷಾ ನೀತಿ ಮರು ಪರಿಶೀಲಿಸುವಂತೆ ಆಗ್ರಹಿಸಿ ಕೇಂದ್ರ ಸರ್ಕಾರದ ವಿರುದ್ಧ ಕರವೇ ಕಾರ್ಯಕರ್ತರು ಬೆಳಗಾವಿ ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಕೇಂದ್ರದ ವಿರುದ್ಧ ಬೆಳಗಾವಿಯಲ್ಲಿ ಕರವೇ ಪ್ರತಿಭಟನೆ ನಗರದ ಬೆಳಗಾವಿಯ ಚೆನ್ನಮ್ಮನ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಕರವೇ ಕಾರ್ಯಕರ್ತರು, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಅಲ್ಲದೇ ಹಿಂದಿ ದಿವಸ್‌ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.
ಕೇಂದ್ರ ಸರ್ಕಾರ ಸಂವಿಧಾನಕ್ಕೆ ತಿದ್ದುಪಡಿ ತಂದು 8ನೇ ಪರಿಚ್ಛೇದದಲ್ಲಿರುವ ಎಲ್ಲ 22 ಭಾಷೆಗಳನ್ನೂ ಆಡಳಿತ ಭಾಷೆಗಳನ್ನಾಗಿ ಮಾಡಬೇಕು. ಹಿಂದಿ ಮತ್ತು ಇಂಗ್ಲಿಷ್ ಭಾಷೆಗಳಿಗೆ ಈ ಅವಕಾಶ ಈಗಾಗಲೇ ಇದ್ದು, ಅದನ್ನು ಎಲ್ಲಾ ಭಾಷೆಗಳಿಗೆ ವಿಸ್ತರಿಸಬೇಕು. ಶಿಕ್ಷಣ, ಉದ್ಯೋಗ ಸೇರಿ ಎಲ್ಲಾ ಕ್ಷೇತ್ರಗಳಲ್ಲಿ ಎಲ್ಲಾ ಭಾಷೆಗಳಿಗೂ ಸಮಾನ ಅವಕಾಶ, ಹಕ್ಕುಗಳಿರಬೇಕು.
ಹಿಂದಿ ದಿವಸ, ಹಿಂದಿ ಸಪ್ತಾಹ, ಹಿಂದಿ ಪಕ್ವಾಡಾದಂಥ ಕಾರ್ಯಕ್ರಮಗಳನ್ನು ಕೂಡಲೇ ನಿಲ್ಲಿಸಬೇಕು. ಪ್ರತಿವರ್ಷ ಸೆಪ್ಟೆಂಬರ್ 14ರ ಹಿಂದಿ ದಿನಾಚರಣೆ ಕೊನೆಯಾಗಬೇಕು. ಯಾವ ಭಾಷೆಗೂ ಹೆಚ್ಚಿನ ಮಾನ್ಯತೆ ನೀಡಬಾರದು, ಯಾವ ಭಾಷೆಯನ್ನೂ ನಿರ್ಲಕ್ಷಿಸಕೂಡದು ಎಂದು ಜಿಲ್ಲಾಧಿಕಾರಿ ಮೂಲಕ ಪ್ರಧಾನಿಗೆ ಮನವಿ ಸಲ್ಲಿಸಿದರು.