ಕರ್ನಾಟಕ

karnataka

ETV Bharat / state

ನದಿ ಪಾತ್ರದ ಜನರು ಸುರಕ್ಷಿತ ಸ್ಥಳಕ್ಕೆ ತೆರಳಿ: ಸಚಿವ ರಮೇಶ್​ ಜಾರಕಿಹೊಳಿ ಮನವಿ

ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದು, ನದಿ ತೀರದಲ್ಲಿನ ರೈತರು ಹಾಗೂ ಗ್ರಾಮಸ್ಥರು, ಜಾನುವಾರುಗಳ ಸಮೇತ ಸುರಕ್ಷಿತ ಸ್ಥಳಕ್ಕೆ ತೆರಳಬೇಕು ಎಂದು ಸಚಿವ ರಮೇಶ್ ಜಾರಕಿಹೊಳಿ ಮನವಿ ಮಾಡಿದ್ದಾರೆ.

Ramesh jarkiholi
ರಮೇಶ್​ ಜಾರಕಿಹೊಳಿ

By

Published : Aug 17, 2020, 7:29 AM IST

ಬೆಳಗಾವಿ:ಮಹಾರಾಷ್ಟ್ರದ ಪಶ್ಚಿಮಘಟ್ಟ ಪ್ರದೇಶ ಹಾಗೂ ಬೆಳಗಾವಿ ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ‌ ಧಾರಾಕಾರವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ನದಿ ತೀರದಲ್ಲಿನ ರೈತರು ಹಾಗೂ ಗ್ರಾಮಸ್ಥರು, ಜಾನುವಾರುಗಳ ಸಮೇತ ಸುರಕ್ಷಿತ ಸ್ಥಳಕ್ಕೆ ತೆರಳಬೇಕು ಎಂದು ಸಚಿವ ರಮೇಶ್ ಜಾರಕಿಹೊಳಿ ಮನವಿ ಮಾಡಿಕೊಂಡಿದ್ದಾರೆ.

ಈ ಕುರಿತು ಪ್ರಕಟಣೆ ಹೊರಡಿಸಿರುವ ಸಚಿವ ರಮೇಶ್ ಜಾರಕಿಹೊಳಿ, ಕಳೆದ ಮೂರು ದಿನಗಳಿಂದ ಭಾರಿ ಮಳೆಯಾಗುತ್ತಿದೆ. ಇದರಿಂದಾಗಿ ಮಹಾರಾಷ್ಟ್ರದ ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ 2 ಲಕ್ಷ ಕ್ಯೂಸೆಕ್​ಗೂ ಹೆಚ್ಚಿನ ನೀರು ಹರಿದು ಬರುತ್ತಿದೆ. ಅಷ್ಟೇ ಅಲ್ಲದೆ ಜಿಲ್ಲೆಯ ಘಟಪ್ರಭಾದ ಹಿಡಕಲ್ ಜಲಾಶಯ ಮತ್ತು ಮಲಪ್ರಭಾದ ನವಿಲು ತೀರ್ಥ ಜಲಾಶಯ ತುಂಬಿದ ಪರಿಣಾಮ ಹೆಚ್ಚಿನ ನೀರನ್ನು ಹೊರ ಬಿಡಲಾಗುತ್ತಿದೆ. ಸದ್ಯ ಜಲಾಶಯಗಳ ಒಳ ಹರಿವು ಗಣನೀಯವಾಗಿ ಹೆಚ್ಚುತ್ತಿರುವುದರಿಂದ ಇನ್ನೂ ಹೆಚ್ಚಿನ ಪ್ರಮಾಣದ ನೀರನ್ನು ಹೊರಬಿಡುವ ಸಾಧ್ಯತೆ ಇದೆ. ನದಿ ಪಾತ್ರದಲ್ಲಿ ಮತ್ತೆ ಪ್ರವಾಹದ ಪರಿಸ್ಥಿತಿ ಎದುರಾಗುವ ಸಾಧ್ಯತೆ ಇದೆ. ‌ಹಾಗಾಗಿ ನದಿ ತೀರದಲ್ಲಿನ ರೈತರು ಹಾಗೂ ಗ್ರಾಮಸ್ಥರು, ಜಾನುವಾರುಗಳ ಸಮೇತ ಸುರಕ್ಷಿತ ಸ್ಥಳಕ್ಕೆ ತೆರಳಬೇಕು ಎಂದಿದ್ದಾರೆ.

ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ಎದುರಿಸಲು ಜಿಲ್ಲಾಡಳಿತದ ಜೊತೆ ನಿರಂತರ ಸಂಪರ್ಕದಲ್ಲಿದ್ದೇನೆ. ನೀರಾವರಿ ಇಲಾಖೆ ಅಧಿಕಾರಿಗಳಿಗೆ ದಿನದ 24 ಗಂಟೆಗಳ ಕಾಲ ಕೆಲಸ ಮಾಡಲು ಸೂಚನೆ ನೀಡಲಾಗಿದೆ. ಇದಲ್ಲದೇ ಮಹಾರಾಷ್ಟ್ರದ ಅಧಿಕಾರಿಗಳ ಜೊತೆಗೂ ನಿರಂತರ ಸಂಪರ್ಕದಲ್ಲಿದ್ದು, ಸಂಭಾವ್ಯ ಪ್ರವಾಹ ಎದುರಿಸಲು ಕಳೆದ ಎರಡು ತಿಂಗಳಿಂದ ಜಿಲ್ಲೆಯಲ್ಲಿ ತಯಾರಿ ಮಾಡಿಕೊಂಡಿದ್ದೇವೆ ಎಂದು ತಿಳಿಸಿದ್ದಾರೆ.

ಜನ - ಜಾನುವಾರುಗಳಿಗೆ ಯಾವುದೇ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ. ಪ್ರವಾಹ ಎದುರಿಸಲು ಸನ್ನದ್ಧವಾಗಿರಲು ಸೂಚಿಸಲಾಗಿದೆ. ಜನರು ಜಿಲ್ಲಾಡಳಿತದ ಆದೇಶಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಉಸ್ತುವಾರಿ ಸಚಿವರು ಮನವಿ ಮಾಡಿದ್ದಾರೆ.

ABOUT THE AUTHOR

...view details