ರಾಜ್ಯ ಸರ್ಕಾರ ವರ್ಗಾವಣೆ ದಂಧೆಯಲ್ಲಿ ಪೈಪೋಟಿ ನಡೆಸುತ್ತಿದೆ : ಮಾಜಿ ಸಿಎಂ ಬೊಮ್ಮಾಯಿ ವಾಗ್ದಾಳಿ ಬೆಳಗಾವಿ : "ರಾಜ್ಯ ಸರ್ಕಾರ ಸಂಪೂರ್ಣವಾಗಿ ವರ್ಗಾವಣೆ ದಂಧೆಯಲ್ಲಿ ನಿರತವಾಗಿದೆ. ಅಧಿಕಾರಿಗಳ ವರ್ಗಾವಣೆಗಾಗಿ ಸರ್ಕಾರದಲ್ಲಿ ಪೈಪೋಟಿ ನಡೆಯುತ್ತಿದೆ" ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಎಲ್ಲರೂ ವರ್ಗಾವಣೆ ದಂಧೆಯಲ್ಲಿದ್ದಾರೆ. ಮೊನ್ನೆ ನಡೆದ ಸಭೆ ವರ್ಗಾವಣೆಯ ಪೈಪೋಟಿ, ಭ್ರಷ್ಟಾಚಾರದ ಪೈಪೋಟಿ ಅಷ್ಟೇ. ಇದೀಗ ವರ್ಗಾವಣೆ ದಂಧೆಯಲ್ಲಿ ಚೌಕಾಸಿ ನಡೆಯುತ್ತಿದೆ" ಎಂದು ಹೇಳಿದರು.
"ಲೋಕಸಭೆ ಚುನಾವಣೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಎದುರಿಸುತ್ತೇವೆ. ಈಗಾಗಲೇ ಚುನಾವಣೆಗೆ ತಯಾರಿ ಮಾಡಿಕೊಳ್ಳುತ್ತಿದ್ದೇವೆ, ಜಿಲ್ಲಾವಾರು ಸಭೆ ಮಾಡುತ್ತೇವೆ. ಅದೇ ರೀತಿ ಬಿಜೆಪಿ ರಾಜ್ಯಾಧ್ಯಕ್ಷರ ನೇಮಕ ಆದಷ್ಟು ಬೇಗ ಆಗಲಿದೆ" ಎಂದರು.
"ರಾಜ್ಯದಲ್ಲಿ ಅತಿವೃಷ್ಠಿಯಿಂದಾಗಿ ಮನೆಗಳ ಹಾನಿ, ಜಾನುವಾರು ಸಾವು ದೊಡ್ಡ ಪ್ರಮಾಣದಲ್ಲಿ ಆಗಿದೆ. ಸುಮಾರು 11 ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಇದೆ. ಉಳಿದ ಜಿಲ್ಲೆಗಳಲ್ಲಿ ಬರದ ಛಾಯೆ ಇದೆ. ರಾಜ್ಯ ಸರ್ಕಾರ ಈ ಬಗ್ಗೆ ಗಮನಿಸುತ್ತಿಲ್ಲ. ಮುಖ್ಯಮಂತ್ರಿಗಳು ವಿಡಿಯೋ ಸಂವಾದ ಮಾಡುವುದು ಬಿಟ್ಟರೆ ಯಾವುದೇ ಪರಿಹಾರ ಕಾರ್ಯ ನಡೆದಿಲ್ಲ" ಎಂದು ದೂರಿದರು.
"ಮನೆ ಕಳೆದುಕೊಂಡವರಿಗೆ ತಕ್ಷಣವೇ 10 ಸಾವಿರ ರೂ ಪರಿಹಾರ ಕೊಡಬೇಕು. ಆದರೆ ಅದು ಸಾಧ್ಯವಾಗಿಲ್ಲ. ಬೆಳೆ ನಾಶ ಆಗಿರುವುದಕ್ಕೆ ಪ್ರಾಥಮಿಕ ಸಮೀಕ್ಷೆಯೂ ಆಗಿಲ್ಲ. ದೊಡ್ಡ ಪ್ರಮಾಣದಲ್ಲಿ ಪ್ರಾಣಹಾನಿ ಆಗಿದೆ, ಸರ್ಕಾರ ಇದನ್ನು ಗಮನಿಸುತ್ತಿಲ್ಲ. ಯಾವ ಸಚಿವರೂ ಪ್ರವಾಹಪೀಡಿತ ಪ್ರದೇಶಗಳಿಗೆ ಭೇಟಿ ನೀಡಿಲ್ಲ. ಬರಪೀಡಿತ ಪ್ರದೇಶಗಳಿಗೆ ಬೇರೆ ಬೆಳೆ ಬೆಳೆಯಲು ಬೀಜ ಗೊಬ್ಬರ ಕೊಡುವ ವ್ಯವಸ್ಥೆ ಆಗಿಲ್ಲ" ಎಂದು ಬೊಮ್ಮಾಯಿ ವಾಗ್ದಾಳಿ ನಡೆಸಿದರು.
"ಸರ್ಕಾರದವರು ಕೇವಲ ರಾಜಕಾರಣದಲ್ಲಿ ತೊಡಗಿದ್ದಾರೆ. ತಮ್ಮ ಸ್ಥಾನವನ್ನು ಉಳಿಸಿಕೊಳ್ಳಲು ಹೆಣಗಾಡುತ್ತಿದ್ದಾರೆ. ಸಚಿವರು ಹಾಗೂ ಶಾಸಕರ ನಡುವಿರುವ ಸಮರ ಬಗೆಹರಿಸುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಲ ಕಳೆಯುತ್ತಿದ್ದಾರೆ. ರಾಜ್ಯದ ಜನರು ಇಂದು ಸಂಕಷ್ಟದಲ್ಲಿ ಸಿಲುಕಿಕೊಂಡಿದ್ದಾರೆ, ಅವರ ನೆರವಿಗೆ ಸರ್ಕಾರ ಧಾವಿಸಿಲ್ಲ. ಕೂಡಲೇ ಎಲ್ಲ ಸಚಿವರು ಪ್ರವಾಹಪೀಡಿತ ಪ್ರದೇಶಗಳಿಗೆ ಭೇಟಿ ಕೊಡಬೇಕು. ಸಾವು ನೋವಾದ ಸ್ಥಳಕ್ಕೆ ಭೇಟಿ ನೀಡಿ ಸಾಂತ್ವನ ಹೇಳಬೇಕು. ನಮ್ಮ ಸರ್ಕಾರದ ಸಮಯದಲ್ಲಿ ಪೂರ್ಣ ಮನೆ ಬಿದ್ದವರಿಗೆ 5 ಲಕ್ಷ ಪರಿಹಾರ ನೀಡಿದ್ದೇವೆ. ಆ ರೀತಿಯ ಮಾನದಂಡ ಅನುಸರಿಸಿ ಈಗಲೂ ಪರಿಹಾರ ನೀಡಬೇಕು. ತಕ್ಷಣವೇ ಸಂತ್ರಸ್ತರಿಗೆ 10 ಸಾವಿರ ಪರಿಹಾರ ಕೊಡಬೇಕು" ಎಂದು ಒತ್ತಾಯಿಸಿದರು.
"ನಾವು ಹಿಂದೆ ಕೊಟ್ಟಿದ್ದ ಮಾದರಿಯಲ್ಲಿ ಅದೇ ಮಾನದಂಡ ಅನುಸರಿಸಿ ಈಗಲೂ ರೈತರಿಗೆ ಪರಿಹಾರ ಕೊಡಬೇಕು. ಕೂಡಲೇ ಸರ್ಕಾರ ಎಚ್ಚೆತ್ತುಕೊಂಡು ಅಧಿಕಾರಿಗಳಿಗೆ ಸೂಚನೆ ನೀಡಬೇಕು. ನಮ್ಮ ಅನುಭವದಿಂದ ಹೇಳುತ್ತಿದ್ದೇನೆ, ತಕ್ಷಣವೇ ಮಂತ್ರಿಗಳು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಬೇಕು. ಹಾಗಾಗದಿದ್ದರೆ ಈ ಸರ್ಕಾರ ಇದ್ದರೆಷ್ಟು, ಬಿಟ್ಟರೆಷ್ಟು" ಎಂದು ಕಿಡಿಕಾರಿದರು.
ಬೆಳಗಾವಿಯಲ್ಲಿ ವಿಶೇಷಚೇತನ ವ್ಯಕ್ತಿಯ ಮೇಲೆ ಪೊಲೀಸರ ಮಾರಣಾಂತಿಕ ಹಲ್ಲೆ ಪ್ರಕರಣ ವಿಚಾರಕ್ಕೆ, "ಸಮಾಜಘಾತುಕ ಶಕ್ತಿಗಳು ಈಗ ನಿರ್ಭಯವಾಗಿ ಓಡಾಡುತ್ತಿದ್ದಾರೆ. ಇವುಗಳಿಗೆ ಈಗ ಸರ್ಕಾರವೇ ಬೆಂಬಲ ನೀಡುತ್ತಿದೆ. ಭಯ ಹೋಗಿದೆ, ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದೆ. ಸಾಮಾನ್ಯ ಜನರ ಮೇಲೆ ಹಲ್ಲೆ, ಹೆಣ್ಣುಮಕ್ಕಳ ಮೇಲೆ ಹಲ್ಲೆ ನಡೆಯುತ್ತಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸರಿಯಿಲ್ಲ, ಸರ್ಕಾರ ಸಂಪೂರ್ಣ ವಿಫಲವಾಗಿದೆ. ಕೂಡಲೇ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳದಿದ್ದರೆ ಜನರೇ ಸರ್ಕಾರದ ವಿರುದ್ಧ ದಂಗೆ ಏಳುತ್ತಾರೆ" ಎಂದು ಬೊಮ್ಮಾಯಿ ಎಚ್ಚರಿಸಿದರು.
ಇದನ್ನೂ ಓದಿ :ಮಂಡ್ಯ ಕಾರು ಅಪಘಾತ: ಮುಖ್ಯಮಂತ್ರಿ ನಿಧಿಯಿಂದ ತಲಾ ₹2 ಲಕ್ಷ ಪರಿಹಾರ ಘೋಷಣೆ