ಬೆಳಗಾವಿ:ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ನಾಳೆಯಿಂದ ಎರಡು ದಿನಗಳ ಕಾಲ ಉತ್ತರ ಕರ್ನಾಟಕ ಪ್ರವಾಸ ಕೈಗೊಂಡಿದ್ದು, ಬಾದಾಮಿ ಹಾಗೂ ಬೆಳಗಾವಿ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ನೆರೆ ಸಂತ್ರಸ್ತರ ಸಮಸ್ಯೆಗಳನ್ನು ಆಲಿಸಲಿದ್ದಾರೆ.
ನಾಳೆ (ಜು.26) ಬೆಳಿಗ್ಗೆ 11 ಗಂಟೆಗೆ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸುವ ಸಿದ್ದರಾಮಯ್ಯ, ರಸ್ತೆ ಮಾರ್ಗವಾಗಿ ಬಾದಾಮಿ ವಿಧಾನಸಭೆ ಕ್ಷೇತ್ರದ ಪ್ರವಾಹ ಪೀಡಿತ ಪ್ರದೇಶಗಳಾದ ಕೊಣ್ಣೂರು, ಗೋವಿನಕೊಪ್ಪ, ಹೆಬ್ಬಳ್ಳಿ ಗ್ರಾಮಗಳಿಗೆ ಭೇಟಿ ನೀಡಲಿದ್ದಾರೆ.
ಬಳಿಕ ಬಾಗಲಕೋಟೆಯಿಂದ 6ಗಂಟೆಗೆ ನಿರ್ಗಮಿಸುವ ಸಿದ್ದರಾಮಯ್ಯ, ರಾತ್ರಿ 8.30ಕ್ಕೆ ಬೆಳಗಾವಿ ಆಗಮಿಸಲಿದ್ದು, ಅಂದು ರಾತ್ರಿ ನಗರದ ಪ್ರವಾಸಿ ಮಂದಿರದಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಮರುದಿನವೇ (ಜುಲೈ 27)ರಂದು ಬೆಳಗಾವಿ ಜಿಲ್ಲೆ ಖಾನಾಪುರ, ಸಂಕೇಶ್ವರ, ಯಮಕನಮರಡಿ ಕ್ಷೇತ್ರದ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ, ಪ್ರವಾಹದ ಪರಿಸ್ಥಿತಿಯನ್ನು ಅವಲೋಕಿಸಲಿದ್ದಾರೆ.
ಸಂಜೆ 7.20ಕ್ಕೆ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ಪ್ರಯಾಣ ಬೆಳಸಲಿದ್ದಾರೆ. ಇನ್ನು ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ, ಶಾಸಕರುಗಳಾದ ಲಕ್ಷ್ಮೀ ಹೆಬ್ಬಾಳ್ಕರ್, ಅಂಜಲಿ ನಿಂಬಾಳ್ಕರ್, ಮಹಾಂತೇಶ ಕೌಜಲಗಿ, ಗಣೇಶ ಹುಕ್ಕೇರಿ, ಮಾಜಿ ಶಾಸಕರು, ಕಾಂಗ್ರೆಸ್ ಮುಖಂಡರು ಸಾಥ್ ನೀಡಲಿದ್ದಾರೆ.