ಬೆಳಗಾವಿ:ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡು ಬಂದ ತಕ್ಷಣ ಟ್ಯಾಂಕರ್ ಮೂಲಕ ನೀರು ಪೂರೈಸಬೇಕು. ಕುಡಿಯುವ ನೀರು ಸಮಸ್ಯೆ ನಿವಾರಣೆಗೆ ಅನುಕೂಲವಾಗುವಂತೆ ಜಿಲ್ಲೆಯ ಪ್ರತಿಯೊಂದು ಪಂಚಾಯಿತಿಗಳು ಕೂಡಲೇ ಸ್ವಂತ ಟ್ಯಾಂಕರ್ ಖರೀದಿಸಲು ಕ್ರಮ ಕೈಗೊಳ್ಳಬೇಕು ಎಂದು ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಸೂಚನೆ ನೀಡಿದರು.
ಬರ ನಿರ್ವಹಣೆ ಕುರಿತು ಸುವರ್ಣ ವಿಧಾನಸೌಧದಲ್ಲಿ ಶುಕ್ರವಾರ ನಡೆದ ಜನಪ್ರತಿನಿಧಿಗಳು ಹಾಗೂ ಹಿರಿಯ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪ್ರತಿ ಗ್ರಾಮ ಪಂಚಾಯಿತಿಗೆ ಒಂದು ಸ್ವಂತ ಟ್ಯಾಂಕರ್ ಹೊಂದಲು ಕೆಲವು ವರ್ಷಗಳ ಹಿಂದೆ ಸೂಚಿಸಲಾಗಿತ್ತು. ಆದ್ದರಿಂದ ಈ ಬಾರಿ ಪ್ರತಿ ಗ್ರಾಮ ಪಂಚಾಯಿತಿ ಕಡ್ಡಾಯವಾಗಿ ಟ್ಯಾಂಕರ್ ಖರೀದಿಸಿ ತಮಗೆ ಪಟ್ಟಿ ಒದಗಿಸಬೇಕು. ಒಂದು ವೇಳೆ ಟ್ಯಾಂಕರ್ ಖರೀದಿ ಮಾಡದಿದ್ದರೆ ಸಂಬಂಧಿಸಿದ ಗ್ರಾಪಂ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಕುಡಿಯುವ ನೀರಿನ ಸಮಸ್ಯೆಗೆ ಸಂಬಂಧಿಸಿದಂತೆ ಟಾಸ್ಕ್ ಫೋರ್ಸ್ ಸಭೆಗಳನ್ನು ನಡೆಸಿ ಸೂಕ್ತ ಯೋಜನೆ ರೂಪಿಸಬೇಕು ಎಂದು ಸಲಹೆ ನೀಡಿದರು.
ಜಲಜೀವನ್ ಮಿಷನ್ ಯೋಜನೆಯಡಿ ಕಾಮಗಾರಿ ಕಳಪೆ: ಮುಂಗಾರು ಹಾಗೂ ಹಿಂಗಾರು ಹಂಗಾಮಿನಲ್ಲಿ ಮಳೆ ಕೊರತೆ ಹಿನ್ನೆಲೆ ರೈತರು ಸಂಕಷ್ಟದಲ್ಲಿದ್ದಾರೆ. ಆದ್ದರಿಂದ ಬೆಳೆ ಪರಿಹಾರ ಹಾಗೂ ಮೇವು ಪೂರೈಕೆಗೆ ಕ್ರಮ ವಹಿಸಬೇಕು. ನರೇಗಾ ಯೋಜನೆಯಡಿ ಸಮರ್ಪಕ ಬರ ನಿರ್ವಹಣೆಗೆ ಅನುಕೂಲವಾಗುವಂತಹ ಮತ್ತು ಶಾಶ್ವತ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಬೇಕು.
ಅದೇ ರೀತಿ ಬಹುತೇಕ ಕಡೆ ಜಲಜೀವನ ಮಿಷನ್ ಯೋಜನೆಯ ಕಾಮಗಾರಿಗಳು ಕಳಪೆಯಾಗಿವೆ ಎಂದು ಸಾರ್ವಜನಿಕರಿಂದ ದೂರುಗಳು ಬರುತ್ತಿವೆ. ಆದ್ದರಿಂದ ಕುಡಿಯುವ ನೀರಿನ ಯೋಜನೆಗಳನ್ನು ನಿಗದಿತ ಕಾಲಮಿತಿಯಲ್ಲಿ ಪೂರ್ಣಗೊಳಿಸಬೇಕು ಎಂದು ಸಚಿವರು ಹೇಳಿದರು.
ಬರ ನಿರ್ವಹಣೆಗೆ ರಾಜ್ಯ ಸರಕಾರ ಈಗಾಗಲೇ ಜಿಲ್ಲೆಗೆ 22.50 ಕೋಟಿ ಬಿಡುಗಡೆ ಮಾಡಿದ್ದು, ಒಟ್ಟಾರೆ 32 ಕೋಟಿ ರೂಪಾಯಿ ಹಣ ಲಭ್ಯವಿರುತ್ತದೆ. ಬರ ನಿರ್ವಹಣೆ ಕಾಮಗಾರಿಗಳಿಗೆ ಹಣಕಾಸಿನ ತೊಂದರೆಯಿಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟ ಪಡಿಸಿದರು. ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಮಾತನಾಡಿ, ಏಪ್ರಿಲ್ ವೇಳೆಗೆ ಬರಗಾಲದ ತೀವ್ರ ಸಮಸ್ಯೆಗಳು ಕಂಡುಬರಲಿವೆ. ಆದ್ದರಿಂದ ಕುಡಿಯುವ ನೀರು, ವಿದ್ಯುತ್, ಜಾನುವಾರುಗಳಿಗೆ ಮೇವು ಮತ್ತಿತರ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು.
ಭೂಸ್ವಾಧೀನ ಮಾಡಿಕೊಂಡು ಬಳಕೆ ಮಾಡದಿರುವ ಪ್ರಕರಣಗಳಿಗೆ ಸಂಬಂಧಿಸಿದಂತೆ ದಾಖಲಾತಿ ದೊರಕದಿರುವುದರಿಂದ ರೈತರು ಸಮಸ್ಯೆ ಎದುರಿಸುತ್ತಿದ್ದಾರೆ. ಆದ್ದರಿಂದ ಕಂದಾಯ, ವಿಶೇಷ ಭೂಸ್ವಾಧೀನಾಧಿಕಾರಿಗಳು, ನೀರಾವರಿ ಇಲಾಖೆ ಅಧಿಕಾರಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ ಪರಿಹಾರ ಕಂಡುಕೊಳ್ಳಬೇಕು ಎಂದು ತಿಳಿಸಿದರು.