ಬೆಳಗಾವಿ: ರಾಜ್ಯ ರಾಜಕಾರಣದಲ್ಲಿ ಮಹತ್ವದ ಪಾತ್ರ ವಹಿಸುವ ಬೆಳಗಾವಿ ಜಿಲ್ಲೆಯಲ್ಲಿ ಬಿಜೆಪಿ ಹೈಕಮಾಂಡ್ ಟಿಕೆಟ್ ಘೋಷಣೆ ಮಾಡುತ್ತಿದ್ದಂತೆಯೇ ಈಗ ಬಹುತೇಕ ಕಡೆಗಳಲ್ಲಿ ಬಂಡಾಯದ ಭೀತಿ ಎದುರಾಗಿದೆ. ಕ್ರಾಂತಿಯ ನೆಲ ಬೈಲಹೊಂಗಲದಲ್ಲಿ ಕಳೆದ ಬಾರಿ ಬಿಜೆಪಿ ಅಭ್ಯರ್ಥಿಯಾಗಿದ್ದ ಡಾ. ವಿಶ್ವನಾಥ ಪಾಟೀಲರ ವಿರುದ್ಧ ಬಂಡಾಯವೆದ್ದ ಜಗದೀಶ್ ಮೆಟಗುಡ್ಡಗೆ ಈ ಬಾರಿ ಬಿಜೆಪಿ ಮಣೆ ಹಾಕಿದೆ. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬಣದಲ್ಲಿ ಗುರುತಿಸಿಕೊಂಡಿರುವ ಪಾಟೀಲ ಈ ಬಾರಿ ಬಂಡಾಯದ ಬಾವುಟ ಹಾರಿಸುವ ಎಲ್ಲ ಲಕ್ಷಣಗಳು ಗೋಚರಿಸುತ್ತಿವೆ.
ರಾಜ್ಯದಲ್ಲಿ ತೀವ್ರ ಚರ್ಚೆ ಹುಟ್ಟು ಹಾಕಿದ್ದ ಅಥಣಿ ಮತಕ್ಷೇತ್ರದಲ್ಲಿ ಮಾಜಿ ಸಚಿವ ರಮೇಶ ಜಾರಕಿಹೊಳಿ ಆಪ್ತ ಮಹೇಶ ಕುಮಟಳ್ಳಿಗೆ ಬಿಜೆಪಿ ಟಿಕೆಟ್ ಸಿಕ್ಕಿದ್ದು, ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಬಂಡಾಯವೆದ್ದಿದ್ದಾರೆ. ಈಗಾಗಲೇ ಬಿಜೆಪಿಗೆ ರಾಜೀನಾಮೆ ಸಲ್ಲಿಸಲು ಮುಂದಾಗಿರುವ ಸವದಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿದರೂ ಅಚ್ಚರಿಯಿಲ್ಲ.
ಬೆಳಗಾವಿ ಉತ್ತರ ಮತಕ್ಷೇತ್ರದಲ್ಲಿ ಡಾ.ರವಿ ಪಾಟೀಲ ಅವರಿಗೆ ಬಿಜೆಪಿ ಟಿಕೆಟ್ ಘೋಷಣೆ ಮಾಡಿದೆ. ಹಾಲಿ ಶಾಸಕ ಅನಿಲ್ ಬೆನಕೆಗೆ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಅವರ ಬೆಂಬಲಿಗರು ಟಿಕೆಟ್ ಘೋಷಣೆಯಾದ ಬಳಿಕ ಬೆಳಗಾವಿ ಲೋಕಸಭಾ ಸಂಸದೆ ಮಂಗಳಾ ಅಂಗಡಿ ಮನೆಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರಲ್ಲದೆ, ಚನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.
ಬೆಳಗಾವಿ ದಕ್ಷಿಣ ಮತಕ್ಷೇತ್ರದಲ್ಲಿ ಹಾಲಿ ಶಾಸಕ ಅಭಯ ಪಾಟೀಲಗೆ ಟಿಕೆಟ್ ಸಿಗುತ್ತಿದ್ದಂತೆ ಅವರ ಬೆಂಬಲಿಗರು ಸಿಹಿ ಹಂಚಿ ಸಂಭ್ರಮಿಸಿದ್ದಾರೆ. ಈ ಕ್ಷೇತ್ರದಲ್ಲಿ ಮರಾಠಾ ಸಮುದಾಯದ ಮತಗಳು ನಿರ್ಣಾಯಕವಾಗಿರುವುದರಿಂದ ದಕ್ಷಿಣ ಮತಕ್ಷೇತ್ರದಲ್ಲಿ ಮರಾಠ ಸಮುದಾಯದವರಿಗೆ ಟಿಕೆಟ್ ನೀಡಬೇಕೆಂದು ರಮೇಶ ಜಾರಕಿಹೊಳಿ ಮೂಲಕ ಹೈಕಮಾಂಡ್‌ವರೆಗೂ ಲಾಬಿ ನಡೆಸಿದ್ದ ರಾಜ್ಯ ಬಿಜೆಪಿ ಓಬಿಸಿ ಮೋರ್ಚಾ ಕಾರ್ಯದರ್ಶಿ ಕಿರಣ್ ಜಾಧವ್ ಈಗ ಮುನಿಸಿಕೊಂಡಿದ್ದಾರೆ.
ಬೆಳಗಾವಿ ಗ್ರಾಮೀಣ ಮತಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ರಮೇಶ ಜಾರಕಿಹೊಳಿ ಆಪ್ತ ನಾಗೇಶ ಮನ್ನೋಳ್ಕರ್ಗೆ ಟಿಕೆಟ್ ಘೋಷಣೆಯಾಗಿದೆ. ಆದರೆ ಇಲ್ಲಿನ ಆಕಾಂಕ್ಷಿಯಾಗಿದ್ದ ಮಾಜಿ ಶಾಸಕ ಸಂಜಯ ಪಾಟೀಲ ಪಕ್ಷದ ವಿರುದ್ಧ ಹೋಗುವ ಮಾತೇ ಇಲ್ಲ. ಪಕ್ಷ ತೆಗೆದುಕೊಂಡ ನಿರ್ಧಾರಕ್ಕೆ ನಾನು ಬದ್ಧನಾಗಿದ್ದೇನೆ ಎಂದು ತಿಳಿಸಿದ್ದಾರೆ.