ಬೆಳಗಾವಿ: ಜಿಲ್ಲೆಯಲ್ಲಿ ಕೋವಿಡ್-19 ನಿಯಂತ್ರಣಕ್ಕೆ ಬಂದಿದ್ದರಿಂದ ಸವದತ್ತಿಯ ರೇಣುಕಾ ಯಲ್ಲಮ್ಮ ದೇವಿ ದರ್ಶನಕ್ಕೆ ಇಂದಿನಿಂದ ಅವಕಾಶ ಕಲ್ಪಿಸಲಾಗಿದೆ. ಮೊದಲ ದಿನವೇ ಸಾವಿರಾರು ಭಕ್ತರು ದೇವಿ ದರ್ಶನ ಪಡೆದು ಭಾವಪರವಶರಾದರು.
ದೇವಿ ದರ್ಶನಕ್ಕಾಗಿ ಸೋಮವಾರ ರಾತ್ರಿಯೇ ಭಕ್ತರು ಯಲ್ಲಮ್ಮನಗುಡ್ಡಕ್ಕೆ ಬಂದು ತಂಗಿದ್ದರು. ಇಂದು ಬೆಳಗ್ಗೆ ದೇವಿ ದರ್ಶನ ಪಡೆದು ಪುನೀತರಾದರು. ಇನ್ನು ದೇವಿ ದರ್ಶನ ಆರಂಭ ಹಿನ್ನೆಲೆಯಲ್ಲಿ ಇಡೀ ದೇವಸ್ಥಾನವನ್ನು ಸಿಂಗರಿಸಲಾಗಿತ್ತು.
ಇನ್ನು ಇಂದು ಬೆಳಗ್ಗೆ ಯಲ್ಲಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ನಂತರ, ದೇವಿ ದರ್ಶನಕ್ಕೆ ಭಕ್ತರಿಗೆ ಅವಕಾಶ ನೀಡಲಾಯಿತು. ಕೋವಿಡ್-19 ಮಾರ್ಗಸೂಚಿ ಅನ್ವಯ ಭಕ್ತರು ದೈಹಿಕ ಅಂತರ ಕಾಯ್ದುಕೊಂಡು ಸರತಿ ಸಾಲಿನಲ್ಲಿ ಯಲ್ಲಮ್ಮ ದೇವಿ ದರ್ಶನ ಪಡೆದರು. ದೇವಸ್ಥಾನ ಪ್ರಾಂಗಣದಲ್ಲಿ ಸ್ಯಾನಿಟೈಸರ್ ವ್ಯವಸ್ಥೆ ಮಾಡಲಾಗಿತ್ತು. ಥರ್ಮಲ್ ಸ್ಕ್ರೀನಿಂಗ್ಗೆ ಒಳಪಡಿಸಿದ ನಂತರ, ಭಕ್ತರಿಗೆ ದೇವಸ್ಥಾನ ಪ್ರವೇಶಕ್ಕೆ ಅನುಮತಿ ನೀಡಲಾಯಿತು.
ವಿಧಾನಸಭಾ ಉಪಸಭಾಧ್ಯಕ್ಷ ಆನಂದ ಮಾಮನಿ, ಬೆಳಗಾವಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ, ದೇವಸ್ಥಾನ ಕಾರ್ಯನಿರ್ವಾಹಕ ಅಧಿಕಾರಿ ರವಿ ಕೋಟಾರಗಸ್ತಿ ಇತರರು ಹಾಜರಿದ್ದರು. ಕಳೆದ ಒಂದೂವರೆ ವರ್ಷದಲ್ಲಿ 20 ದಿನಗಳಷ್ಟೇ ದೇವಿ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಗುಡ್ಡಕ್ಕೆ ಸಂಪರ್ಕಿಸುವ ಮಾರ್ಗಗಳಲ್ಲಿ ಪೊಲೀಸ್ ಇಲಾಖೆ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.