ಬೆಳಗಾವಿ: ಉತ್ತರ ಕರ್ನಾಟಕದ ಬಹುದಿನದ ಬೇಡಿಕೆಯಾದ ಮಹದಾಯಿ ಯೋಜನೆಯ ನದಿ ನೀರು ಹಂಚಿಕೆ ವಿಚಾರದಲ್ಲಿ ಗೆಜೆಟ್ ಅಧಿಸೂಚನೆ ಹೊರಡಿಸಲು ಸುಪ್ರೀಂ ಕೋರ್ಟ್ ಸಮ್ಮತಿಸಿರುವುದನ್ನು ಸ್ವಾಗತಿಸುತ್ತೇನೆ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಕರ್ನಾಟಕ ಸರ್ಕಾರವು ಮಹದಾಯಿ ಯೋಜನೆ ಬಗ್ಗೆ ಗೆಜೆಟ್ ಅಧಿಸೂಚನೆ ಹೊರಡಿಸಲೇಬೇಕೆಂದು ಈ ಹಿಂದೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿತ್ತು ಎಂದು ತಿಳಿಸಿದ್ದಾರೆ. ಈ ಗೆಜೆಟ್ ಅಧಿಸೂಚನೆ ಹೊರಡಿಸಿದ ನಂತರ 2.18 ಟಿ.ಎಂ.ಸಿ. ಬಂಡೂರ ತಿರುವು ನಾಲೆ ಮತ್ತು 1.72 ಟಿ.ಎಂ.ಸಿ. ಕಳಸಾ ತಿರುವು ನಾಲೆಯಿಂದ (ಒಟ್ಟು 3.90 ಟಿ.ಎಂ.ಸಿ.) ನೀರನ್ನು ಮಲಪ್ರಭಾ ನದಿಗೆ ಹರಿಸಲು ಸಕ್ಷಮ ಪ್ರಾಧಿಕಾರದ ಅನುಮೋದನೆಯನ್ನು ಪಡೆದು ಕಾಮಗಾರಿಗಳನ್ನು ಕೈಗೊಳ್ಳುತ್ತೇವೆ. ಈ ಕುಡಿಯುವ ನೀರಿನ ಯೋಜನೆಯ ಅನುಷ್ಠಾನಕ್ಕೆ ಈಗಾಗಲೇ ಪರಿಸರ ಇಲಾಖೆಯಿಂದ ವಿನಾಯ್ತಿ ಪಡೆದಿದ್ದು ಕೇಂದ್ರ ಜಲ ಆಯೋಗ ಮತ್ತು ಅರಣ್ಯ ಇಲಾಖೆಯ ಅನುಮೋದನೆ ಪಡೆಯಬೇಕಾಗಿದೆ ಎಂದಿದ್ದಾರೆ.