ಬೆಳಗಾವಿ: ಡಿಕೆಶಿ ವಿರುದ್ಧದ ಸಿಬಿಐ ತನಿಖೆ ಹಿಂಪಡೆದ ಸರ್ಕಾರದ ಕ್ರಮವನ್ನು ಪ್ರತಿಪಕ್ಷದ ನಾಯಕ ಆರ್.ಅಶೋಕ್ ವಿಧಾನಸಭೆಯಲ್ಲಿ ಇಂದು ತರಾಟೆಗೆ ತೆಗೆದುಕೊಂಡರು. ಸರ್ಕಾರದ ಕ್ರಮವನ್ನು ವಿರೋಧಿಸಿ ನಿಲುವಳಿ ಸೂಚನೆ ಮಂಡನೆಗೆ ಅವರು ಪ್ರಯತ್ನಿಸಿದರು. ಕೋರ್ಟ್‌ನಲ್ಲಿ ಪ್ರಕರಣದ ವಿಚಾರಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಸ್ಪೀಕರ್ ಯು.ಟಿ.ಖಾದರ್ ಅವಕಾಶ ನಿರಾಕರಿಸಿದರು.
ಇದಕ್ಕೂ ಮೊದಲು ವಿಷಯ ಪ್ರಸ್ತಾಪಿಸಿದ ಆರ್.ಅಶೋಕ್, ರಾಜ್ಯ ಸಚಿವ ಸಂಪುಟದಲ್ಲಿ ಕೈಗೊಂಡ ಈ ನಿರ್ಧಾರ ಸಂವಿಧಾನಬಾಹಿರ. ರಾಜಕೀಯ ದುರುದ್ದೇಶಗಳಿಂದ ಕೂಡಿದೆ ಎಂದು ಹರಿಹಾಯ್ದರು. ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರವು ಡಿ.ಕೆ.ಶಿವಕುಮಾರ್ ಆದಾಯ ಮೀರಿದ ಆಸ್ತಿ ಗಳಿಸಿದ್ದಾರೆ ಎಂಬ ಆರೋಪಗಳ ಮೇರೆಗೆ 2019ರ ಸೆಪ್ಟೆಂಬರ್ 25ರಂದು ಸಿಬಿಐ ತನಿಖೆಗೆ ಒಪ್ಪಿಸಿತ್ತು. ಒಮ್ಮೆ ತನಿಖೆಗೆ ನೀಡಿದ್ದ ಪ್ರಕರಣವನ್ನು ಹಿಂದೆ ಪಡೆಯಲು ಬರುವುದಿಲ್ಲ ಎಂದು ಅವರು ಪ್ರತಿಪಾದಿಸಿದರು.