ಬೆಳಗಾವಿ: ಜಿಲ್ಲೆಯ ಐದು ತಾಲೂಕುಗಳ 51 ಗ್ರಾಮಗಳಲ್ಲಿ ನೀರು ನುಗ್ಗಿದೆ. 26 ಕಾಳಜಿ ಕೇಂದ್ರಗಳನ್ನು ತೆರೆದು 2,000 ಜನರಿಗೆ ಆಶ್ರಯ ನೀಡಲಾಗಿದೆ ಎಂದು ಡಿಸಿಎಂ ಗೋವಿಂದ ಕಾರಜೋಳ ಮಾಹಿತಿ ನೀಡಿದ್ದಾರೆ.
ಅತಿವೃಷ್ಟಿ ಪ್ರದೇಶದಲ್ಲಿ ಪ್ರವಾಹ ಸಿದ್ಧತೆಗಳ ಕುರಿತು ಸಿಎಂ ನಡೆಸಿದ ವಿಡಿಯೋ ಸಂವಾದದಲ್ಲಿ ಮಾತನಾಡಿದ ಅವರು, ಬೆಳಗಾವಿ ಜಿಲ್ಲೆಯಲ್ಲಿ 47 ರಸ್ತೆ ಸಂಚಾರ ಸ್ಥಗಿತಗೊಂಡಿದ್ದು, 51 ಗ್ರಾಮಗಳು ಜಲಾವೃತಗೊಂಡಿವೆ. 224 ಮನೆಗಳು ಭಾಗಶಃ ಹಾಗೂ ಒಂದು ಮನೆ ಸಂಪೂರ್ಣ ಕುಸಿದಿವೆ. ಯಾವುದೇ ಜೀವಹಾನಿಯಾಗಿರುವುದಿಲ್ಲ ಎಂದು ವಿವರಿಸಿದರು.
ಜಿಲ್ಲೆಯಲ್ಲಿ ವಾಡಿಕೆಗಿಂತ ಜಾಸ್ತಿ ಮಳೆಯಾಗಿರುವುದರಿಂದ ಜಿಲ್ಲಾ ಮುಖ್ಯ ರಸ್ತೆಗಳು ಸೇರಿ 47 ರಸ್ತೆ ಸಂಚಾರ ಸ್ಥಗಿತಗೊಂಡಿರುತ್ತದೆ. ಇದಲ್ಲದೇ 36 ಸೇತುವೆ ಮುಳುಗಡೆಯಾಗಿವೆ. ಅದೇ ರೀತಿ ಭೂಕುಸಿತದಿಂದ ನಿಪ್ಪಾಣಿಯ ಯಮಗರ್ಣಿ ಬಳಿ ರಾಷ್ಟ್ರೀಯ ಹೆದ್ದಾರಿ ಬಂದ್ ಆಗಿದೆ. ಕಳೆದ 24 ಗಂಟೆಗಳಲ್ಲಿ 6 ಮಿ.ಮೀ. ವಾಡಿಕೆ ಮಳೆಯಾಗಬೇಕಿತ್ತು. ಆದರೆ 66 ಮಿ.ಮೀ. ಮಳೆಯಾಗಿರುವುದರಿಂದ ತೊಂದರೆಯಾಗಿದೆ. ಜಿಲ್ಲೆಯ ಐದು ತಾಲ್ಲೂಕುಗಳ 51 ಗ್ರಾಮಗಳಲ್ಲಿ ನೀರು ನುಗ್ಗಿದೆ. 26 ಕಾಳಜಿ ಕೇಂದ್ರ 2,000 ಜನರಿಗೆ ಆಶ್ರಯ ನೀಡಲಾಗಿದೆ.
ಖಾನಾಪುರ ತಾಲ್ಲೂಕಿನಲ್ಲಿ ವಿದ್ಯುತ್ ಅಪಘಾತದಿಂದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದು, ಸೂಕ್ತ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗುವುದು. ಅದೇ ರೀತಿ 223 ಮನೆಗಳಿಗೆ ಭಾಗಶಃ ಹಾನಿಯಾಗಿದ್ದು, ಒಂದು ಮನೆ ಸಂಪೂರ್ಣ ಕುಸಿತವಾಗಿದೆ. ಮನೆ ಹಾನಿಗೂ ಸೂಕ್ತ ಪರಿಹಾರಕ್ಕೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿಗಳಿಗೆ ತಿಳಿಸಿದರು.
ರಸ್ತೆ ದುರಸ್ತಿಗೆ 50 ಕೋಟಿ ಬಿಡುಗಡೆಗೆ ಮನವಿ: ರಸ್ತೆ, ಕಟ್ಟಡಗಳು ಸೇರಿದಂತೆ ಮೂಲಸೌಕರ್ಯಗಳ ದುರಸ್ತಿಗೆ ಬೆಳಗಾವಿ, ಉತ್ತರ ಕನ್ನಡ ಸೇರಿ ಲೋಕೋಪಯೋಗಿ ಇಲಾಖೆಗೆ ತಕ್ಷಣವೇ 50 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಬೇಕು ಎಂದು ಸಚಿವ ಗೋವಿಂದ ಕಾರಜೋಳ ಒತ್ತಾಯಿಸಿದರು.
ತುರ್ತು ಪರಿಸ್ಥಿತಿಯನ್ನು ಸಮರ್ಪಕವಾಗಿ ಬೆಳಗಾವಿ ಹಾಗೂ ಬಾಗಲಕೋಟೆಗೆ ತಲಾ ಇನ್ನೊಂದು ಎನ್.ಡಿ.ಆರ್.ಎಫ್ ತಂಡ ನಿಯೋಜಿಸಬೇಕು. ಸದ್ಯಕ್ಕೆ 95 ಸಾವಿರ ಕ್ಯುಸೆಕ್ ನೀರು ಘಟಪ್ರಭಾ ನದಿಗೆ ಹರಿದುಬರುತ್ತಿದ್ದು, ಇದರಿಂದ ಬಾಗಲಕೋಟೆಗೂ ಕೂಡ ಪ್ರವಾಹ ಭೀತಿ ಎದುರಾಗಿದೆ. ಅತಿವೃಷ್ಟಿಯಿಂದ ಹಾನಿಗೊಳಗಾದ ರಸ್ತೆ ಮತ್ತಿತರ ಮೂಲಸೌಕರ್ಯಗಳ ದುರಸ್ತಿಗಾಗಿ ಲೋಕೋಪಯೋಗಿ ಇಲಾಖೆಗೆ ಸಾವಿರ ಕೋಟಿ ರೂಪಾಯಿ ಅನುದಾನದ ಅಗತ್ಯವಿದೆ ಎಂದು ಹೇಳಿದರು.