ಬೆಳಗಾವಿ:ಕೋವಿಡ್-19 ಹಿನ್ನೆಲೆ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜ.26ರಂದು ಸರಳ ಮತ್ತು ಅರ್ಥಪೂರ್ಣವಾಗಿ ಸರ್ಕಾರದ ಮಾರ್ಗಸೂಚಿ ಪ್ರಕಾರ ಗಣರಾಜ್ಯೋತ್ಸವವನ್ನು ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ತಿಳಿಸಿದರು.
ಸರ್ಕಾರಿ ಕಚೇರಿಗಳಿಗೂ ಕೂಡ ದೀಪಾಲಂಕಾರ ಮಾಡಬೇಕು. ಅದೇ ರೀತಿ ಸಾರ್ವಜನಿಕರು ಕೂಡ ತಮ್ಮ ಮನೆ, ಅಂಗಡಿ-ಮುಂಗಟ್ಟುಗಳನ್ನು ಕೂಡ ಅಲಂಕಾರ ಮಾಡಬೇಕು. ಗಣರಾಜ್ಯೋತ್ಸವ ಸಂದರ್ಭದಲ್ಲಿ ಸಿಹಿ ಹಂಚಲು ಆಸಕ್ತರಾಗಿರುವ ಸಂಘ-ಸಂಸ್ಥೆಗಳು ಜಿಲ್ಲಾಡಳಿತದಿಂದ ಪೂರ್ವಾನುಮತಿ ಪಡೆದುಕೊಂಡು ಸಿಹಿ ವಿತರಿಸಬಹುದು ಎಂದರು.
ಧ್ವಜಸಂಹಿತೆ ಪಾಲನೆಗೆ ಸೂಚನೆ:
ಜಿಲ್ಲೆಯ ಎಲ್ಲ ಕಡೆಗಳಲ್ಲೂ ಧ್ವಜಸಂಹಿತೆಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ರಾಷ್ಟ್ರಧ್ವಜಕ್ಕೆ ಯಾವುದೇ ಕಾರಣಕ್ಕೂ ಅವಮಾನ ಆಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಸರ್ಕಾರಿ ಕಚೇರಿಗಳಲ್ಲಿ ಧ್ವಜ ಕಟ್ಟುವುದಕ್ಕೆ ಸಂಬಂಧಿಸಿದಂತೆ ಭಾರತ ಸೇವಾದಳ ವತಿಯಿಂದ ತರಬೇತಿ ನೀಡಲಾಗುವುದು. ಆದ್ದರಿಂದ ತರಬೇತಿ ಅಗತ್ಯವಿರುವವರು ಭಾರತ ಸೇವಾದಳವನ್ನು ಸಂಪರ್ಕಿಸಿ ತರಬೇತಿ ಪಡೆದುಕೊಳ್ಳಬೇಕು. 7.15 ರಿಂದ 8.15 ರೊಳಗೆ ಸರ್ಕಾರಿ ಕಚೇರಿಗಳು, ಶಾಲಾ-ಕಾಲೇಜುಗಳಲ್ಲಿ ಧ್ವಜಾರೋಹಣ ನೆರವೇರಿಸಿ ಜಿಲ್ಲಾ ಕ್ರೀಡಾಂಗಣಕ್ಕೆ ಆಗಮಿಸಬೇಕು ಎಂದರು.
ಕೊರೊನಾ ಹಿನ್ನೆಲೆ ಸ್ಯಾನಿಟೈಸರ್, ಥರ್ಮಲ್ ಸ್ಕ್ಯಾನರ್ ಒಳಗೊಂಡ ಆರೋಗ್ಯ ಇಲಾಖೆಯ ತಂಡಗಳನ್ನು ನಿಯೋಜಿಸಬೇಕು. ಸಾರ್ವಜನಿಕರು ಕೂಡ ಮಾಸ್ಕ್ ಧರಿಸಿಕೊಂಡು ಸಾಮಾಜಿಕ ಅಂತರ ಕಾಯ್ದುಕೊಂಡು ಗಣರಾಜ್ಯೋತ್ಸವ ಸಮಾರಂಭದಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿಕೊಂಡರು.
ಚಿಕ್ಕೋಡಿ ಉಪ ವಿಭಾಗಾಧಿಕಾರಿ ಯುಕೇಶ್ ಕುಮಾರ್, ಮಹಾನಗರ ಪಾಲಿಕೆಯ ಆಯುಕ್ತರಾದ ಜಗದೀಶ್ ಕೆ.ಎಚ್. ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಇದನ್ನೂ ಓದಿ:ಸಂಪುಟದಲ್ಲಿ ಸಿ.ಪಿ. ಯೋಗೀಶ್ವರ್ಗೆ ಅವಕಾಶ.. ಇಂದು ರಾತ್ರಿ ಅತೃಪ್ತರ ಸಭೆ?