ಬೆಳಗಾವಿ:ಜಿಲ್ಲೆಯಲ್ಲಿನ ನದಿಗಳ ಒತ್ತುವರಿ ಅಪಾರ ಪ್ರಮಾಣದಲ್ಲಿ ಆಗಿರುವ ಕಾರಣ ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗುತ್ತಿದೆ. ಹೀಗಾಗಿ ನದಿ ಒತ್ತುವರಿಯ ಸರ್ವೇ ಮಾಡಲು ಪ್ರಾದೇಶಿಕ ಆಯುಕ್ತರ ನೇತೃತ್ವದಲ್ಲಿ ಶೀಘ್ರವೇ ಸಮಿತಿ ರಚನೆ ಮಾಡಲಾಗುವುದು ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದರು.
ಸಿಎಂ ಜೊತೆಗಿನ ವೈಮಾನಿಕ ಸಮೀಕ್ಷೆ ಬಳಿಕ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಲಪ್ರಭಾ, ಘಟಪ್ರಭಾ, ಕೃಷ್ಣಾ ನದಿಗಳು ಹೆಚ್ಚಿನ ಪ್ರಮಾಣದಲ್ಲಿ ಒತ್ತುವರಿಯಾಗಿದೆ. ಈ ಬಗ್ಗೆ ಆಲಮಟ್ಟಿಯಲ್ಲಿ ನಡೆದ ಸಭೆಯಲ್ಲಿ ವಿಷಯ ಚರ್ಚೆಗೆ ಬಂದಿದೆ. ಹೀಗಾಗಿ ಈ ಬಗ್ಗೆ ಸರ್ವೇ ಮಾಡಿಸಲು ಸಿಎಂ ಸೂಚನೆ ನೀಡಿದ್ದಾರೆ. ಹೀಗಾಗಿ ಪ್ರಾದೇಶಿಕ ಆಯುಕ್ತರ ನೇತೃತ್ವದಲ್ಲಿ ಸಮಿತಿ ರಚಿಸಿ ಸರ್ವೇ ಮಾಡಲಾಗುವುದು. ಆರಂಭದಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಮಾತ್ರ ನಡೆಯಲಿದೆ. ಬರುವ ದಿನಗಳಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳ ನದಿಗಳ ಒತ್ತುವರಿ ಸರ್ವೇ ನಡೆಯಲಿದೆ ಎಂದರು.