ಬೆಳಗಾವಿ:ಇತ್ತೀಚೆಗೆ ಸುರಿದ ಮಳೆಯಿಂದಾಗಿ ಜಿಲ್ಲೆಯಲ್ಲಿ ಬೆಳೆ, ಮನೆಗಳು ಹಾಗೂ ಮೂಲಸೌಕರ್ಯಗಳು ಸೇರಿದಂತೆ ಒಟ್ಟು 972 ಕೋಟಿ ರೂಪಾಯಿ ಹಾನಿಯಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದು ಪರಿಹಾರ ವಿತರಣೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದರು.
ಅತಿವೃಷ್ಟಿಯಿಂದ ಬೆಳಗಾವಿ ಜಿಲ್ಲೆಯಲ್ಲಿ 972 ಕೋಟಿ ಹಾನಿ: ಸಚಿವ ಜಾರಕಿಹೊಳಿ - Hidakal dam
ಹಿಡಕಲ್ ಜಲಾಶಯಕ್ಕೆ ಮುಖ್ಯಮಂತ್ರಿಗಳ ಭೇಟಿ ಹಿನ್ನೆಲೆ ಹಿರಿಯ ಅಧಿಕಾರಿಗಳ ಜೊತೆ ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಸಭೆ ನಡೆಸಿದರು.
ಮುಖ್ಯಮಂತ್ರಿಗಳ ಭೇಟಿ ಹಿನ್ನೆಲೆಯಲ್ಲಿ ಹಿಡಕಲ್ ಜಲಾಶಯದ ಬಳಿಯ ಸಭಾ ಭವನದಲ್ಲಿ ಸೋಮವಾರ ನಡೆದ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಪ್ರವಾಹ ಪರಿಸ್ಥಿತಿ ನಿಯಂತ್ರಣಕ್ಕೆ ಎಲ್ಲ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಆದಾಗ್ಯೂ ಕೆಲವು ಕಡೆಗಳಲ್ಲಿ ಹೆಚ್ಚಿನ ಮಳೆಯಿಂದ ಉಂಟಾಗಿರುವ ಬೆಳೆಹಾನಿಯ ಜಂಟಿ ಸಮೀಕ್ಷೆ ನಡೆಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನೀರು ಬಿಡುಗಡೆ ಬಗ್ಗೆ ಇದೇ ರೀತಿ ನಿರಂತರ ಮಾಹಿತಿಯನ್ನು ವಿನಿಮಯ ಮಾಡಿಕೊಳ್ಳಬೇಕು. ದಿಢೀರ್ ನೀರು ಬಿಡುಗಡೆಯಿಂದ ನದಿ ತೀರದ ಗ್ರಾಮಗಳಿಗೆ ತೊಂದರೆಯಾಗುತ್ತದೆ. ಈ ಬಾರಿ ಸಮನ್ವಯ ಸಮರ್ಪಕವಾಗಿರುವುದರಿಂದ ಪ್ರವಾಹ ಪರಿಸ್ಥಿತಿ ಉದ್ಭವಿಸದಂತೆ ತಡೆಗಟ್ಟುವುದು ಸಾಧ್ಯವಾಗಿದೆ ಎಂದರು.